ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಶಿಕ್ಷಣಕ್ಕೆ ಒತ್ತು ನೀಡಿ: ಹಳ್ಳಿ ಮಕ್ಕಳಿಗೆ ಮಾಜಿ ಸಚಿವ ಸಲಹೆ

Vishwanath S
Updated On : 21 Dec 2013, 1:19 am

ಕೋಲಾರ: ಜಿಲ್ಲೆಯ ಮಳೆ ಬೆಳೆ ಪರಿಸ್ಥಿತಿ ಚನ್ನಾಗಿಲ್ಲ, ಗ್ರಾಮೀಣ ಪ್ರದೇಶಗಳಲ್ಲಿ ರೈತರು ವ್ಯವಸಾಯ ನಂಬಿ ಬದುಕುವುದು ಕಷ್ಟ. ತಮ್ಮ ಮಕ್ಕಳನ್ನು ಚೆನ್ನಾಗಿ ಓದಿಸಿ ವಿದ್ಯಾವಂತರನ್ನಾಗಿ ಮಾಡಿದಲ್ಲಿ ಮಾತ್ರ ನೆಮ್ಮದಿಯಿಂದ ಜೀವನ ಮಾಡಲು ಸಾದ್ಯವಾಗುತ್ತದೆ ಎಂದು ಮಾಜಿ ಸಚಿವ ಕೆ.ಶ್ರೀನಿವಾಸಗೌಡ ತಿಳಿಸಿದರು.
ತಾಲೂಕಿನ ಮಣಿಘಟ್ಟ ಗ್ರಾಮದಲ್ಲಿನ ಸರ್ಕಾರಿ ಪ್ರೌಢಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದ ಸೈಕಲ್‌ಗಳನ್ನು ವಿತರಿಸಿ ಮಾತನಾಡಿದ ಅವರು ಈಗಿನ ಕಾಲದಲ್ಲಿ ವಿದ್ಯಾಭ್ಯಾಸ ಮಾಡುವುದಕ್ಕೆ ಕಷ್ಟವಾಗಿದೆ. ರಾಜ್ಯದಲ್ಲಿ ಖಾಸಗಿ ಶಾಲೆಗಳು ಹುಟ್ಟಿಕೊಳ್ಳುತ್ತಿರುವುದರಿಂದ ಬಡ ಮಕ್ಕಳು ಓದುವುದಕ್ಕೆ ಕಷ್ಟವಾಗುತ್ತಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳು ವ್ಯಪಾರ ಮನೋಧರ್ಮದಡಿ ಶಾಲೆಗಳನ್ನು ನಡೆಸುತ್ತಿರುವುದರಿಂದ ಹಳ್ಳಿ ಮಕ್ಕಳಿಗೆ ಸರ್ಕಾರಿ ಶಾಲೆಗಳೇ ಗಟ್ಟಿ. ಪೋಷಕರು ಸರ್ಕಾರಿ ಶಾಲೆಗಳ ಬಗ್ಗೆ ಅಸಡ್ಡೆ ತೋರದೆ ಮಕ್ಕಳ ವಿದ್ಯಾಭ್ಯಾಸದ ಕಡೆ ಹೆಚ್ಚಿನ ಆದ್ಯತೆ ನೀಡಬೇಕೆಂದರು.
ಸರ್ಕಾರ ಹಳ್ಳಿಗಾಡಿನ ಮಕ್ಕಳ ವಿದ್ಯಾಭ್ಯಾಸ್ಕಕಾಗಿ ಅನೇಕ ರೀತಿಯ ಸೌಲಭ್ಯಗಳನ್ನು ನೀಡುತ್ತಿದ್ದು ಅದನ್ನು ಸದುಪಯೋಗ ಪಡಿಸಿಕೊಂಡು ಶಿಕ್ಷಣದ ಕಡೆಗೆ ಹಚ್ಚಿನ ಗಮನ ಹರಿಸಿ ಹುನ್ನತ ಹುದ್ದೆಗಳನ್ನು ಅಲಂಕರಿಸಬೇಕೆಂದು ಮಕ್ಕಳಿಗೆ ಕಿವಿಮಾತು ಹೇಳಿದರು. ಶಿಕ್ಷಕರು ಸಹ ಗ್ರಾಮೀಣ ಪ್ರದೇಶದ ಮಕ್ಕಳನ್ನು ತಮ್ಮ ಮನೆಯ ಮಕ್ಕಳಂತೆ ನೋಡಿ, ಗುಣಮಟ್ಟದ ಶಿಕ್ಷಣವನ್ನು ನೀಡಬೇಕು, ಇದಕ್ಕಾಗಿ ಪೋಷಕರ ಸಹಕಾರವೂ ಅತ್ಯಗತ್ಯ ಎಂದು ಹೇಳಿದ ಶ್ರೀನಿವಾಸಗೌಡರು ಮಣಿಘಟ್ಟದ ಪ್ರೌಢಶಾಲೆಯ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿಯಲ್ಲಿ ಅತಿ ಹೆಚ್ಚಿನ ಅಂಕಗಳಿಸಿದರೆ ಅವರಿಗೆ ನನ್ನ ಸ್ವಂತ ಹಣದಲ್ಲಿ ಸೈಕಲ್‌ಗಳನ್ನು ಕೊಡಿಸುವುದಾಗಿ ಭರವಸೆ ನೀಡಿದರು.
ಟಿಎಪಿಸಿಎಸ್ ಅಧ್ಯಕ್ಷ ನಾಗನಾಳ ಸೋಮಣ್ಣ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಪಟ್ಟಣದ ವಿದ್ಯಾರ್ಥಿಗಳಿಗಿಂತ  ಗ್ರಾಮೀಣ ಪ್ರದೇಶದ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಒಳ್ಳೆ ಫಲಿತಾಂಶ ಪಡೆದುಕೊಳ್ಳುತ್ತಿದ್ದಾರೆ. ಸರ್ಕಾರಗಳು ಸಹ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಮುಂದುವರೆಯಬೇಕೆಂದು ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಕರೆ ನೀಡಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವೆಂಕಟರಾಮರೆಡ್ಡಿ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಶಂಕರೇಗೌಡ, ಕೆಯುಡಿಎ ಮಾಜಿ ಅಧ್ಯಕ್ಷ ರವೀಂದ್ರ, ಜೆಡಿಎಸ್ ಮುಖಂಡ ಅನ್ವರ್‌ಪಾಷ, ಶಾಲೆಯ ಕಾರ್ಯದರ್ಶಿ ನಾರಾಯಣಪ್ಪ, ಕೃಷ್ಣಪ್ಪ, ನಾರಾಯಣಪ್ಪ ಮತ್ತಿತರರು ಇದ್ದರು. ಮುಖ್ಯೋಪಾಧ್ಯಾಯ ನಾರಾಯಣಪ್ಪ ಸ್ವಾಗತಿಸಿ, ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement