ನಿಮ್ಮ ಸಮಸ್ಯೆ ಅಧಿಕಾರಿಗಳ ಗಮನಕ್ಕೆ ತನ್ನಿ
ಚಿಕ್ಕಬಳ್ಳಾಪುರ: ಜನರು ತಮ್ಮ ತಮ್ಮ ಗ್ರಾಮಗಳಲ್ಲಿನ ಸಮಸ್ಯೆಗಳು, ಕುಂದುಕೊರತೆಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಗಮನಕ್ಕೆ ತಂದಾಗ ಸುಲಭವಾಗಿ ಬಗೆಹರಿಸಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಭಕ್ತವತ್ಸಲಂ ಅಭಿಪ್ರಾಯ ವ್ಯಕ್ತಪಡಿಸಿದರು.
ತಾಲೂಕಿನ ಯಲುವಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಕಿರಿಯ ಆರೋಗ್ಯ ಉಪ ಕೇಂದ್ರದ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.
ಸರ್ಕಾರವು ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದು ಜನರಿಗೆ ಅನುಕೂಲ ಮಾಡಿಕೊಡುವುದರ ಜತೆಗೆ ಸಮಸ್ಯೆಗಳನ್ನು ಸಹ ಬಗೆಹರಿಸುತ್ತಿದೆ. ಇಂತಹ ವಾತಾವರಣದ ನಡುವೆಯೂ ಗ್ರಾಮಗಳಲ್ಲಿ ಸಮಸ್ಯೆಗಳು ಜನರನ್ನು ಕಾಡುತ್ತಿರುತ್ತವೆ. ಇವು ಸರಿಯಾಗಿ ಗಮನಕ್ಕೂ ಬರುವುದಿಲ್ಲ. ಆಗ ಕುಂದು ಕೊರತೆಗಳನ್ನು ಬಗೆಹರಿಸಿಕೊಳ್ಳುವ ನಿಟ್ಟಿನಲ್ಲಿ ಸಂಬಂಧಪಟ್ಟವರ ಗಮನಕ್ಕೆ ತರಬೇಕೆಂದು ಅವರು ಸಲಹೆ ನೀಡಿದರು.
ಜಿಲ್ಲೆಯಲ್ಲಿ ಆರೋಗ್ಯ ಸೇವೆಯನ್ನು ಒದಗಿಸುವ ವಿಷಯದಲ್ಲಿ ಸವಲತ್ತುಗಳ ಕೊರತೆಯಿಂದ ತೊಂದರೆಯಾಗುತ್ತಿರುವುದು ನಿಜ. ಇದನ್ನು ಬಗೆಹರಿಸುವ ನಿಟ್ಟಿನಲ್ಲಿ ಈಗಾಗಲೇ ಕ್ರಮ ಕೈಗೊಂಡಿದ್ದು ಹಿರಿಯ ಅಧಿಕಾರಿಗಳಿಂದಲೂ ಸಮರ್ಪಕವಾಗಿ ಸ್ಪಂದನೆ ಸಿಕ್ಕಿದೆ. ಹಾವು ಕಡಿತಕ್ಕೆ ಔಷಧಿಗಳು ಆಸ್ಪತ್ರೆಯಲ್ಲಿ ಇಲ್ಲ. ಅದೇ ರೀತಿ ನಾಯಿ ಕಡಿತದ ಔಷಧಿಗಳ ಕೊರತೆಯೂ ಇದೆ. ಈ ಔಷಧಿಗಳನ್ನು ತರಿಸಿಕೊಳ್ಳಬೇಕಾಗಿದೆ. ಅದೇ ರೀತಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳಾ ವೈದ್ಯರ ಸಮಸ್ಯೆಯೂ ಇದೆ. ಇದಕ್ಕೆ ಸಂಬಂಧಪಟ್ಟವರ ಜತೆಗೆ ಚರ್ಚೆ ನಡೆಸುವುದಾಗಿ ತಿಳಿಸಿದರು.
ರಾಜ್ಯ ಸರ್ಕಾರದ ಬಹು ಪ್ರಮುಖ ಕಾರ್ಯಕ್ರಮವಾದ ಅಟಲ್‌ಜೀ ಆರೋಗ್ಯ ತಪಾಸಣಾ ಶಿಬಿರವನ್ನು ಫೆ.15 ರಂದು
ಬಡ ಜನರಿಗಾಗಿ ಹಮ್ಮಿಕೊಂಡಿದ್ದು ಇದಕ್ಕಾಗಿ ಜಿಲ್ಲೆಯಲ್ಲಿ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಈ ಶಿಬಿರದಲ್ಲಿ 7 ರೀತಿಯ ಗಂಭೀರ ಕಾಯಿಲೆಗಳಿಗೆ ತಪಾಸಣೆ ಮಾಡುವುದರ ಜತೆಗೆ ಉಚಿತವಾಗಿ ಉನ್ನತ ಮಟ್ಟದ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನು ಸಹ ಕೊಡಿಸಲಾಗುತ್ತದೆ. ಇದನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕೆಂದರು.
ರೈತ ಮುಖಂಡ ಯಲುವಹಳ್ಳಿ ಸೊಣ್ಣೇಗೌಡ ಮಾತನಾಡಿ, ಗ್ರಾಮದಲ್ಲಿ ಆರೋಗ್ಯ ಉಪ ಕೇಂದ್ರದ ಕಟ್ಟಡವು ದುಸ್ಥಿತಿಯಲ್ಲಿತ್ತು. ಈ ಕಾರಣದಿಂದ ಬಾಡಿಗೆ ಕಟ್ಟಡದಲ್ಲಿ ನಿರ್ವಹಿಸಬೇಕಾಗಿತ್ತು. ಇದರಿಂದ ಸಮರ್ಪಕ ಸೇವೆ ಜನರಿಗೆ ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕಟ್ಟಡವನ್ನು ಸುಸ್ಥಿತಿಗೆ ತಂದು ಸೇವೆಗೆ ಸಿಗುವಂತೆ ಮಾಡಲಾಗಿದೆ ಎಂದು ತಿಳಿಸಿದರು.
ಡಿಎಲ್ ಓ ಸಿರಾಜುದ್ದೀನ್ಮ್‌ದಿನಿ, ನಂದಿ ಸರ್ಕಾರಿ ಆಸ್ಪತ್ರೆಯ ವೈದ್ಯ ಚಂದ್ರಶೇಖರ್, ಗ್ರಾ.ಪಂ.ಸದಸ್ಯ ಚಂದ್ರಣ್ಣ, ಮಾಜಿ ಸದಸ್ಯ ಸತೀಶ್ ಮುಂತಾದವರು ಉಪಸ್ಥಿತರಿದ್ದರು.