ಸಿದ್ದರಾಮಯ್ಯ 'ಕೈ'ಗೆ ಸಿಎಂಗಿರಿ ಸಿಗಲ್ಲ
ಕೋಲಾರ: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ಆ ಪಕ್ಷದವರು ಕನಸು ಕಾಣುತ್ತಿದ್ದಾರೆ. ಹಾಗೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತಾನೇ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗೋದು ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮಾರ್ಮಿಕವಾಗಿ ನುಡಿದರು.
ಅವರು ಗುರುವಾರ ಕೋಲಾರಕ್ಕೆ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದ ಸಂದರ್ಭದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡುತ್ತಾ, ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಹೊರಬಿದ್ದ ಮೇಲೆ ಸಿದ್ದರಾಮಯ್ಯನವರಿಗೆ ಜೆಡಿಎಸ್ ಶಕ್ತಿ ಏನೆಂಬುದು ಗೊತ್ತಾಗುತ್ತದೆ ಎಂದರು.
ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುತ್ತೇನೆಂದು ಕನಸು ಕಾಣುತ್ತಿದ್ದಾರೆ. ಆದರೆ, ರಾಜ್ಯದ ಜನತೆ ಕಾಂಗ್ರೆಸ್ ವಿರುದ್ಧ ಮತ ಹಾಕುವುದರಿಂದ ಇವರ ಆಸೆ ಈಡೇರುವುದಿಲ್ಲವೆಂದು ಲೇವಡಿ ಮಾಡಿದರು.
ಜೆಡಿಎಸ್ ಅಪ್ಪ-ಮಕ್ಕಳ ಪಕ್ಷವೆಂದು ಸಿದ್ದರಾಮಯ್ಯ ಅಪಪ್ರಚಾರ ಮಾಡುತ್ತಿದ್ದು, ವಿಧಾನಸಭಾ ಚುನಾವಣೆಯಲ್ಲಿ 20 ಸೀಟು ಗೆಲ್ಲುವುದಿಲ್ಲವೆಂದು ಹಗುರವಾಗಿ ಮಾತನಾಡುತ್ತಿದ್ದಾರೆ. ಜೆಡಿಎಸ್ ಹಳೇ ಮೈಸೂರು ಪ್ರಾಂತ್ಯದ ಎರಡು-ಮೂರು ಜಿಲ್ಲೆಯಲ್ಲಿ ಮಾತ್ರ ಪ್ರಭಾವ ಹೊಂದಿದೆ ಎನ್ನುತ್ತಿದ್ದಾರೆ. ಚುನಾವಣೆ ಮುಗಿದ ಬಳಿಕ ಯಾವ ಪಕ್ಷಕ್ಕೆ ಜನ ಬೆಂಬಲ ಇದೆ ಎಂಬುದು ಅರ್ಥವಾಗಲಿದೆ ಎಂದು ಕುಮಾರಸ್ವಾಮಿ ಹೇಳಿದರು.
ಖಾಸಗಿ ಸಂಸ್ಥೆಗಳ ಮೂಲಕ ತಮಗೆ ಅನುಕೂಲವಾಗುವ ರೀತಿಯಲ್ಲಿ ಸಮೀಕ್ಷೆ ಮಾಡಿಸಿ ರಾಜ್ಯದಲ್ಲಿ ಜೆಡಿಎಸ್ ಲೆಕ್ಕಕ್ಕೆ ಇಲ್ಲವೆಂಬಂತೆ ಕಾಂಗ್ರೆಸ್ನವರು ಬಿಂಬಿಸಿದ್ದಾರೆ. ಆದರೆ, ಈ ವರದಿ ಸುಳ್ಳಾಗಲಿದೆ ಎಂದು ತಿರುಗೇಟು ನೀಡಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಜೆಡಿಎಸ್, ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ನಡೆದಿರುವ ಹಗರಣಗಳಿಗೆ ಸಂಬಂಧಿಸಿದಂತೆ ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗಡೆ ವರದಿ ಆಧರಿಸಿ ತಪ್ಪಿತಸ್ಥರನ್ನು ಜೈಲಿಗೆ ಕಳುಹಿಸುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇವರ ಆಸೆ ಈಡೇರುತ್ತದೆ, ಆದರೆ ಜನ ಇವರ ಪಕ್ಷ ಗೆಲ್ಲಿಸಬೇಕಲ್ಲ ಎಂದು ವ್ಯಂಗ್ಯವಾಡಿದರು.
ಸಿದ್ದರಾಮಯ್ಯಗೆ ಜೆಡಿಎಸ್ ಭಯ: ಸಿದ್ದರಾಮಯ್ಯ ನಮ್ಮ ಪಕ್ಷದಲ್ಲಿದ್ದಾಗ ಎಸ್.ಎಂ. ಕೃಷ್ಣರನ್ನು ಜೈಲಿಗೆ ಕಳುಹಿಸುವುದಾಗಿ ಹೇಳಿದ್ದರು. ನಂತರ ನಮ್ಮ ಪಕ್ಷ ಬಿಟ್ಟು ಇದೇ ಎಸ್.ಎಂ.ಕೃಷ್ಣರವರ ಕೈ ಕಾಲು ಹಿಡಿದು ಕಾಂಗ್ರೆಸ್ ಸೇರಿದ ನಂತರ ಜೈಲಿಗೆ ಕಳುಹಿಸುವ ಮಾತು ಮರೆತರು ಎಂದು ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ಜೆಡಿಎಸ್ ಬಗ್ಗೆ ಭಯ ಇರುವುದರಿಂದಲೇ ಅನಗತ್ಯವಾಗಿ ಆರೋಪ ಮಾಡುತ್ತಿದ್ದಾರೆಂದು ಟೀಕಿಸಿದರು.
ನಮ್ಮ ಪಕ್ಷ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಯಾವುದೇ ಆತಂಕವಿಲ್ಲದೆ ಗೆಲ್ಲುವ ಭರವಸೆಯಲ್ಲಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಎದುರಿಸಲು ಕಾಂಗ್ರೆಸ್ ಮತ್ತು ಬಿಜೆಪಿಗೆ ಧೈರ್ಯವಿಲ್ಲ, ಅದಕ್ಕಾಗಿ ಚುನಾವಣೆ ಮುಂದೂಡಲು ಸಾಕಷ್ಟು ಪ್ರಯತ್ನ ನಡೆಸಿದರು. ಆದರೆ, ನಮ್ಮ ಪಕ್ಷಕ್ಕೆ ಈ ಚುನಾವಣೆ ಅನಿವಾರ್ಯವಾಗಿತ್ತು. ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಇನ್ನಿತರ ಕಡೆ ಜೆಡಿಎಸ್ ಅತ್ಯಂತ ಹೆಚ್ಚು ವಾರ್ಡುಗಳಲ್ಲಿ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಉತ್ತರ ಕರ್ನಾಟಕದಲ್ಲಿ ಜೆಡಿಎಸ್ಗೆ ನೆಲೆ ಇಲ್ಲವೆಂದು ವಿರೋಧಿಗಳು ಹೇಳಿಕೊಳ್ಳುತ್ತಿದ್ದಾರೆ. ಈ ಬಾರಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಆ ಭಾಗದಲ್ಲಿ 1800 ರಿಂದ 2 ಸಾವಿರ ಅಭ್ಯರ್ಥಿಗಳು ನಮ್ಮ ಪಕ್ಷದಿಂದ ಗೆಲ್ಲುತ್ತಾರೆ. ಸ್ಥಳೀಯ ಸಂಸ್ಥೆ ಚುನಾವಣೆಗೆಂದು ಕಾಂಗ್ರೆಸ್, ಬಿಜೆಪಿಯಂತೆ ರಾಜ್ಯ ಮಟ್ಟದಲ್ಲಿ ಯಾವುದೇ ವಿಶೇಷ ಪ್ರಣಾಳಿಕೆ ನಮ್ಮ ಪಕ್ಷದಿಂದ ರೂಪಿಸುತ್ತಿಲ್ಲ. ಆಯಾ ಜಿಲ್ಲಾವಾರು ಪ್ರಣಾಳಿಕೆ ಸಿದ್ದಪಡಿಸಲಾಗುತ್ತಿದ್ದು ಎರಡ್ಮೂರು ದಿನಗಳಲ್ಲಿ ಸ್ಥಳೀಯ ನಾಯಕರು ಪ್ರಣಾಳಿಕೆ ಬಿಡುಗಡೆ ಮಾಡುತ್ತಾರೆ. ಅವು ಜನಪರವಾಗಿರುತ್ತವೆ ಎಂದು ತಿಳಿಸಿದರು.
ಬಿಜೆಪಿಯ ಸಚಿವರು, ಶಾಸಕರು ಚುನಾವಣೆ ಸಮೀಪಿಸುತ್ತಿರುವುದರಿಂದ ಪಕ್ಷಕ್ಕೆ ರಾಜಿನಾಮೆ ನೀಡಿ ಕಾಂಗ್ರೆಸ್ ಸೇರುತ್ತಿದ್ದಾರೆ. ಇದರಿಂದ ಅವರುಗಳಿಗೆ ಯಾವುದೇ ಲಾಭವಾಗುವುದಿಲ್ಲ, ಕಾಂಗ್ರೆಸ್ ಸೇರಿದ ಮಾತ್ರಕ್ಕೆ ಅವರುಗಳ ಮೇಲಿರುವ ಆರೋಪಗಳಿಂದ ಮುಕ್ತಿಯಾಗುವುದಕ್ಕೆ ಸಾಧ್ಯವಿಲ್ಲವೆಂದು ಎಂದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.