ಇಂದಿನಿಂದ 16 ನೇ ರೈತರ ಜಿಲ್ಲಾ ಸಮ್ಮೇಳನ
ಚಿಕ್ಕಬಳ್ಳಾಪುರ: ಕೃಷಿ ಸಮಸ್ಯೆಗಳು, ಸಂಘಟನೆಯ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕರ್ನಾಟಕ ಪ್ರಾಂತ ರೈತ ಸಂಘ ಜಿಲ್ಲಾ ಕೇಂದ್ರ ಚಿಕ್ಕಬಳ್ಳಾಪುರದಲ್ಲಿ ಜು.12 ಮತ್ತು 13 ರಂದು ಎರಡು ದಿನಗಳ 16 ನೇ ರೈತರ ಜಿಲ್ಲಾ ಸಮ್ಮೇಳನವನ್ನು ಹಮ್ಮಿಕೊಂಡಿದೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮ್ಮೇಳನದ ಸ್ವಾಗತಿ ಸಮಿತಿ ಅಧ್ಯಕ್ಷ ಮಳ್ಳೂರು ಶಿವಣ್ಣ, ಚಿಕ್ಕಬಳ್ಳಾಪುರ ನಗರದ ಅಂಬೇಡ್ಕರ್ ಭವನದಲ್ಲಿ ಜು.12 ಮತ್ತು 13 ರಂದು ಎರಡು ದಿನಗಳ ರೈತರ ಜಿಲ್ಲಾ ಸಮ್ಮೇಳನ ನಡೆಯಲಿದೆ. ರೈತ ಮುಖಂಡ ಮಾರುತಿ ಮಾನ್ಪಡೆ ಮತ್ತಿತರರು ಭಾಗವಹಿಸಲಿದ್ದಾರೆ ಎಂದರು.
ಸಮ್ಮೇಳನದ ಸಂಘಟನಾ ಕಾರ್ಯದರ್ಶಿ ಸಿ. ಗೋಪಿನಾಥ್, ಅಂತರ್ಜಲ ಮಟ್ಟ ದಿನೇ ದಿನೇ ಕುಸಿಯುತ್ತಿರುವುದರಿಂದ ರೈತರು ನೀರಾವರಿ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಈ ಹಿಂದೆ ದ್ರಾಕ್ಷಿ ಬೆಳೆಯನ್ನು ಕೇಳುವವರಿಲ್ಲದೇ ತೋಟಗಳಲ್ಲಿ ದ್ರಾಕ್ಷಿ ಕೊಳವೆಯುವಂತಾಯಿತು. ಅದೇ ರೀತಿ ಟೊಮೆಟೋ ಬೆಲೆ ಕುಸಿತದಿಂದ ನಷ್ಟ ಅನುಭವಿಸಬೇಕಾಯಿತು. ಹೀಗಿದ್ದರೂ ಸರ್ಕಾರಗಳು ನಿರ್ಲಕ್ಷ್ಯ ವಹಿಸಿದವು ಎಂದು ತಿಳಿಸಿದರು.
ಕೇಂದ್ರ ಸರ್ಕಾರವು ಬಂಡವಾಳ ಶಾಹಿಗಳ ಪರವಾಗಿ ಕೈಗೊಳ್ಳುತ್ತಿರುವ ನೀತಿಗಳು ಇನ್ನೂ ರೈತರನ್ನು ತೊಂದರೆಗೆ ಸಿಲುಕಿಸುತ್ತಿವೆ. ಬೆಳೆ ನಾಶ ಮತ್ತು ಬೆಲೆ ನಷ್ಟದಿಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಹೀಗಿದ್ದರೂ ಅವರ ನೆರವಿಗೆ ಬರುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ, ಇದರಿಂದ ಕೃಷಿಯಲ್ಲಿ ಪ್ರಗತಿ ಕುಂಠಿತವಾಗಿ ಆಹಾರೋತ್ಪಾದನೆಯಲ್ಲಿ ಹಿನ್ನಡೆ ಉಂಟಾಗುತ್ತಿದೆ ಎಂದರು.
ಬಯಲುಸೀಮೆ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಸೌಲಭ್ಯವನ್ನು ಒದಗಿಸದ ಹೊರತು ಉಳಿಗಾಲವಿಲ್ಲ. ಈ ನಿಟ್ಟಿನಲ್ಲಿ ಡಾ ಪರಮಶಿವಯ್ಯನವರ ವರದಿಯನ್ನು ಅನುಷ್ಠಾನಗೊಳಿಸಬೇಕೆಂದು ಸರ್ಕಾರದ ಮೇಲೆ ಒತ್ತಡ ಹೇರಲು ರೈತರಲ್ಲಿ ಜಾಗಣತಿ ಮೂಡಿಸಿ ಸಂಘಟಿಸಲಾಗುತ್ತಿದೆ. ಈ ಮೂಲಕ ನೀರಾವರಿ ಹೋರಾಟಕ್ಕೆ ಶಕ್ತಿ ತುಂಬಲಾಗುತ್ತಿದೆ ಎಂದರು.
ಜಿಲ್ಲಾ ಕೇಂದ್ರದಲ್ಲಿ ನಡೆಯುತ್ತಿರುವ ಸಮ್ಮೇಳನದಲ್ಲಿ ಸುಮಾರು 250 ಕ್ಕೂ ಹೆಚ್ಚು ನೋಂದಾಯಿತ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಇಲ್ಲಿ ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರವನ್ನು ತಿಳಿದುಕೊಳ್ಳುವ ಪ್ರಯತ್ನ ಮಾಡಲಾಗುವುದು. ಚರ್ಚೆಯ ನಂತರ ಸಮಗ್ರ ವರದಿ ತಯಾರಿಸಿ ಕರಡನ್ನು ರಾಜ್ಯ ಸಮ್ಮೇಳನದಲ್ಲಿ ಮಂಡಿಸಲಾಗುವುದು ಎಂದು ತಿಳಿಸಿದರು.
ಸಮ್ಮೇಳನದ ಪ್ರಧಾನ ಕಾರ್ಯದರ್ಶಿ ಬಿ.ಎನ್. ಮುನಿಕೃಷ್ಣಪ್ಪ, ಖಜಾಂಚಿ ಚನ್ನರಾಯಪ್ಪ, ಸೊಣ್ಣೇಗೌಡ, ಮಧುಲತಾ ಇದ್ದರು.