ಏಡ್ಸ್ ಜಾಗೃತಿ ಜಾಥಾಗೆ ಡಿಸಿ ಚಾಲನೆ
ಕೋಲಾರ: ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದಿಂದ ಭಾನುವಾರ ಹಮ್ಮಿಕೊಂಡಿದ್ದ ಜನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಿ.ಕೆ. ರವಿ ಅವರು ಚಾಲನೆ ನೀಡಿದರು.
ನಗರದ ಪ್ರವಾಸಿ ಮಂದಿರದಿಂದ ಹೊರಟ ಜಾಥಾದಲ್ಲಿ ಸಹ್ಯಾದ್ರಿ ಕಾಲೇಜು, ಪವನ್ ಕಾಲೇಜು, ಸರ್ಕಾರಿ ಮಹಿಳಾ ಐಟಿಐ, ವಿವಿಧ ನರ್ಸಿಂಗ್ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಲೈಂಗಿಕ ಕಾರ್ಯಕರ್ತರು, ಸೌಖ್ಯ ಸಮೃದ್ಧಿ ಸಂಸ್ಥೆಯ ಪ್ರತಿನಿಧಿಗಳು ಹಾಗೂ ಲಯನ್ಸ್ ಮತ್ತು ರೋಟರಿ ಕ್ಲಬ್ ಪಪದಾಧಿಕಾರಿಗಳು ಪಾಲ್ಗೊಂಡಿದ್ದರು. ಜಿಲ್ಲಾಧಿಕಾರಿ ಡಿ.ಕೆ. ರವಿ ಕಾರ್ಯಕ್ರಮ ಉದ್ಘಾಟಿಸಿದರೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ನಿವಾಸ್ ಸಪೆಟ್ ಅವರು ಏಡ್ಸ್ ರೋಗದ ಬಗ್ಗೆ ಜಾಗೃತಿ ಮೂಡಿಸುವ ಕರಪತ್ರಗಳನ್ನು ಬಿಡುಗಡೆ ಮಾಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಭಾರ ಅಧಿಕಾರಿ ಡಾ. ನಾರಾಯಣಸ್ವಾಮಿ, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ರಾಜಕುಮಾರ್, ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿ ಸೋಮಶೇಖರ್, ರೋಟರಿ ಸಂಸ್ಥೆಯ ಗಾರವೇಂದ್ರ ಬಾಲಾಜಿ, ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಜಿ. ಶ್ರೀನಿವಾಸ್, ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ನಾಗರಾಜಗೌಡ, ತಿಗಳರ ಸಮುದಾಯದ ಮುಖಂಡ ಪಲ್ಗುಣ, ಬೆಳಮಾರನಹಳ್ಳಿ ಆನಂದ್, ಸೌಖ್ಯ ಸಮೃದ್ಧಿ ಸಂಸ್ಥೆಯ ಸಿಒ ರುದ್ರೇಶ್ ಇದ್ದರು.