ಮಡೆ ಮಡೆ ಸ್ನಾನ, ಪಂಕ್ತಿ ಬೇಧ ನಿಷೇಧಕ್ಕೆ ಸಿಪಿಎಂ ಕಾರ್ಯಕರ್ತರ ಆಗ್ರಹ
ಕನ್ನಡಪ್ರಭ ವಾರ್ತೆ ಕೋಲಾರ ಜು.9
ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಪಂಕ್ತಿ ಬೇಧ ಹಾಗೂ ಮಡೆಸ್ನಾನವನ್ನು ಕಟ್ಟು ನಿಟ್ಟಾಗಿ ನಿಷೇಧಿಸಿ ದಲಿತರ ಏಳಿಗೆಗೆ ರಾಜ್ಯ ಬಜೆಟ್ನಲ್ಲಿ ಹೆಚ್ಚಿನ ಹಣ ನೀಡಬೇಕು ಎಂದು ಒತ್ತಾಯಿಸಿ ಸಿಪಿಐಎಂ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು.ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಪಂಕ್ತಿ ಬೇಧ ನಡೆಯುತ್ತಿದ್ದರೂ ಅದನ್ನು ತಡೆಯಲಾಗದ ಪೇಜಾವರ ಶ್ರೀಗಳು ದಲಿತರ ಕೇರಿಗಳಲ್ಲಿ ಪಾದಯಾತ್ರೆ ಮಾಡಿ ನಾವೆಲ್ಲ ಒಂದೇ ಎಂದು ಹೇಳುತ್ತಾರೆ, ೊಶ್ರೀಕೃಷ್ಣ ಮಠದಲ್ಲಿ ಪಂಕ್ತಿ ಬೇಧ ನಿಲ್ಲಿಸಲಿ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.ಕುಕ್ಕೆ ಸುಬ್ರಹ್ಮಣ್ಯ ದೇವಾಸ್ಥಾನದಲ್ಲಿ ನಡೆಯುತ್ತಿರುವ ಮಡೆಸ್ನಾನ ಎಂಬ ಅನಾಗರಿಕ ಪದ್ಧತಿಯನ್ನು ಕೂಡಲೇ ನಿಲ್ಲಿಸಬೇಕೆಂದು ಎಂದು ಒತ್ತಾಯಿಸಿದರು. ದಲಿತರ ಜನ ಸಂಖ್ಯೆಗೆ ಅನುಗುಣವಾಗಿ ಬಜೆಟ್ನಲ್ಲಿ ಹಣ ಮೀಸಲಿಡಬೇಕು, ದಲಿತರ ವಿಶೇಷ ಘಟಕ ಯೋಜನೆಯಲ್ಲಿ ಮೀಸಲಿರಿಸಿದ ಹಣವನ್ನು ರಾಜಕೀಯ ಪಟ್ಟಭದ್ರ ಹಿತಾಸಕ್ತಿಗಳು, ಅಧಿಕಾರಿಗಳು ದುರುಪಯೋಗ ಮಾಡಿಕೊಳ್ಳುತ್ತಿರುವುದನ್ನು ನಿಲ್ಲಿಸಬೇಕು, ದಲಿತರಿಗೆ ಖಾಸಗಿ ರಂಗದಲ್ಲಿ ಮೀಸಲಾತಿ ಒದಗಿಸಬೇಕು ಎಂದು ಒತ್ತಾಯಿಸಿದರು. ಸಿಪಿಎಂ ಜಿಲ್ಲಾ ಕಾರ್ಯದರ್ಶಿ, ನಗರಸಭೆ ಸದಸ್ಯ ಗಾಂಧಿನಗರ ನಾರಾಯಣಸ್ವಾಮಿ, ಸದಸ್ಯರಾದಅರ್ಜುನನ್, ಪಿ.ಶ್ರೀನಿವಾಸ್, ಪಿ.ಆರ್.ಸೂರ್ಯನಾರಾಯಣ, ವಿ.ಗೀತಾ ಮತ್ತಿತರರು ನೇತೃತ್ವ ವಹಿಸಿದ್ದರು.