ಕ್ಷೀರಭಾಗ್ಯಕ್ಕೆ ಅವಧಿ ಮೀರಿದ ಪುಡಿ
ಚಿಂತಾಮಣಿ: ಅವಧಿ ಮೀರಿದ ಹಾಲಿನ ಪುಡಿ ಸರಬರಾಜು ಮಾಡುವ ಮೂಲಕ ವಿದ್ಯಾರ್ಥಿಗಳ ಜೀವದ ಒಕ್ಕೂಟ ಚಲ್ಲಾಟವಾಡುತ್ತಿದೆ ಎಂದು ಪೋಷಕರು ಆರೋಪಿಸಿದ್ದಾರೆ. ತಾಲೂಕಿನ ವ್ಯಾಪ್ತಿಯ ಶಾಲೆಗಳಿಗೆ ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ಪೂರೈಕೆ ಮಾಡಿರುವ ಹಾಲಿನ ಪುಡಿ ಪ್ಯಾಕೆಟ್‌ಗಳು ಅವಧಿ ಮೀರಿದ್ದು, ಇವುಗಳನ್ನು ಗಮನಿಸಿದ ಪೋಷಕರು ಸಂಬಂಧಪಟ್ಟ ಹಾಲು ಉತ್ಪಾದಕರ ಒಕ್ಕೂಟದ ವ್ಯವಸ್ಥಾಪಕರಿಗೆ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಶಿಕ್ಷಣ ಅಧಿಕಾರಿಗಳಿಗೆ ಮೌಖಿಕವಾಗಿ ಗಮನಕ್ಕೆ ತಂದರೂ ಕಿಮ್ಮತ್ತಿಲ್ಲದಂತಾಗಿದೆ. 3 ತಿಂಗಳಿಗೂ ಹೆಚ್ಚು ಅವಧಿ ಮೀರಿದ ಹಾಲಿನ ಪುಡಿ ಪ್ಯಾಕೆಟ್‌ಗಳನ್ನು ಸರಬರಾಜು ಮಾಡುತ್ತಿರುವ ಬಗ್ಗೆ ಕೇಳುವವರೇ ಇಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ. ಮಕ್ಕಳ ಪೌಷ್ಟಿಕಾಂಶ ಹೆಚ್ಚಿಸಲು ಸರ್ಕಾರ ಕ್ಷೀರಭಾಗ್ಯ ಯೋಜನೆ ಜಾರಿಗೆ ತಂದಿದ್ದು, ಅಧಿಕಾರಿಗಳ ಬೇಜವಾಬ್ದಾರಿ ತನದಿಂದ ಅವಧಿ ಮೀರಿದ ಹಾಲಿನ ಪುಡಿಯಿಂದ ತಯಾರಿಸಿದ ಹಾಲನ್ನು ಕುಡಿದು ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ ಆಗಬಹುದು ಎಂದು ಪೋಷಕರು ಭೀತಿಗೊಂಡಿದ್ದಾರೆ. ಜಿಲ್ಲಾಧಿಕಾರಿಗಳು ಇತ್ತ ಗಮನ ಹರಿಸಿ ಅವಧಿ ಮೀರಿದ ಹಾಲಿನ ಪುಡಿ ಪ್ಯಾಕೆಟ್‌ಗಳಿಗೆ ಕಡಿವಾಣ ಹಾಕಿ ಮಕ್ಕಳ ಪ್ರಾಣ ರಕ್ಷಣೆಗೆ ಮುಂದಾಗಬೇಕೆಂದು ಪೋಷಕರು ಆಗ್ರಹಿಸಿದ್ದಾರೆ.