'ಕೌಶಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ಕೊಡಿ'
ಕ.ಪ್ರ.ವಾರ್ತೆ , ಚಿಕ್ಕಬಳ್ಳಾಪುರ , ಜು. 2
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೌಶಲ್ಯಾಧಾರಿತ ಶಿಕ್ಷಣವನ್ನು ಪಡೆದುಕೊಂಡಿರುವವರಿಗೆ ಹೆಚ್ಚಿಗೆ ಉದ್ಯೋಗಾವಕಾಶಗಳು ದೊರೆಯುತ್ತಿದ್ದು ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಬೇಕಾಗುವ ಸಾಮರ್ಥ್ಯವನ್ನು ಒದಗಿಸಬಲ್ಲ ಕೌಶಲ್ಯಾಧಾರಿತ ಶಿಕ್ಷಣಕ್ಕೆ ಪೋಷಕರು ಹೆಚ್ಚು ಒತ್ತು ನೀಡಬೇಕೆಂದು ಕೆ.ವಿ. ಮತ್ತು ಪಂಚಗಿರಿ ದತ್ತಿಗಳ ಅಧ್ಯಕ್ಷ ಕೆ.ವಿ. ನವೀನ್ ಕಿರಣ್ ಕರೆ ನೀಡಿದರು.
ನಗರದ ಹೊರವಲಯದಲ್ಲಿರುವ ಸರ್.ಎಂ. ವಿಶ್ವೇಶ್ವರಯ್ಯ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ಆಯೋಜಿಸಿದ್ದ ಕಲಾ ಸೌರಭ-2013 ಮತ್ತು 39ನೇ ಶೈಕ್ಷಣಿಕ ವರ್ಷದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಕೌಶಲ್ಯಾಧಾರಿತ ಶಿಕ್ಷಣವು ವಿದ್ಯಾರ್ಥಿಗಳಲ್ಲಿ ಬುದ್ಧಿಶಕ್ತಿಯನ್ನು ಹಿಮ್ಮಡಿಗೊಳಿಸುವುದಿಂದ ವಿಫುಲ ಉದ್ಯೋಗಾವಕಾಶಗಳು ದೊರೆಯಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ಸ್ಪರ್ಧಾತ್ಮಕ ಮನೋಭಾವನೆಯಿಂದ ಇದೀಗ ಎಲ್ಲಾ ಕ್ಷೇತ್ರಗಳಲ್ಲೂ ಪೈಪೋಟಿ ಹೆಚ್ಚಾಗಿದೆ. ವಿಶೇಷ ಕೌಶಲ್ಯ, ಸಾಮರ್ಥ್ಯವನ್ನು ಹೊಂದಿರುವವಂತಹವರಿಗೆ ಹೆಚ್ಚಿಗೆ ಅವಕಾಶಗಳು ದೊರೆಯುತ್ತಿವೆ. ಆದರೆ, ಒತ್ತಡ ಸೇರಿದಂತೆ ನಾನಾ ಕಾರಣಗಳ ಹಿನ್ನೆಲೆಯಲ್ಲಿ ಬಹುತೇಕ ವಿದ್ಯಾರ್ಥಿಗಳಲ್ಲಿ ಆಸಕ್ತಿ, ಶ್ರದ್ಧೆ ಕಡಿಮೆಯಾಗುತ್ತಿರುವ ಕಾರಣದಿಂದ ಶಿಕ್ಷಣದ ಬಗೆಗಿನ ಒಲವು ಕ್ಷೀಣಿಸುತ್ತಿದೆ. ಇದಕ್ಕೆ ಅನುಗುಣವಾಗಿ ಅಗತ್ಯ ಮಾರ್ಗದರ್ಶನದ ಕೊರತೆಯೂ ಸಹ ಎದುರಾಗಿದ್ದು ಇದರಿಂದ ಹಲವರು ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯವಾಗದೇ ಕೊನೆಗೆ ನೋವನ್ನು ಅನುಭವಿಸುತ್ತಿದ್ದಾರೆ ಎಂದರು.
ವಿದ್ಯಾರ್ಥಿಗಳು ಒಂದು ನಿರ್ದಿಷ್ಟವಾದ ಗುರಿಯನ್ನಿಟ್ಟುಕೊಂಡು ಜೀವನದಲ್ಲಿ ಸಾಧನೆಯನ್ನು ತೋರುವ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು. ತಮ್ಮ ಒಳಿತನ್ನು ಬಯಸುವ ಹಿರಿಯರಿಂದ ಮಾರ್ಗದರ್ಶನವನ್ನು ಪಡೆದುಕೊಂಡು ಶ್ರದ್ಧೆಯಿಂದ ಶಿಕ್ಷಣವನ್ನು ಪಡೆಯಬೇಕು. ಉನ್ನತ ಹುದ್ದೆಗಳನ್ನು ಅಲಂಕರಿಸಿ ಒಳ್ಳೆಯ ಹೆಸರನ್ನು ಗಳಿಸಬೇಕು. ಜತೆಗೆ ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕೆಂದು ಸಲಹೆ ನೀಡಿದರು.
ಕೆ.ವಿ. ಶಿಕ್ಷಣ ಸಂಸ್ಥೆಯು ಬಡ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸಲು ಅದಕ್ಕೆ ಪೂರಕವಾದ ವಾತಾವರಣವನ್ನು ನಿರ್ಮಿಸಿಕೊಡುತ್ತಿದ್ದು ಇದನ್ನು ವಿದ್ಯಾರ್ಥಿಗಳು ಮತ್ತು ಪೋಷಕರು ಸದುಪಯೋಗಪಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಕೆ.ವಿ. ಮತ್ತು ಪಂಚಗಿರಿ ದತ್ತಿಗಳ ಸದಸ್ಯ ಬಿ.ಮುನಿಯಪ್ಪ, ಸ್ಕಿಲ್ ಇಂಡಿಯಾ ಕ್ವೆಸ್ಟ್ನ ಕೆ. ಹರೀಶ್ರೆಡ್ಡಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಕೆ.ವಿ. ಮತ್ತು ಪಂಚಗಿರಿ ದತ್ತಿಗಳ ಸದಸ್ಯ ಎ. ಕೊಂಡಪ್ಪ, ಪ್ರಾಂಶುಪಾಲ ಹನುಮಂತರೆಡ್ಡಿ ಮುಂತಾದವರು ಉಪಸ್ಥಿತರಿದ್ದರು.