ಪೆರೇಸಂದ್ರ ಶಾಲೆ ವಿದ್ಯಾರ್ಥಿ ಸಾವು ಪ್ರಕರಣ ಮರುಕಳಿಸದಂತೆ ಕ್ರಮ ಕೈಗೊಳ್ಳಲು ಮನವಿ
ಚಿಕ್ಕಬಳ್ಳಾಪುರ: ತಾಲೂಕಿನ ಪೆರೇಸಂದ್ರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ತಳ್ಳಾಟದಲ್ಲಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಮರುಕಳಿಸದಿರಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಎಸ್‌ಎಫ್‌ಐ ಸಂಘಟನೆ ಸಂಚಾಲಕ ಕುಂದಲಗುರ್ಕಿ ಮುನೀಂದ್ರ ಒತ್ತಾಯಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ವಸತಿ ನಿಲಯಗಳಲ್ಲಿ ಸಮರ್ಪಕವಾದ ಮೂಲಭೂತ ಸೌಕರ್ಯಗಳ ಕೊರತೆ ಸಮಸ್ಯೆಗಳ ನಡುವೆ ವಾರ್ಡನ್‌ಗಳು ಸಹ ಬೇಜವಾಬ್ದಾರಿ, ನಿರ್ಲಕ್ಷ್ಯದಿಂದ ನಡೆದುಕೊಳ್ಳುತ್ತಿದ್ದಾರೆ. ಇದಕ್ಕೆ ಇತ್ತೀಚೆಗೆ ತಾಲೂಕಿನ ಪೆರೇಸಂದ್ರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪರಸ್ಪರ ತಳ್ಳಾಟದಲ್ಲಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ದುರ್ಘಟನೆ ಸಂಭವಿಸಿರುವುದೇ ನಿದರ್ಶನ ಎಂದು ಆರೋಪಿಸಿದರು.
ಜಿಲ್ಲೆಯಲ್ಲಿನ ಹಾಸ್ಟೆಲ್‌ಗಳಲ್ಲಿ ತಾಂಡವಾಡುತ್ತಿರುವ ಅನೇಕ ಸಮಸ್ಯೆಗಳಿಂದ ವಿದ್ಯಾರ್ಥಿಗಳು ತುಂಬಾ ತೊಂದರೆಯನ್ನು ಅನುಭವಿಸುತ್ತಿದ್ದಾರೆ. ಜಿಲ್ಲೆಯಲ್ಲಿರುವ 123 ಹಾಸ್ಟೆಲ್ ಗಳಲ್ಲಿನ 60 ಹಾಸ್ಟೆಲ್‌ಗಳಲ್ಲಿ ವಾರ್ಡನ್ ಗಳೇ ಕಾರ್ಯ ನಿರ್ವಹಿಸುತ್ತಿಲ್ಲ. ಸಮಾಜ ಕಲ್ಯಾಣ ಇಲಾಖೆ 38, ಬಿಸಿಎಂ 22 ಹಾಸ್ಟೆಲ್‌ಗಳಲ್ಲಿ ಹುದ್ದೆಗಳು ಖಾಲಿ ಇವೆ. ಇದರಿಂದ ವಿದ್ಯಾರ್ಥಿಗಳನ್ನು ನೋಡಿಕೊಳ್ಳುವುದು ಕಷ್ಟವಾಗುತ್ತಿದ್ದು ಕೂಡಲೇ ಖಾಲಿಯಿರುವ ಹುದ್ದೆಗಳನ್ನು ಸರ್ಕಾರ ಭರ್ತಿ ಮಾಡಬೇಕು ಎಂದು ಆಗ್ರಹಿಸಿದರು.
ಹಾಸ್ಟೆಲ್‌ಗಳಲ್ಲಿರುವ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಊಟದ ಸಾಮಗ್ರಿಗಳ ಅನುದಾನದಲ್ಲಿ ವಾರ್ಡನ್ ಮತ್ತು ಪಡಿತರ ಪೂರೈಸುವ ಗುತ್ತಿಗೆದಾರರು ಹಣವನ್ನು ವಸೂಲಿ ಮಾಡಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು. ಎಸ್‌ಎಫ್‌ಐ ಮುಖಂಡ ರಾಜಶೇಖರ್ ಮಾತನಾಡಿ, ವಸತಿ ನಿಲಯಗಳಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಜಿಲ್ಲಾಧಿಕಾರಿಗಳು ಕೂಡಲೇ ಅಧಿಕಾರಿಗಳ ಸಭೆ ಕರೆದು ಚರ್ಚಿಸಬೇಕು. ಮೂಲ ಸೌಕರ್ಯಗಳನ್ನು ಒದಗಿಸಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸುವುದರ ಜತೆಗೆ ವಾರ್ಡನ್‌ಗಳಿಗೆ ಸೂಕ್ತ ರೀತಿಯಲ್ಲಿ ಕಾರ್ಯ ನಿರ್ವಹಿಸುವಂತೆ ಎಚ್ಚರಿಕೆ ನೀಡಬೇಕೆಂದು ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ಎಸ್‌ಎಫ್‌ಐ ಮುಖಂಡ ಈಶ್ವರಪ್ಪ ಉಪಸ್ಥಿತರಿದ್ದರು.