50 ಪೈಸೆಗೆ ಟೀ, 1ಕ್ಕೆ ಇಡ್ಲಿ, 5ಕ್ಕೆ ಊಟ: ಸುಬ್ಬಾರೆಡ್ಡಿ
ಕ.ಪ್ರ.ವಾರ್ತೆ ಬಾಗೇಪಲ್ಲಿ ಜು.8
50 ಪೈಸೆಗೆ ಟೀ, 1ಕ್ಕೆ ಇಡ್ಲಿ ಹಾಗೂ 5ಕ್ಕೆ ಊಟವನ್ನು ಅಗ್ಗದ ದರದಲ್ಲಿ ನೀಡುವಂತಹ ಕ್ಯಾಟೀನ್ ಅನ್ನು ಚುನಾವಣೆ ಸಮಯದಲ್ಲಿ ನೀಡಿದ್ದ ಭರವಸೆಯಂತೆ ಅತೀ ಶೀಘ್ರದಲ್ಲಿಯೇ ಪ್ರಾರಂಭಿಸಲಾಗುವುದು ಎಂದು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಅಗ್ಗದ ದರದಲ್ಲಿ ಕ್ಯಾಟೀನ್, ಹೋಬಳಿ ಕೇಂದ್ರಗಳಲ್ಲಿ ಹೊಲಿಗೆ ಯಂತ್ರ ತರಬೇತಿ ಕೇಂದ್ರಗಳನ್ನು ತೆರೆಯುವುದು ಸೇರಿದಂತೆ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತರುವುದಾಗಿ ಚುನಾವಣೆ ಸಮಯದಲ್ಲಿ ಕ್ಷೇತ್ರದ ಜನತೆಗೆ ಭರವಸೆ ನೀಡಲಾಗಿತ್ತು. ತಮ್ಮ 5 ವರ್ಷಗಳ ಅವಧಿಯಲ್ಲಿ ಬಹುತೇಕ ಭರವಸೆ ಈಡೇರಿಸುವುದಾಗಿ ಹೇಳಿದರು.
ಮಳೆ ಅಭಾವದ ಹಿನ್ನೆಲೆಯಲ್ಲಿ ಪಟ್ಟಣ ಸೇರಿದಂತೆ ಇಡೀ ಕ್ಷೇತ್ರದಲ್ಲಿ ಕುಡಿಯುವ ನೀರಿನ ಅಭಾವವಿದೆ. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ. ಈ ಕ್ಷೇತ್ರದಲ್ಲಿ ಶಿಕ್ಷಕರು, ವೈದ್ಯರು ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಅನೇಕ ಹುದ್ದೆಗಳು ಖಾಲಿ ಇವೆ. ಪ್ರಮುಖವಾಗಿ ಸರ್ಕಾರಿ ಶಾಲಾ ಶಿಕ್ಷಕರ ಮತ್ತು ಸರ್ಕಾರಿ ವೈದ್ಯರ ಕೊರತೆ ನೀಗಿಸಲು ಸರ್ಕಾರದ ಗಮನಕ್ಕೆ ತಂದಿದ್ದೇನೆ. ಆದರೆ, ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಲು ಬಹುತೇಕ ವೈದ್ಯರು ಹಿಂದೇಟು ಹಾಕುತ್ತಿದ್ದಾರೆ. ಇದಕ್ಕೆ ಭಯದ ವಾತಾವರಣ ಸೃಷ್ಟಿಯಾಗಿರುವುದೇ ಪ್ರಮುಖ ಕಾರಣವಾಗಿದೆ. ಭಯದ ವಾತಾವರಣದ ಹಣೆಪಟ್ಟಿಯಿಂದ ಹೊರ ಬಂದು ಸೇವೆ ಸಲ್ಲಿಸುವಂತಹ ವೈದ್ಯರಿಗೆ ಹಾಗೂ ಆಸ್ಪತ್ರೆಯ ಸಿಬ್ಬಂದಿ ವರ್ಗದವರಿಗೆ ಸೂಕ್ತ ರಕ್ಷಣೆ ನೀಡುವುದಾಗಿ ಭರವಸೆ ನೀಡಿದರು.
ಜನತಾ ದರ್ಶನದ ಮಾದರಿಯಲ್ಲಿ ಪ್ರತಿ ಬುಧವಾರ ಬೆಳಗ್ಗೆ 10 ರಿಂದ 2 ಗಂಟೆಯವರೆಗೂ ಸಾರ್ವಜನಿಕರ ಸಮಸ್ಯೆಗಳನ್ನು ಹಾಗೂ ಅಹವಾಲು ಸ್ವೀಕರಿಸಿ ನಂತರ 2 ಗಂಟೆಯಿಂದ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಕರೆದು ಸಾರ್ವಜನಿಕರಿಂದ ಪಡೆದಿರುವ ಅಹವಾಲುಗಳನ್ನು ಆಯಾ ಇಲಾಖೆಗಳಿಗೆ ಸಂಬಂಧಿಸಿರುವಂತಹ ಸಮಸ್ಯೆ ಪರಿಹರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಚುನಾವಣೆ ಸಮಯದಲ್ಲಿ ಇಡೀ ರಾಜ್ಯದಲ್ಲಿ ಬಾಗೇಪಲ್ಲಿ ವಿಧಾನ ಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವುದಾಗಿ ನೀಡಿದ್ದ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಜಿ.ಪಂ. ಮಾಜಿ ಅಧ್ಯಕ್ಷ ಚಿಕ್ಕನರಸಿಂಹಯ್ಯ (ಚಿನ್ನಿ), ಪುರಸಭೆ ಮಾಜಿ ಅಧ್ಯಕ್ಷ ಶ್ರೀನಿವಾಸರೆಡ್ಡಿ, ಅಮರನಾಥರೆಡ್ಡಿ ಮುಂತಾದವರು ಇದ್ದರು.