ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಗುಣಮಟ್ಟದ ಶಿಕ್ಷಣ ನೀಡಲು ಜಿಲ್ಲಾಧಿಕಾರಿ ಸಲಹೆ

Vishwanath S
Updated On : 19 Dec 2013, 12:59 pm

ಕ.ಪ್ರ.ವಾರ್ತೆ ,  ಕೋಲಾರ ,  ಡಿ.18
ಸರ್ಕಾರಿ ಶಾಲೆಗಳಿಗೆ ಬರುವ ಸಾಕಷ್ಟು ಮಕ್ಕಳು ಬಡವರಾಗಿದ್ದಾರೆ. ಈ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಸತ್ಪ್ರಜೆಗಳನ್ನಾಗಿ ಮಾಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಜಿಲ್ಲಾಧಿಕಾರಿ ಡಿ.ಕೆ. ರವಿ ತಿಳಿಸಿದರು.
ನಗರದ ಟಿ. ಚನ್ನಯ್ಯ ರಂಗಮಂದಿರದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಭೆ ಮತ್ತು ಕಳೆದ ಸಾರಿನಲ್ಲಿ ಎಸ್ಸೆಸ್ಸೆಲ್ಲಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆದ ಶಾಲೆಗಳಿಗೆ ಅಭಿನಂದನೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡುತ್ತಿದ್ದರು.
ಶ್ರೀಮಂತ ಮಕ್ಕಳು ಎಲ್ಲೂ ಬೇಕಾದರೂ ಹೋಗಿ ವಿದ್ಯೆ ಕಲಿಯುವಂತಹ ಅವಕಾಶಗಳಿವೆ. ಆದರೆ ಬಡವರು, ದಲಿತರು, ಹಿಂದುಳಿದ ವರ್ಗದವರು ಹಾಗೂ ಅಲ್ಪಸಂಖ್ಯಾತರಿಗೆ ಸರ್ಕಾರಿ ಶಾಲೆಗಳಲ್ಲಿ ಮಾತ್ರ ಓದುವ ಅವಕಾಶಗಳಿರುವುದರಿಂದ ಶಿಕ್ಷಕರು ಮಕ್ಕಳಿಗೆ ಗುಣಾತ್ಮಕ ಶಿಕ್ಷಣವನ್ನು ನೀಡುವ ಮೂಲಕ ಪ್ರತಿಭಾವಂತನ್ನಾಗಿ ಮಾಡಬೇಕೆಂದರು.
ಸರ್ಕಾರ ಬಡ ವಿದ್ಯಾರ್ಥಿಗಳ ಅನುಕೂಲಕ್ಕಾಗಿಯೇ  ಬಿಸಿ ಊಟದ ಯೋಜನೆ,ಕ್ಷೀರ ಭಾಗ್ಯ, ವಿದ್ಯಾಸಿರಿ, ಆರೋಗ್ಯ ಸೇವೆ, ಸೈಕಲ್, ಸಮವಸ್ತ್ರ ಇತ್ಯಾದಿ ಯೋಜನೆಗಳನ್ನು ಜಾರಿಗೆ ತಂದಿದ್ದು ಶಿಕ್ಷಕರು ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡುವ ಮೂಲಕ ಜಿಲ್ಲೆಯ ಶೈಕ್ಷಣಿಕ ಪ್ರಗತಿ ಹೆಚ್ಚಿಸಬೇಕೆಂದರು.
ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜುಲ್ಪಿಖಾರ್ ಉಲ್ಲಾ ಮಾತನಾಡಿ, ಶಿಕ್ಷಕರು ಮನಸು ಮಾಡಿದರೆ ಕಳೆದ ಬಾರಿ 4ನೇ ಸ್ಥಾನವನ್ನು ಪಡೆದ ಕೋಲಾರ ಜಿಲ್ಲೆಯನ್ನು 1ನೇ ಸ್ಥಾನಕ್ಕೆ ತೆಗೆದುಕೊಂಡು ಹೋಗಬಹುದು ಎಂದು ಹೇಳಿದರು.
ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಿನ ಫಲಿತಾಂಶ ಬರಬೇಕಾಗಿದೆ ಎಂದ ಅವರು, ಸಾಕಷ್ಟು ಬಡಮಕ್ಕಳ ಸರ್ಕಾರಿ ಶಾಲೆಗಳಿಗೆ ಬರುವುದರಿಂದ ಅವರ ಭವಿಷ್ಯ ಅತಿ ಮುಖ್ಯವಾಗಿದೆ ಎಂದು ಶಿಕ್ಷಕರಿಗೆ ಕಿವಿಮಾತು ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಜಯರಾಂ ರೆಡ್ಡಿ ಪ್ರಾಸ್ತಾವಿಕ ಭಾಷಣ ಮಾಡಿ, ಕೋಲಾರ ಜಿಲ್ಲೆ ಕಳೆದ ಸಾಲಿನಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ 4ನೇ ಸ್ಥಾನವನ್ನು ಪಡೆದಿದೆ. 84 ಶಾಲೆಗಳು ಶೇ.100 ರಷ್ಟು ಫಲಿತಾಂಶವನ್ನು ಪಡೆದಿದೆ ಎಂದು ವಿವರಿಸಿದರು.
ಈ ಬಾರಿ ಸುಮಾರು 20800 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಈಗಾಗಲೇ ಪ್ರತಿ ಶಾಲೆಯಲ್ಲಿ ಉತ್ತಮ ಫಲಿತಾಂಶ ಬರಲು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ, ಇದರ ಉಸ್ತುವಾರಿಯನ್ನು ನೋಡಿಕೊಳ್ಳಲು ನೋಡೆಲ್ ಅಧಿಕಾರಿಗಳ ನೇಮಕವಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಶೇ.100 ರಷ್ಟು ಫಲಿತಾಂಶ ಪಡೆದ ಶಾಲೆಗಳಿಗೆ ಪ್ರಶಸ್ತಿ ಮತ್ತು 10 ಸಾವಿರ ರು.ಗಳ ಚೆಕ್‌ನ್ನು ವಿತರಿಸಲಾಯಿತು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ನಾಗೇಂದ್ರ ಪ್ರಸಾದ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಜಗದೀಶ್, ದೇವರಾಜ್, ಕೃಷ್ಣಮೂರ್ತಿ, ರಾಘವೇಂದ್ರ, ವಿಷಯ ಪರಿವೀಕ್ಷಕರಾದ ಶಿವಮಾದಯ್ಯ, ವೆಂಕಟಸ್ವಾಮಿ, ಬಾಬು ಜನಾರ್ದನ, ರಾಜಣ್ಣ ಇದ್ದರು.  ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪದ್ಮನಾಭ್ ಸ್ವಾಗತಿಸಿ, ವಿಷಯ ಪರಿವೀಕ್ಷಕ ಸಿ.ಆರ್. ಅಶೋಕ್ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement