ಶಾಶ್ವತ ನೀರಾವರಿಗೆ ಆಗ್ರಹಿಸಿ ಇಂದು ರೈತರ ಸಮಾವೇಶ
ಕೆಜಿಎಫ್; ಬಯಲು ಸೀಮೆ ಜಿಲ್ಲೆಗಳಿಗೆ ಶಾಶ್ವತ ನೀರಾವರಿಗಾಗಿ ಹಾಗೂ ಜಿಲ್ಲೆಯನ್ನು ಸಮಗ್ರ ಅಭಿವೃದ್ಧಿ ಪಡಿಸಲು ಒತ್ತಾಯಿಸಿ ಡಿ.27 ರಂದು ಕೆಜಿಎಫ್ ಕ್ಷೇತ್ರದ ಬೇತಮಂಗಲ ಗ್ರಾಮ ಬಸ್ ನಿಲ್ದಾಣದಲ್ಲಿ ಮಧ್ಯಾಹ್ನ 12 ಗಂಟೆಗೆ ರೈತರ ಸಮಾವೇಶವನ್ನು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಹಮ್ಮಿಕೊಳ್ಳಲಾಗಿದೆ. ಜಿಲ್ಲಾಧ್ಯಕ್ಷ ಹುಲ್ಕೂರು ಹರಿಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾವೇಶದಲ್ಲಿ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಚಾಮರಸ ಮಾಲೀಪಾಟೀಲ್, ಶಾಸಕ ಕೆ.ಎಸ್. ಪುಟ್ಟಣ್ಣಯ್ಯ ಭಾಗವಹಿಸಲಿದ್ದಾರೆ. ಸಮಾವೇಶಕ್ಕೆ ರೈತ ಸಂಘದ ಕಾರ್ಯಾಧ್ಯಕ್ಷ ಕೆ.ಟಿ. ಗಂಗಾಧರ್, ಚುಕ್ಕಿ ನಂಜುಂಡಸ್ವಾಮಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಬಡಗಲಪುರ ನಾಗೇಂದ್ರ, ವಿಭಾಗೀಯ ಉಪಾಧ್ಯಕ್ಷ ಜಿ.ಟಿ. ರಾಮಸ್ವಾಮಿ ಭಾಗವಹಿಸಲಿದ್ದಾರೆ. ಬಯಲು ಸೀಮೆ ಕೃಷಿ ಪ್ರದೇಶದ ಸಮಗ್ರ ಅಭಿವೃದ್ಧಿ ಬಗ್ಗೆ ಚರ್ಚಿಸಲು, ಅಕ್ರಮ ಮರಳು ಗಣಿಗಾರಿಕೆಗೆ ಕಡಿವಾಣ ಹಾಕಿ ಶಿಸ್ತುಬದ್ದ ಮರಳು ನೀತಿ ರೂಪಿಸಲು ಬಯಲು ಸೀಮೆ ಜಿಲ್ಲೆಗಳಿಗೆ ಪರಮಶಿವಯ್ಯನವರ ಶಾಶ್ವತ ನೀರಾವರಿ ಯೋಜನೆ ಅನುಷ್ಠಾನಗೊಳಿಸಲು ಸರ್ಕಾರವನ್ನು ಒತ್ತಾಯಿಸಿ ಸಮಾವೇಶ ಆಯೋಜಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಹುಲ್ಕೂರು ಹರಿಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.