ಸರ್‌ಎಂವಿ ಕ್ರೀಡಾಂಗಣ ವಿಶ್ವ ದರ್ಜೆಗೆ: ಅಂಬಿ
ಮಂಡ್ಯ: ನಗರದ ಸರ್ ಎಂ.ವಿ. ಕ್ರೀಡಾಂಗಣವನ್ನು ಅಂತಾರಾಷ್ಟ್ರೀಯ ಕ್ರೀಡಾಂಗಣವನ್ನಾಗಿ ಅಭಿವೃದ್ಧಿ ಪಡಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಅಂಬರೀಷ್ ಶನಿವಾರ ಹೇಳಿದರು.
ತಾಲೂಕಿನ ಕೀಲಾರ ಗ್ರಾಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಆಯೋಜಿಸಿದ್ದ ರಾಜ್ಯಮಟ್ಟದ ಯುವ ಜನೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಇನ್ನು ಮುಂದೆ ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ರಾಜಕೀಯ ಸೇರಿದಂತೆ ಇತರೆ ಸಭೆ-ಸಮಾರಂಭ ನಡೆಸುವುದಕ್ಕೆ ಆಸ್ಪದ ನೀಡುವುದಿಲ್ಲ. ಅದನ್ನು ಅಂತಾರಾಷ್ಟ್ರೀಯ ಕ್ರೀಡಾಂಗಣವನ್ನಾಗಿ ಪರಿವರ್ತಿಸಿ ಕೇವಲ ಕ್ರೀಡಾ ಚಟುವಟಿಕೆಗಳಿಗೆ ಮಾತ್ರೆ ಮೀಸಲಾಗಿಡಲು ಚಿಂತನೆ ನಡೆಸಲಾಗಿದೆ ಎಂದರು.
ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡುವುದು ಬೇಡ. ಚುನಾವಣೆ ಬಂದಾಗ ಮಾತ್ರ ರಾಜಕೀಯ ಮಾಡೋಣ. ಬಳಿಕ ಎಲ್ಲರೂ ಒಗ್ಗೂಡಿ ಜಿಲ್ಲೆಯ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ದುಡಿಯುವ ಮನೋಭಾವವನ್ನು ಎಲ್ಲರೂ ಬೆಳೆಸಿಕೊಳ್ಳಬೇಕಿದೆ ಎಂದು ಸಲಹೆ ನೀಡಿದರು.
ಜಿಲ್ಲೆಯ ಎಲ್ಲಾ ತಾಲೂಕುಗಳ ಅಭಿವೃದ್ಧಿಗೂ ಒಗ್ಗೂಡಿ ಕೆಲಸ ಮಾಡುತ್ತೇನೆ. ಇದರಲ್ಲಿ ಯಾವುದೇ ಮಲತಾಯಿ ಧೋರಣೆ ಅನುಸರಿಸುವುದಿಲ್ಲ. ಎಲ್ಲ ಶಾಸಕರ ವಿಶ್ವಾಸದಿಂದ ಜಿಲ್ಲೆಯ ಪ್ರಗತಿಗೆ ಒತ್ತು ನೀಡುವುದಾಗಿ ತಿಳಿಸಿದರು.
ಕೀಲಾರ ಗ್ರಾಮದಲ್ಲಿ ನಡೆಯುತ್ತಿರುವ ಯುವಜನೋತ್ಸವ ಸಮಾರಂಭಕ್ಕೆ ನಾಡಿನ ವಿವಿಧ ಭಾಗಗಳಿಂದ 1800ಕ್ಕೂ ಹೆಚ್ಚು ಮಂದಿ ಸ್ಪರ್ಧಿಗಳು ಬಂದಿದ್ದಾರೆ.
18 ವಿವಿಧ ಸ್ಪರ್ಧೆಗಳು ಯುವಜನೋತ್ಸವದಲ್ಲಿ ನಡೆಯಲಿದ್ದು, ಎಲ್ಲ ಸ್ಪರ್ಧೆಗಳನ್ನೂ ಪಾರದರ್ಶಕವಾಗಿ ನಡೆಸಲಾಗುವುದು. ಪ್ರತಿಭೆಯಿದ್ದವರಷ್ಟೇ ಪುರಸ್ಕಾರಕ್ಕೆ ಅರ್ಹರಾಗುತ್ತಾರೆ ಎಂದು ಹೇಳಿದರು.
ರಾಜ್ಯದ ವಿವಿಧೆಡೆಯಿಂದ ಅನೇಕ ಹೆಣ್ಣು ಮಕ್ಕಳು ಯುವಜನೋತ್ಸವದಲ್ಲಿ ಉತ್ಸಾಹದಿಂದ ಪಾಲ್ಗೊಳ್ಳಲು ಆಗಮಿಸಿದ್ದಾರೆ. ಗ್ರಾಮಸ್ಥರು ಅವರೆಲ್ಲರಿಗೂ ತಮ್ಮ ಮನೆಗಳಲ್ಲಿಯೇ ವಾಸ್ತವ್ಯ ಹೂಡಲು ಅವಕಾಶ ಮಾಡಿಕೊಟ್ಟಿರುವುದಕ್ಕೆ ತುಂಬು ಹೃದಯದ ಅಭಿನಂದನೆ ಸಲ್ಲಿಸುತ್ತೇನೆ ಎಂದು ಅಂಬರೀಷ್ ತಿಳಿಸಿದರು.