ಪೌರಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಬದ್ಧ: ಶಿವಣ್ಣ
ಚಿಕ್ಕಬಳ್ಳಾಪುರ: ಪೌರಕಾರ್ಮಿಕರ ಮಕ್ಕಳು ಉನ್ನತ ಶಿಕ್ಷಣ ಪಡೆಯಲು ಮತ್ತು ಅವರ ಕುಟುಂಬದ ಮಹಿಳಾ ಸದಸ್ಯರಿಗೆ ಅನುಕೂಲವಾಗುವಂತೆ ಶೇ.1ರ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಒದಗಿಸಲಾಗುವುದು ಎಂದು ಸಫಾಯಿ ಕರ್ಮಚಾರಿಗಳ ರಾಷ್ಟ್ರೀಯ ಆಯೋಗದ ಅಧ್ಯಕ್ಷ ಶಿವಣ್ಣ ತಿಳಿಸಿದರು.
ನಗರ ಹೊರ ವಲಯದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಸಂಬಂಧಪಟ್ಟ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.
ರಾಷ್ಟ್ರದ ಪೌರ ಕಾರ್ಮಿಕರ ಸಂಕಷ್ಟಗಳನ್ನು ಅರಿತು ಸಮಸ್ಯೆ ಬಗೆಹರಿಸಲು ಆಯೋಗ ಮುಂದಾಗಿದೆ. ಈಗಾಗಲೇ ಸರ್ಕಾರಗಳಿಗೆ ಪೌರ ಕಾರ್ಮಿಕರಿಗೆ ಅಗತ್ಯವಿರುವ ಸವಲತ್ತು ಒದಗಿಸಬೇಕೆಂದು ಸ್ಪಷ್ಟ ಸೂಚನೆ ನೀಡಲಾಗಿದೆ. ಹರಿಯಾಣ ಸರ್ಕಾರವು ಪ್ರತಿ ಪೌರಕಾರ್ಮಿಕನಿಗೆ 8,140 ತಿಂಗಳ ವೇತನ ಪಾವತಿಸುತ್ತಿದ್ದು ಇದನ್ನು ಇತರೆ ರಾಜ್ಯಗಳು ಅನುಸರಿಸಿ ಸಮರ್ಪಕವಾಗಿ ವೇತನ ನೀಡಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.
ಪೌರ ಕಾರ್ಮಿಕರ ಆರೋಗ್ಯ ಕಾಪಾಡಲು, ಅವರ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ನಿಟ್ಟಿನಲ್ಲಿ ಅನೇಕ ಸವಲತ್ತುಗಳನ್ನು ಒದಗಿಸಲಾಗುತ್ತಿದೆ. ಇದನ್ನು ಸಮರ್ಪಕವಾಗಿ ಫಲಾನುಭವಿಗಳಿಗೆ ದೊರೆಯುವಂತೆ ಮಾಡುವುದರ ಜೊತೆಗೆ ಸದ್ಬಳಕೆ ಮಾಡಿಕೊಳ್ಳಲು ಅರಿವು ಮೂಡಿಸಲಾಗುತ್ತಿದೆ ಎಂದರು.
2013, ಡಿ.6ರಂದು ಮಲ ಹೊರುವ ಪದ್ಧತಿಯ ನಿರ್ಮೂಲನಾ ಕಾಯ್ದೆಯು ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟಿದ್ದು ಈ ಕಾಯ್ದೆಯನ್ವಯ ಮಲ ಹೊರುವ ಪದ್ಧತಿಯು ಶಿಕ್ಷಾರ್ಹ ಅಪರಾಧ. ಇದರಿಂದ ಅಧಿಕಾರಿಗಳು ಮಲ ಹೊರುವ ಪದ್ಧತಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳು ಪೌರಕಾರ್ಮಿಕರ ಅಭಿವೃದ್ಧಿಗಾಗಿ ಕೈಗೊಂಡಿರುವ ಕ್ರಮಗಳು, ಸಾಧಿಸಿರುವ ಪ್ರಗತಿ ಪರಿಶೀಲನೆ ನಡೆಸಿದ ಆಯೋಗದ ಅಧ್ಯಕ್ಷರು, ಜಿಲ್ಲೆಯು ಸಾಧಿಸಿರುವ ಪ್ರಗತಿಯ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಆರ್.ವಿಶಾಲ್, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನೀಲಾ ಮಂಜುನಾಥ್, ಅಧಿಕಾರಿಗಳಿದ್ದರು.