ಜಿಲ್ಲಾ ಮಟ್ಟದ ಶೈಕ್ಷಣಿಕ ಸ್ಪರ್ಧೆಗಳು
ಚಿಕ್ಕಬಳ್ಳಾಪುರ: ಜಿಪಂ, ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ನಗರದ ಬಿ.ಬಿ. ರಸ್ತೆಯ ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾ ಮಟ್ಟದ ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢಶಾಲಾ ಮಕ್ಕಳ ಏಕರೀತಿಯ ಸಾಂಸ್ಕೃತಿಕ- ಶೈಕ್ಷಣಿಕ ಸ್ಪರ್ಧೆಗಳು-ಮಕ್ಕಳ ಹಬ್ಬ ಕಾರ್ಯಕ್ರಮ ನಡೆಯಿತು.
ಕನ್ನಡ, ಹಿಂದಿ, ಅಂಗ್ಲ ಭಾಷೆಯಲ್ಲಿ ಭಾಷಣ, ಆಶುಭಾಷಣ, ಚರ್ಚಾ ಸ್ಪರ್ಧೆ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಕೈಗೊಳ್ಳಲಾಯಿತು. ಜಿಲ್ಲೆಯ ಆರು ತಾಲೂಕುಗಳ ವ್ಯಾಪ್ತಿಯಲ್ಲಿ ವಿವಿಧೆಡೆ ಶಾಲೆಗಳಿಂದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಶಿಕ್ಷಕರೊಂದಿಗೆ ಆಗಮಿಸಿದ್ದರು. ಶಾಲೆಯ ನಿಗದಿಪಡಿಸಿದ ಕೊಠಡಿಗಳಲ್ಲಿ ಆಯಾ ಸ್ಪರ್ಧೆಗಳನ್ನು ನಡೆಸಿದ್ದು ಮಕ್ಕಳು ಪೈಪೋಟಿಯಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.ಪುಟಾಣಿ ಮಕ್ಕಳು ವಿವಿಧ ವೇಷಾವಳಿಗಳಲ್ಲಿ ಗಮನ ಸೆಳೆಯುತ್ತಿದ್ದರೆ,ಅನೇಕ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ತೋರಿಸುವ ಮೂಲಕ ಮೆಚ್ಚುಗೆಗೆ ಪಾತ್ರರಾದರು.ಢ ಇದಕ್ಕೂ ಮುನ್ನಾ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಪಂ ಉಪಾಧ್ಯಕ್ಷ ರಾಘವೇಂದ್ರ ಹನುಮಾನ್, ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಕಾರ್ಯಕ್ರಮಗಳನ್ನು ಆಚರಿಸಲು ಸೂಕ್ತ ವೇದಿಕೆಯ ಕೊರತೆ ಕಂಡು ಬಂದಿದೆ. ಇದಕ್ಕೆ ರಂಗಮಂದಿರವನ್ನು ನಿರ್ಮಾಣ ಮಾಡಿಕೊಟ್ಟರೆ ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲವಾಗುತ್ತದೆ ಎಂದು ಮನವಿ ಮಾಡಿರುವ ಹಿನ್ನೆಲೆಯಲ್ಲಿ ಜಿಪಂ ಅನುದಾನದಲ್ಲಿ 1 ಲಕ್ಷ ರು. ನೆರವು ನೀಡುವುದಾಗಿ ಭರವಸೆ ನೀಡಿದರು.