ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಸಿಇಒರಿಂದ ಕ್ಷೇತ್ರಾಭಿವೃದ್ಧಿ ಕಡೆಗಣನೆ

Rashmi Kasaragodu
Updated On : 31 Dec 2013, 2:11 am

ಚಿಕ್ಕಬಳ್ಳಾಪುರ: ಜಿ.ಪಂ. ಅಧ್ಯಕ್ಷರ ತಾಳಕ್ಕೆ ತಕ್ಕಂತೆ ಕುಣಿಯುತ್ತಿರುವ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ತಮ್ಮ ನಿರ್ಲಕ್ಷ್ಯ ಧೋರಣೆ ತೋರುವ ಮೂಲಕ ಕ್ಷೇತ್ರದ ಅಭಿವೃದ್ಧಿ ಕಡೆಗಣಿಸುತ್ತಿದ್ದಾರೆ ಎಂದು ಆರೋಪಿಸಿ ಚಿಂತಾಮಣಿ ಶಾಸಕ ಜೆ.ಕೆ. ಕೃಷ್ಣಾರೆಡ್ಡಿ ಮತ್ತು ಅವರ ಬೆಂಬಲಿಗರು ಸೋಮವಾರ ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ಹೊರ ವಲಯದಲ್ಲಿರುವ ನೂತನ ಜಿಲ್ಲಾಡಳಿತ ಭವನದ ಮುಂದೆ ಬೃಹತ್ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರು ಭ್ರಷ್ಟಾಚಾರದ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದರೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಕಣ್ಣಿದ್ದು ಕುರುಡರಂತೆ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ಧಿಕ್ಕಾರಗಳನ್ನು ಕೂಗಿದರು. ತಮ್ಮ ನ್ಯಾಯಯುತ ವಿವಿಧ ಬೇಡಿಕೆಗಳನ್ನು ಈಡೇರಿಸುವವರೆಗೂ ನಮ್ಮ ಹೋರಾಟವನ್ನು ನಿಲ್ಲಿಸುವುದಿಲ್ಲ ಎಂದು ಪಟ್ಟುಹಿಡಿದರು.
ಜಿಲ್ಲೆಯ ಅಭಿವೃದ್ಧಿಗೆ ಜಿಲ್ಲಾಡಳಿತ, ಜಿ.ಪಂ ಪ್ರಾಮಾಣಿಕವಾಗಿ ಶ್ರಮಿಸಿ ಜನರ ಸಮಸ್ಯೆಗಳನ್ನು ದೂರ ಮಾಡಬೇಕಾದ ಮಹತ್ತರವಾದ ಜವಾಬ್ದಾರಿಯನ್ನು ಹೊಂದಿದೆ. ಆದರೆ, ಕೆಲವರ ಪ್ರಭಾವಕ್ಕೆ ಶರಣಾಗಿರುವ ಕೆಲ ಅಧಿಕಾರಿಗಳು ಪಕ್ಷಪಾತ ಧೋರಣೆಯನ್ನು ತೋರುತ್ತ ಜನರ ಸಮಸ್ಯೆಗಳನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ. ವಿವಿಧ ಯೋಜನೆಗಳು ಮತ್ತು ಕಾರ್ಯಕ್ರಮಗಳ ಮೂಲಕ ಸರ್ಕಾರ ನೀಡುತ್ತಿರುವ ಯಾವುದೇ ಸವಲತ್ತುಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸುತ್ತಿಲ್ಲ. ಅಲ್ಲದೇ ವ್ಯಾಪಕ ಭ್ರಷ್ಟಾಚಾರಕ್ಕೆ ಅವಕಾಶ ನೀಡುತ್ತಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಮತ್ತು ಜಿ.ಪಂ.ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಗಮನಕ್ಕೆ ಅನೇಕ ಬಾರಿ ತಂದರೂ ಸಹ ಅವರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ವಾಗ್ದಾಳಿ: ಜಿ.ಪಂ.ಅಧ್ಯಕ್ಷ ಎಸ್.ಎನ್. ಚಿನ್ನಪ್ಪ ಬೇಕಂತಲೇ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಮಾಡುತ್ತ ಹಗೆ ಸಾಧಿಸುತ್ತಿದ್ದಾರೆ. ಚಿಂತಾಮಣಿ ವಿಧಾನಸಭಾ ಕ್ಷೇತ್ರಕ್ಕೆ ಅನುದಾನ ಬಿಡುಗಡೆಯ ವಿಷಯದಲ್ಲಿ ಸ್ವತ- ಅವರೇ ಅಡ್ಡಿಯಾಗುತ್ತಿದ್ದಾರೆ. ಶಾಸಕರಿಗೆ ಹೆಸರು ಬರಬಾರದೆಂಬ ಮನೋಭಾವನೆಯಲ್ಲಿ ಯಾವುದೇ ಸವಲತ್ತುಗಳು ದೊರೆಯದಂತೆ ನೋಡಿಕೊಳ್ಳುತ್ತಿದ್ದಾರೆ. ಈ ಮೂಲಕ ಸವಲತ್ತುಗಳ ವಿತರಣೆಯಲ್ಲಿ ಸ್ವಜನಪಕ್ಷಪಾತ ರಾಜಕಾರಣವನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಸೂಕ್ತ ಕ್ರಮಕ್ಕೆ ಆಗ್ರಹ: ಶಾಸಕ ಕೃಷ್ಣಾರೆಡ್ಡಿ ಮಾತನಾಡಿ, ಕಳೆದ ಆರು ತಿಂಗಳಿಂದಲೂ ಜಿಲ್ಲಾಡಳಿತದ ನಿರ್ಲಕ್ಷ್ಯ ಧೋರಣೆ ಬಗ್ಗೆ ಗಮನ ಸೆಳೆಯುತ್ತಿದ್ದರೂ ಸಹ ಯಾರೂ ಸ್ಪಂದಿಸದಿರುವುದು ದುರದೃಷ್ಟಕರ. ಈಗಲಾದರೂ ಜನರು ತಾಳ್ಮೆ ಕಳೆದುಕೊಳ್ಳುವುದಕ್ಕೆ ಮುಂಚೆ ಜಿಲ್ಲಾಡಳಿತ ಎಚ್ಚೆತ್ತುಕೊಳ್ಳಬೇಕೆಂದ ಅವರು, ಪ್ರಾಮಾಣಿಕವಾಗಿ ಅನುದಾನವನ್ನು ಬಿಡುಗಡೆ ಮಾಡಬೇಕು. ಅಭಿವೃದ್ಧಿಯಲ್ಲಿ ರಾಜಕಾರಣ ಮಾಡಲು ಹೊರಟಿರುವವರು ಧೋರಣೆ ಬದಲಾಯಿಸಿಕೊಳ್ಳಬೇಕು. ಪ್ರಮುಖವಾಗಿ ಸರ್ಕಾರದ ಸವಲತ್ತುಗಳನ್ನು ಒದಗಿಸುವಲ್ಲಿ ಭ್ರಷ್ಟಾಚಾರಕ್ಕೆ ಅವಕಾಶ ಮಾಡಿಕೊಟ್ಟಿರುವ ಅಧಿಕಾರಿಗಳ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.  
ಟಿ.ಎನ್. ರಾಜಗೋಪಾಲ್, ನಟರಾಜ್, ಶ್ರೀನಿವಾಸ ರೆಡ್ಡಿ, ರವೀಂದ್ರನಾಥಗೌಡ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement