ಅರ್ಕಾವತಿ ನದಿ ಪಾತ್ರ ಒತ್ತುವರಿ ತೆರವು ಕಾರ್ಯ ಯೋಜನೆಗೆ ಆದೇಶ
ಬೆಂಗಳೂರು: ಅರ್ಕಾವತಿ ನದಿ ಪಾತ್ರ ಒತ್ತುವರಿ ಮಾಡಿಕೊಂಡು ನಿರ್ಮಾಣವಾಗಿರುವ ಕಾರ್ಖಾನೆಗಳಿಂದ ಪರಿಸರ ಮಾಲಿನ್ಯ ಉಂಟಾಗುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಹೈಕೋರ್ಟ್, ಒತ್ತುವರಿ ತೆರವು ಕ್ರಮಗಳ ಕುರಿತು ನಿಗಾವಹಿಸಲು ಪ್ರತ್ಯೇಕ ಸಮಿತಿ ರಚಿಸುವಂತೆ ಆದೇಶಿಸಿದೆ.
ನದಿಪಾತ್ರಗಳ ಒತ್ತುವರಿ ಕುರಿತು ಸ್ಪಷ್ಟ ಮಾಹಿತಿ ನೀಡಲು ಬಿಬಿಎಂಪಿ ಹಾಗೂ ಬಿಡಿಎ ಅಧಿಕಾರಿಗಳು ವಿಫಲರಾದ ಹಿನ್ನೆಲೆಯಲ್ಲಿ, ಅವರನ್ನು ತರಾಟೆಗೆ ತೆಗೆದುಕೊಂಡ ನ್ಯಾ.ಎಂ.ಎನ್.ವೇಣುಗೋಪಾಲ್ ಅವರಿದ್ದ ಏಕಸದಸ್ಯ ಪೀಠ, ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು ಎಂದು ತಿಳಿ ಹೇಳಿದೆ. ಎಂ.ಭಾಸ್ಕರ್ ಎಂಬುವರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಪೀಠ, ಡಿಸೆಂಬರ್ 11ರಂದು ಈ ಸಂಬಂಧ ಬಿಡಿಎ, ಬಿಬಿಎಂಪಿ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಸಭೆ ನಡೆಸಿ ಒತ್ತುವರಿ ತೆರವು ಸಂಬಂಧ ಕಾರ್ಯಯೋಜನೆ ರೂಪಿಸಬೇಕು ಎಂದು ಪೀಠ ತಿಳಿಸಿದೆ.
ಅರ್ಕಾವತಿ ನದಿ ಪಾತ್ರವನ್ನು ಒತ್ತುವರಿ ಮಾಡಿಕೊಂಡು ಕಟ್ಟಡಗಳನ್ನು ನಿರ್ಮಿಸಲಾಗಿದ್ದು, ಕಾರ್ಖಾನೆಗಳನ್ನು ಸ್ಥಾಪಿಸಲಾಗಿದೆ. ಇದರ ಹಿಂದೆ ಪ್ರಭಾವಿಗಳ ಕೈವಾಡವಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ಅರ್ಜಿದಾರರು ಆರೋಪಿಸಿದ್ದಾರೆ.