ಶಾಲಾ ಮಕ್ಕಳಿಗೆ ಕಬ್ಬಿಣಾಂಶ ಮಾತ್ರೆ ವಿತರಣೆ
ಕ.ಪ್ರ.ವಾರ್ತೆ ಕೋಲಾರ ಜು. 17
ರಾಜ್ಯ ಸರ್ಕಾರ ಶಾಲಾ ಮಕ್ಕಳಿಗೆ ಆರೋಗ್ಯ ಇಲಾಖೆಯ ಮೂಲಕ ವಿತರಣೆ ಮಾಡುತ್ತಿರುವ ಕಬ್ಬಿಣಾಂಶದ ಮಾತ್ರೆಗಳನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಂಡು ಉತ್ತಮ ಆರೋಗ್ಯವಂತರಾಗಬೇಕೆಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಚೌಡೇಶ್ವರಿ ರಾಮಚಂದ್ರ ಕರೆ ನೀಡಿದ ರು.
ನಗರದ ನೂತನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಶಿಕ್ಷಣ ಇಲಾಖೆ ಆಶ್ರಯದಲ್ಲಿ 6 ರಿಂದ 10ನೇ ತರಗತಿ ಮಕ್ಕಳಿಗೆ ಕಬ್ಬಿಣಾಂಶದ ಮಾತ್ರೆಗಳನ್ನು ನೀಡಲು ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ದೇಶದ ಶಕ್ತಿಯಾಗಿರುವ ವಿದ್ಯಾರ್ಥಿಗಳು ಆರೋಗ್ಯವಂತರಾಗಿದ್ದಾಗ ಮಾತ್ರ ಸದೃಢ ರಾಷ್ಟ್ರವನ್ನು ನಿರ್ಮಾಣ ಮಾಡಲು ಸಾಧ್ಯ ಎಂದು ಅಭಿಪ್ರಾಯಪಟ್ಟ ಅವರು, ಹದಿಹರೆಯದ ಮಕ್ಕಳಲ್ಲಿ ಕಬ್ಬಿಣಾಂಶದ ಕೊರತೆಯಿಂದ ನಾನಾ ರೀತಿಯ ಆರೋಗ್ಯ ಸಮಸ್ಯೆ ಎದುರಾಗುತ್ತಿರುವುದರಿಂದ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕಬ್ಬಿಣಾಂಶದ ಮಾತ್ರೆ ನೀಡುವ ಕಾರ್ಯಕ್ರಮ ಶ್ಲಾಘನೀಯವಾಗಿದೆ ಎಂದರು.
ಜಿ.ಪಂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಸೀಮೋಲ್ ಮೋಹನ್ ಮಾತನಾಡಿ, ಸಮಾಜದಲ್ಲಿ ಶಿಕ್ಷಣ ಮತ್ತು ಆರೋಗ್ಯ ಮುಖ್ಯವಾಗಿರುವುದರಿಂದ ಮಕ್ಕಳು ಆರೋಗ್ಯದ ಮೂಲಕ ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡಬೇಕೆಂದರು.
ಪ್ಯಾಕೇಟ್ ಫುಡ್ ಸೇವನೆಯಿಂದ ಮಕ್ಕಳಲ್ಲಿ ಪೌಷ್ಟಿಕಾಂಶ ಕೊರತೆಯಾಗುತ್ತದೆ, ಸರ್ಕಾರ ಕಬ್ಬಿಣಾಂಶದ ಮಾತ್ರೆಗಳನ್ನು ನೀಡುತ್ತಿರುವುದರಿಂದ ಮಕ್ಕಳಲ್ಲಿ ಆರೋಗ್ಯ ಸುಧಾರಣೆ ಆಗುವುದರಿಂದ ಪ್ರತಿಯೊಬ್ಬರು ಇದರ ಪ್ರಯೋಜನ ಪಡೆಯಬೇಕೆಂದು ತಿಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಪ್ರಕಾಶ್ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಸುಮಾರು 15.90 ಲಕ್ಷ ಕಬ್ಬಿಣಾಂಶದ ಮಾತ್ರೆಗಳನ್ನು ಸರಬರಾಜು ಮಾಡಲಾಗಿದೆ, ಪ್ರತಿ ಸೋಮವಾರ ಮಕ್ಕಳಿಗೆ ಈ ಮಾತ್ರೆಗಳನ್ನು ವಿತರಣೆ ಮಾಡಲಿದ್ದು, ಒಂದು ತಿಂಗಳಿಗೆ ನಾಲ್ಕು ಬಾರಿ ಮಾತ್ರೆಗಳನ್ನು ನೀಡಬೇಕೆಂದು ಶಾಲಾ ಮುಖ್ಯಸ್ಥರಿಗೆ ತಿಳಿಸಿದರು.
ಕೆಜಿಎಫ್ಗೆ 2,11,775, ಕೋಲಾರ-3,40,666, ಮಾಲೂರು- 2,68,143, ಮುಳಬಾಗಲು- 2,97,298, ಬಂಗಾರಪೇಟೆ-2,59,893 ಹಾಗೂ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರಕ್ಕೆ 2,12,225 ಕಬ್ಬಿಣಾಂಶದ ಮಾತ್ರೆಗಳನ್ನು ವಿತರಣೆ ಮಾಡಲಾಗಿದೆ ಎಂದರು.
ತಾ.ಪಂ. ಅಧ್ಯಕ್ಷೆ ಭಾಗ್ಯಮ್ಮ ನಾರಾಯಣಮೂರ್ತಿ, ಡಿಡಿಪಿಐ ಪದ್ಮನಾಭ್, ಸರ್ಕಾರಿ ನೂತನ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲರಾದ ಗಾಯತ್ರಿ ರೆಡ್ಡಿ, ಪ್ರೌಢಶಾಲೆಯ ಉಪ ಪ್ರಾಂಶುಪಾಲ ರುದ್ರಪ್ಪ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಮಚಂದ್ರ, ಗೋವಿಂದಪ್ಪ ಇದ್ದರು. ತಾಲೂಕು ವೈದ್ಯಾಧಿಕಾರಿ ಲತಾ ಪ್ರಾಸ್ತಾವಿವಾಗಿ ಮಾತನಾಡಿದರು.