ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಅನುದಾನ: ಮಂಜುನಾಥ್ ವಿಶ್ವಾಸ
ಕೋಲಾರ/ಮುಳಬಾಗಿಲು: ಮುಳಬಾಗಲು ತಾಲೂಕಿನಲ್ಲಿ ರಸ್ತೆಗಳ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಕೋರಿ ಲೋಕೋಪಯೋಗಿ ಸಚಿವರ ಬಳಿ ಚರ್ಚಿಸಿ ಮನವಿ ಪತ್ರ ಸಲ್ಲಿಸಲಾಗಿದೆ. ಆದಷ್ಟು ಬೇಗ ಅನುದಾನ ಬಿಡುಗಡೆಯಾಗಲಿದೆ ಎಂದು ಶಾಸಕ ಕೊತ್ತೂರು ಜಿ.ಮಂಜುನಾಥ ತಿಳಿಸಿದ್ದಾರೆ.
ತಾಲೂಕಿನ ತಾಯಲೂರು ಗ್ರಾಮದಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಿವಿಧ ಅಭಿವೃದ್ಧಿ ಕಾಮಗಾರಗಳಿಗೆ ಚಾಲನೆ ನೀಡಿ ಮಾತನಾಡಿ, ತಾಲೂಕಿನಲ್ಲಿ ನೀರಿನ ಸಮಸ್ಯೆ ಇದ್ದು ಬಗೆಹರಿಸುವ ನಿಟ್ಟಿನಲ್ಲಿ ಈಗಾಗಲೇ ಹೊಸ ಬೋರ್‌ವೆಲ್‌ಗಳನ್ನು ಕೊರೆಸಲಾಗುತ್ತಿದೆ. ಜೊತೆಗೆ ಪಂಪು ಮೋಟರ್‌ಗಳನ್ನು ತಕ್ಷಣ ಅಳವಡಿಸುವಂತೆ ಜಿ.ಪಂ. ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ತಾಲೂಕಿನಲ್ಲಿರುವ ಸರ್ಕಾರಿ ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗೆ ಉತ್ತಮ ಚಿಕಿತ್ಸೆ ನೀಡುತ್ತಿಲ್ಲ ಜೊತೆಗೆ ಸರ್ಕಾರದ ಸವಲತ್ತುಗಳು ಸಮರ್ಪಕ ರೀತಿಯಲ್ಲಿ ತಲುಪುತ್ತಿಲ್ಲ ಎಂಬ ದೂರುಗಳು ಸಾರ್ವಜನಿಕರಿಂದ ಕೇಳಿ ಬರುತ್ತಿದೆ ಇದರ ಬಗ್ಗೆ ತಾಲೂಕು ಅರೋಗ್ಯ ಅಧಿಕಾರಿಗಳು ಗಮನಹರಿಸಿ ಕ್ರಮ ತೆಗೆದುಕೊಳ್ಳದಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳುವೆ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಕೆರೆಗಳ ಅಭಿವೃದ್ಧಿಗೂ ಒತ್ತು ನೀಡಲಾಗಿದೆ. ಇಲ್ಲಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಖಾಯಂ ವೈದ್ಯರನ್ನು ನೇಮಕ ಮಾಡಲು ಆರೋಗ್ಯ ಸಚಿವರಿಗೆ ಮನವಿ ಮಾಡಿದ್ದು, ಗ್ರಾಮದ ಸಮಗ್ರ ಅಭಿವೃದ್ಧಿಗೆ ಎಲ್ಲ ರೀತಿಯ ಪ್ರಯತ್ನ ಮಾಡುವೆ ಎಂದರು.
ತಾಲೂಕಿನ ಜನತೆ ಬಹುಮತದಿಂದ ಗೆಲ್ಲಿಸಿದ್ದಾರೆ. ಅವರ ಋಣವನ್ನು ತಪ್ಪದೆ ತೀರಿಸುತ್ತೇನೆ. ಯಾರಿಂದಲೂ ಏನನ್ನು ಬಯಸುವುದಿಲ್ಲ. ಜನರ ಆಶೋತ್ತರಗಳಿಗೆ ಸದಾ ಸ್ಪಂದಿಸುತ್ತೇನೆ. ಎಲ್ಲಾ ಇಲಾಖೆಗಳ ಅಧಿಕಾರಿಗಳು ಸ್ಪಂದಿಸಿದರೆ ಮಾದರಿ ಕ್ಷೇತ್ರವನ್ನಾಗಿ ಮಾಡಲಾಗುವುದು. ಸಾರ್ವಜನಿಕರು ಯಾವುದೇ ದೂರುಗಳು ಇದ್ದರೆ ನನ್ನನ್ನು ನೇರವಾಗಿ ಸಂಪರ್ಕಿಸಬಹುದೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಕಲ್ಪ ಅಭಿವೃದ್ಧಿ ಸಂಸ್ಥೆ ವತಿಯಿಂದ ಸಸಿಗಳನ್ನು ವಿತರಣೆ ಮಾಡಲಾಯಿತು. ಇದಕ್ಕೂ ಮುನ್ನ ಶಾಸಕರು ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿಯರಿಗೆ ಮಡಿಲು ಕಿಟ್‌ಗಳನ್ನು ವಿತರಣೆ ಮಾಡಿದರು.
ಜಿಪಂ ಮಾಜಿ ಅಧ್ಯಕ್ಷ ಅಶೋಕ್ ಕೃಷ್ಣಪ್ಪ, ತಾಪಂ ಮಾಜಿ ಅಧ್ಯಕ್ಷ ಜಿ.ರಾಮಲಿಂಗಾರೆಡ್ಡಿ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಎಂ.ಸಿ. ನೀಲಕಂಠೇಗೌಡ, ಗ್ರಾಪಂ ಅಧ್ಯಕ್ಷ ಎ.ಟಿ.ಎಂ. ಗೌಡ, ಉಪಾಧ್ಯಕ್ಷ ಶ್ರೀನಿವಾಸ್, ಬಿಬಿಎಂಪಿ ಗುತ್ತಿಗೆದಾರ ಎ.ವಿ. ಶ್ರೀನಿವಾಸ್ ಜ್ಞಾನೇಶ್, ತಾ.ಪಂ. ಇಒ ಡಾ.ರಮಾನಂದ್, ಮಾಜಿ ಮಂಡಲ ಪ್ರಧಾನ ಎಂ.ಪಿ. ಸುಭಾಷ್‌ಗೌಡ, ಗ್ರಾ.ಪಂ. ಮಾಜಿ ಅಧ್ಯಕ್ಷರಾದ ರಂಗಸ್ವಾಮಿ, ತೇಜೋಮೂರ್ತಿ, ಅಸ್ಲಾಂ ಪಾಷಾ, ತಾಲೂಕು ಆರೋಗ್ಯಾಧಿಕಾರಿ ಡಾ.ಕೆ.ಎಸ್.ಪ್ರಕಾಶ್, ಸಂಕಲ್ಪ ಅಭಿವೃದ್ಧಿ ಸಂಸ್ಥೆಯ ಶಾರದಮ್ಮ, ಜಯಮಾಲಾ ಇದ್ದರು.