ನಾಟ್ಯ ಕಲಾವಿದೆ ಕಾವ್ಯಶ್ರೀಗೆ ಚಿನ್ನದ ಪದಕ ಪ್ರದಾನ
ಕ.ಪ್ರ.ವಾರ್ತೆ ಚಿಕ್ಕಬಳ್ಳಾಪುರ ಜು. 21
ನಾಟ್ಯ ಕಲಾವಿದೆ ಕಾವ್ಯಶ್ರೀ ನಾಗರಾಜ್ ಅವರು ಬೆಂಗಳೂರು ವಿಶ್ವವಿದ್ಯಾನಿಲಯದ ಎಂ.ಎ. ನೃತ್ಯ ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ರ್ಯಾಂಕ್ ಗಳಿಸಿದ್ದು, ಇಸ್ರೋ ಅಧ್ಯಕ್ಷ ಡಾ.ಕೆ. ರಾಧಾಕೃಷ್ಣನ್ ಚಿನ್ನದ ಪದಕ ಹಾಗೂ ಪದವಿ ಪ್ರಮಾಣ ಪತ್ರವನ್ನು ನೀಡಿ ಸನ್ಮಾನಿಸಿದ್ದಾರೆ.
ಬೆಂಗಳೂರಿನ ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ 48 ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಕಾವ್ಯಶ್ರೀರವರಿಗೆ ಚಿನ್ನದ ಪದಕವನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಕುಲಪತಿ ಪ್ರೊ.ಬಿ. ತಿಮ್ಮೇಗೌಡ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು. ಐತಿಹಾಸಿಕ ನಂದಿ ಬೆಟ್ಟದ ಶ್ರೀ ಯೋಗನಂದೀಶ್ವರ ಸ್ವಾಮಿ ದೇವಾಲಯದ ಪ್ರಧಾನ ಅರ್ಚಕ ಹಾಗೂ ನೈಸರ್ಗಿಕ ನಾರು ಬೇರು ಕಲಾವಿದ ಟಿ.ಎನ್. ನಾಗರಾಜರವರ ಪುತ್ರಿಯಾದ ಕುಮಾರಿ ಕಾವ್ಯಶ್ರೀರವರು ಈ ಸಾಧನೆಗೆ ಹಲವರು ಅಭಿನಂದನೆ ತಿಳಿಸಿದ್ದಾರೆ.