ಮಾಜಿ ಸ್ವೀಕರ್ ರಮೇಶ್‌ಕುಮಾರ್ ಆಸ್ತಿ ಮರು ಸರ್ವೆಗೆ 'ಹೈ' ಆದೇಶ
ಬೆಂಗಳೂರು: ಅರಣ್ಯ ಭೂಮಿ ಒತ್ತುವರಿ ಆರೋಪಕ್ಕೆ ಸಂಬಂಧಿಸಿದಂತೆ ವಿಧಾನಸಭೆ ಮಾಜಿ ಸ್ವೀಕರ್ ರಮೇಶ್‌ಕುಮಾರ್ ಅವರ ಆಸ್ತಿಯನ್ನು ಜಿಲ್ಲಾಧಿಕಾರಿಯ ಉಪಸ್ಥಿತಿಯಲ್ಲಿ ಮರುಸರ್ವೆ ನಡೆಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.
ಜಿಲ್ಲಾಧಿಕಾರಿಯ ಅನುಪಸ್ಥಿತಿಯಲ್ಲಿ ಸರ್ವೆ ನಡೆಸಲಾಗಿದೆ ಎಂದು ಆರೋಪಿಸಿ ರಮೇಶ್‌ಕುಮಾರ್ ಸಲ್ಲಿಸಿದ್ದ ಅರ್ಜಿವಿಚಾರಣೆ ನಡೆಸಿದ ನ್ಯಾ.ಎ.ಎಸ್. ಬೋಪಣ್ಣ ಅವರಿದ್ದ ಏಕಸದಸ್ಯ ಪೀಠ, ಈ ಆದೇಶ ನೀಡಿದೆ.
ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಹೊಸಹುಡ್ಲು ಗ್ರಾಮದಲ್ಲಿ 64.23 ಎಕರೆ ಮೀಸಲು ಅರಣ್ಯ ಭೂಮಿಯನ್ನು ರಮೇಶ್‌ಕುಮಾರ್ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಎ.ಟಿ. ರಾಮಸ್ವಾಮಿ ವರದಿ ಬಹಿರಂಗಪಡಿಸಿತ್ತು. ಈ ಹಿನ್ನೆಲೆಯಲ್ಲಿ ಕಳೆದ ಏ.30ರೊಳಗೆ ಒತ್ತುವರಿ ತೆರವುಗೊಳಿಸುವಂತೆ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್‌ಕುಮಾರ್ ಅವರಿಗೆ ಆದೇಶಿಸಿದ್ದರು. ಆದರೆ, ಅದನ್ನು ಪಾಲಿಸದ ಹಿನ್ನೆಲೆಯಲ್ಲಿ ಭೂಮಿಯನ್ನು ವಶಪಡೆದುಕೊಂಡು ಇಲಾಖೆಯ ಫಲಕ ಹಾಕಲಾಗಿತ್ತು.
ಇದನ್ನು ಪ್ರಶ್ನಿಸಿ ರಮೇಶ್‌ಕುಮಾರ್ ಅರ್ಜಿ ಸಲ್ಲಿಸಿದ್ದರು. ಸರ್ವೆ ಪ್ರಕ್ರಿಯೆ ನಡೆಯುವಾಗಿ ಜಿಲ್ಲಾಧಿಕಾರಿಗಳು ಹಾಜರಿರಲಿಲ್ಲ. ಆದ್ದರಿಂದ ಇದು ಕಾನೂನುಬಾಹಿರ ಎಂದು ಆಕ್ಷೇಪಿಸಿ ರಮೇಶ್‌ಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು.