7500 ಮನೆ ನಿರ್ಮಾಣಕ್ಕೆ 56 ಕೋಟಿ
ಕೋಲಾರ: ಬಡತನ ರೇಖೆಗಿಂತ ಕೆಳಗಿರುವ 7500 ಫಲಾನುಭವಿಗಳಿಗೆ 56 ಕೋಟಿ ವೆಚ್ಚದಲ್ಲಿ ಮನೆ ನಿರ್ಮಿಸಿಕೊಡಲಾಗಿದೆ ಎಂದು ಶಾಸಕ ಅಮರೇಶ ತಿಳಿಸಿದರು.
ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದಲ್ಲಿ ಸೋಮವಾರ ವಾರ್ತಾ ಇಲಾಖೆ, ಬೆಂಗಳೂರು ಗ್ರಾಮಾಂತರ ವಿಭಾಗದ ಕೋಲಾರ, ತುಮಕೂರು, ರಾಮನಗರ ಮತ್ತು ಚಿಕ್ಕಬಳ್ಳಾಪುರ ವಾರ್ತಾ ಇಲಾಖೆಯಿಂದ ಒಂದು ನೂರು ಆಯ್ದ ಗ್ರಾಮಗಳಲ್ಲಿ ಅಪೌಪ್ಟಿಕತೆ ನಿವಾರಣೆ ಹಾಗೂ ವಿವಿಧ ಅಭಿವೃದ್ಧಿ ಯೋಜನೆಗಳ ಕುರಿತು ಏರ್ಪಡಿಸಿದ್ದ ಪ್ರಚಾರಾಂದೋಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ತಾಲೂಕಿನ ಪೆದ್ದೂರು, ಮಲ್ಲನಾಯಕನಹಳ್ಳಿ ರಸ್ತೆ ನಿರ್ಮಾಣಕ್ಕೆ ಮೂರು ಕೋಟಿ ರು. ವೆಚ್ಚ ಮಾಡಲಾಗಿದೆಯಲ್ಲದೆ ಐದು ಕೋಟಿ ವೆಚ್ಚದಿಂದ ಮೋರಾರ್ಜಿ ದೇಸಾಯಿ ವಸತಿ ಶಾಲೆ ನಿರ್ಮಿಸಲಾಗುತ್ತಿದೆ ಎಂದು ಹೇಳಿದರು.
ರಾಷ್ಟ್ರೀಯ ಹೆದ್ದಾರಿಯನ್ನು ನಂಗಲಿಯವರೆಗೂ ನಿರ್ಮಾಣ ಮಾಡಲು ಮಂಜೂರಾತಿ ದೊರೆತಿದೆಯಲ್ಲದೆ ತಮಿಳುನಾಡಿನಿಂದ ಮಂಗಳೂರುವರೆಗೆ 234 ರಾಷ್ಟ್ರೀಯ ಹೆದ್ದಾರಿ ಮುಳಬಾಗಿಲು ಮೂಲಕ ಹಾದು ಹೋಗಲಿದೆ ಎಂದು ಹೇಳಿದರು.
ಕೇಂದ್ರ ಸರ್ಕಾರದಿಂದ ಗರ್ಭಿಣಿಯರ ಆರೋಗ್ಯಕ್ಕಾಗಿ ಒಂಭತ್ತು ಸಾವಿರ ರುಪಾಯಿ ನೀಡಲಾಗುತ್ತಿದೆ. ಅದೇ ರೀತಿ ಜನರಲ್ ಆಸ್ಪತ್ರೆ ಅಭಿವೃದ್ಧಿಗೆ ಒಂದು ಕೋಟಿ ನೀಡಲಾಗಿದೆ ಎಂದು ಹೇಳಿದರು.
ಕುಡಿಯುವ ನೀರಿಗೆ 30 ಕೋಟಿ ವೆಚ್ಚ ಮಾಡಲಾಗಿದೆ. ಈಗ ಇನ್ನು 20 ಕೋಟಿ ನೀರಿಗಾಗಿ ಪ್ರತ್ಯೇಕ ಅನುದಾನ ತರಲಾಗಿದೆ. ಸುವರ್ಣ ಗ್ರಾಮ ಯೋಜನೆಯಲ್ಲಿ 32 ಗ್ರಾಮಗಳನ್ನು ಅಭಿವೃದ್ಧಿ ಪಡಿಸಲಾಗುವುದು. ಇದರ ಜತೆಗೆ ವಿಶೇಷ ಘಟಕ ಯೋಜನೆಯಲ್ಲಿ 200 ಗ್ರಾಮಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಕ್ಷೇತ್ರದಲ್ಲಿನ ಅಭಿವೃದ್ಧಿ ಕೆಲಸ ವಿವರಿಸಿದರು.
ವಾರ್ತಾ ಇಲಾಖೆ ಕಲಾ ತಂಡಗಳ ಮೂಲಕ ಸರ್ಕಾರದ ಯೋಜನೆಗಳು ಮತ್ತು ಕಾರ್ಯಕ್ರಮಗಳ ಬಗ್ಗೆ ಜನರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಎಂ. ಜುಲ್ಫಿಖಾರ್ ಉಲ್ಲಾ ಮುಖ್ಯ ಅತಿಥಿಗಳಾಗಿ ಮಾತನಾಡಿ, ನ್ಯಾ. ಎನ್.ಕೆ. ಪಾಟೀಲ್ ಅಧ್ಯಕ್ಷತೆಯಲ್ಲಿ ರಚಿಸಿರುವ ಮಕ್ಕಳಲ್ಲಿನ ಅಪೌಷ್ಟಿಕತೆ ನಿವಾರಣೆಗಾಗಿ ನೀಡಿರುವ ವರದಿಯಂತೆ ಎಲ್ಲಾ ಆರು ವರ್ಷದ ಒಳಗಿನ ಮಕ್ಕಳನ್ನು ತಪಾಸಣೆ ಮಾಡಲಾಗುತ್ತಿದೆ. ಇದರಿಂದ ಅಪೌಷ್ಟಿಕತೆಯಿಂದ ನರಳುತ್ತಿರುವ ಮಕ್ಕಳನ್ನು ಗುರುತಿಸಬಹುದು. ಇದರೊಂದಿಗೆ ಮಕ್ಕಳನ್ನು ತೂಕ ಸಹಾ ಮಾಡಲಾಗುವುದು ಎಂದು ಹೇಳಿದರು.
ತಾಪಂ ಇಒ ಡಾ. ವೆಂಕಟಸ್ವಾಮಿ ಮಾತನಾಡಿ, ಗಡಿಭಾಗದಲ್ಲಿರುವ ಮುಳಬಾಗಲು ತಾಲೂಕಿನ ಎಲ್ಲಾ ಗ್ರಾಮಗಳಿಗೆ ಕುಡಿಯುವ ನೀರು, ವಸತಿ ಸೌಲಭ್ಯ ಕಲ್ಪಿಸಲಾಗಿದ್ದು, ಮಕ್ಕಳಿಗೆ ಅಂಗನವಾಡಿ ಕೇಂದ್ರಗಳ ಮೂಲಕ ಪೌಷ್ಟಿಕ ಆಹಾರ ನೀಡಲಾಗುತ್ತಿದೆ ಎಂದು ಹೇಳಿದರು.
ಜಿಪಂ ಸದಸ್ಯೆ ಅಲವೇಲಮ್ಮ ರಾಜಗೋಪಾಲ್, ತಾಪಂ ಸದಸ್ಯ ಪೆದ್ದೂರು ವೆಂಕಟರಾಮ್, ಗ್ರಾಪಂ ಉಪಾಧ್ಯಕ್ಷೆ ಧನಲಕ್ಷ್ಮಮ್ಮ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ವೆಂಕಟೇಶಗೌಡ, ಗ್ರಾಪಂ ಮಾಜಿ ಅಧ್ಯಕ್ಷ ಜಿ.ವಿ. ವಿಶ್ವನಾಥರೆಡ್ಡಿ, ವಾರ್ತಾ ಇಲಾಖೆಯ ಉಪನಿರ್ದೇಶಕಿ ಆರ್. ಸರಸ್ವತಿ ಇದ್ದರು. ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಸಿ.ಎಂ. ರಂಗಾರೆಡ್ಡಿ ಸ್ವಾಗತಿಸಿ, ಶಿವಮೊಗ್ಗ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಜಿ.ಹಿಮಂತರಾಜು ವಂದಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.