ಅಂಗವಿಕಲರಿಗೆ ಮೀಸಲಾತಿ ಪ್ರಮಾಣ ಹೆಚ್ಚಲಿ
ಕೋಲಾರ: ರಾಜ್ಯ ಸರ್ಕಾರ ಅಂಗವಿಕಲರಿಗೆ ಪ್ರಸ್ತುತ ಮೀಸಲಿಟ್ಟಿರುವ ಶೇ.3ರ ಮೀಸಲಾತಿಯನ್ನು ಕನಿಷ್ಠ ಶೇ.5ಕ್ಕೆ ಹೆಚ್ಚಳ ಮಾಡುವ ಮೂಲಕ ಎಲ್ಲರಂತೆ ಅಂಗವಿಕಲರು ಸಹ ಉತ್ತಮ ಜೀವನ ನಡೆಸುವುದಕ್ಕೆ ಅವಕಾಶ ಕಲ್ಪಿಸಬೇಕೆಂದು ಜಿಪಂ ಅಧ್ಯಕ್ಷ ತೂಪಲ್ಲಿ ನಾರಾಯಣಸ್ವಾಮಿ ಒತ್ತಾಯಿಸಿದರು.
ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ, ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲೆಯ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿಶ್ವ ಅಂಗವಿಕಲರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಪೋಷಕರು ತಮ್ಮ ಮಕ್ಕಳು ಅಂಗವಿಕಲರಾಗಿದ್ದಲ್ಲಿ ಪಾಪದಿಂದ ಈ ಮಕ್ಕಳು ಹುಟ್ಟಿವೆ ಎಂದು ಭಾವಿಸಬಾರದು. ದೇವರ ಸೃಷ್ಟಿಗೆ ಪ್ರತಿಯೊಬ್ಬರೂ ತಲೆ ಬಾಗಬೇಕು. ಸರ್ಕಾರಗಳು ಈಗ ಅಂಗವಿಕಲ ಮಕ್ಕಳ ಕಲ್ಯಾಣಕ್ಕಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿರುವುದರಿಂದ ತಮ್ಮ ಮಕ್ಕಳ ಭವಿಷ್ಯಕ್ಕಾಗಿ ಈ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ಸಮಾಜದ ಮುಖ್ಯ ವಾಹಿನಿಗೆ ಬರುವಂತೆ ಮಾಡಿ ಎಂದು ಸಲಹೆ ನೀಡಿದರು.
ಅಂಗವಿಕಲರ ಕಾರ್ಯಕ್ರಮಗಳಿಗೆ ಭಾಗವಹಿಸಿದೆ ನಿರ್ಲಕ್ಷ್ಯ ತೋರುವಂತಹ ಅಧಿಕಾರಿಗಳ ಮೇಲೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವಂತೆ ಜಿಪಂ ಸಿಇಒ ಎಂ.ಎಸ್.ಝುಲ್ಫಿಖಾರ್ ಉಲ್ಲಾ ಅವರಿಗೆ ಸೂಚನೆ ನೀಡಿದರು.
ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ್ ಮಾತನಾಡಿ, ಸರ್ಕಾರ ಅಂಗವಿಕಲರಿಗೆ ನೀಡುತ್ತಿರುವ ಸವಲತ್ತುಗಳು ಫಲಾನುಭವಿಗಳಿಗೆ ಸರಿಯಾಗಿ ಸೇರುತ್ತಿಲ್ಲ. ಅಂಗವಿಕಲ ಮಕ್ಕಳ ಬಗ್ಗೆ ಅಧಿಕಾರಿಗಳು, ಸಂಘ ಸಂಸ್ಥೆಗಳು ಬೇಧ ಭಾವ ತೋರದೆ ಸರ್ಕಾರದ ಸವಲತ್ತುಗಳನ್ನು ಪ್ರಾಮಾಣಿಕವಾಗಿ ತಲುಪಿಸಬೇಕೆಂದು ತಿಳಿಸಿದರು.
ಜಿಪಂ ಉಪಾಧ್ಯಕ್ಷೆ ಆಲವೇಲಮ್ಮ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಸಿಇಒ ಝಲ್ಪಿಕಾರ್ ಉಲ್ಲಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಫೈಯಾಜ್ಖಾನ್, ಜಾಗೃತಿ ಸೇವಾ ಸಮಿತಿಯ ಧನರಾಜ್, ನಿಮ್ಹಾನ್ಸ್ ಸಂಸ್ಥೆಯ ಪ್ರತಿನಿಧಿ ಅರುಣ್ಕುಮಾರ್, ಕಲಾವಿದ ಪಿ.ಮುನಿರೆಡ್ಡಿ, ಅಂಗವಿಕಲರ ಸ್ವಯಂ ಸೇವಾ ಸಂಸ್ಥೆಯ ಅಧ್ಯಕ್ಷ ಬಂಗಾರಪೇಟೆಯ ಶ್ರೀನಿವಾಸ್ ಇದ್ದರು.
ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶಕುಂತಲಾ ಪ್ರಾಸ್ತಾವಿಕವಾಗಿ ಮಾತನಾಡಿ ಸರ್ಕಾರ ಅಂಗವಿಕಲರಿಗಾಗಿ ಜಾರಿಗೆ ತಂದಿರುವ ಕಾರ್ಯಕ್ರಮಗಳನ್ನು ವಿವರಿಸಿದರು.
ಅಂಗವಿಕಲರು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮ ಎಲ್ಲರ ಮೆಚ್ಚುಗೆ ಪಾತ್ರವಾಯಿತು. ಅನಿತಾ ನಿರೂಪಿಸಿ, ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಎಚ್.ಸಿ.ನಾಗಮಣಿ ಸ್ವಾಗತಿಸಿದರು.