ಯುವ ಕಾಂಗ್ರೆಸ್ ಸದಸ್ಯತ್ವ ಅಭಿಯಾನಕ್ಕೆ ಅಕ್ರಂ ಚಾಲನೆ
ಕೋಲಾರ: ದೇಶದಲ್ಲಿ ಕಾಂಗ್ರೆಸ್‌ನ್ನು ಇನ್ನಷ್ಟು ಬಲಪಡಿಸಿ ಕೇಂದ್ರದಲ್ಲಿ ಮತ್ತೆ ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆಗೆ ಯುವಕರು ಪಣ ತೊಡಬೇಕೆಂದು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹ್ಮದ್ ಅಕ್ರಂ ಕರೆ ನೀಡಿದರು.
ನಗರದ ಪತ್ರಕರ್ತರ ಭವನದಲ್ಲಿ ಬುಧವಾರ ಯುವ ಕಾಂಗ್ರೆಸ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೋಲಾರ ಲೋಕಸಭಾ ವ್ಯಾಪ್ತಿಗೆ ಬರುವ ಕೋಲಾರ, ಮಾಲೂರು, ಬಂಗಾರಪೇಟೆ, ಕೆಜಿಎಫ್, ಶ್ರೀನಿವಾಸಪುರ, ಮುಳಬಾಗಿಲು ಮತ್ತು ಚಿಂತಾಮಣಿ ಹಾಗೂ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಸದಸ್ಯತ್ವ ಅಭಿಯಾನ ನಡೆಯಲಿದ್ದು ಪಕ್ಷದ ತತ್ವಸಿದ್ದಾಂತಗಳಿಗೆ ಬದ್ಧರಾಗಿರುವ 18 ವರ್ಷದಿಂದ 35 ವರ್ಷದವರೆಗಿನ ಎಲ್ಲ ಯುವಕ ಯುವತಿಯರು ಸದಸ್ಯತ್ವವನ್ನು ಪಡೆದುಕೊಳ್ಳಬಹುದೆಂದು ತಿಳಿಸಿದರು.
ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯಿಂದ ಯುವ ಕಾಂಗ್ರೆಸ್ ಸದಸ್ಯತ್ವ ಅಭಿಯಾನ ಆ.1ರಿಂದ ಸೆ.5ರವರೆಗೆ ನಡೆಯಲಿದೆ, ಈ ಬಾರಿ ಜಿಲ್ಲೆಯಲ್ಲಿ 50 ಸಾವಿರ ಹಾಗೂ ರಾಜ್ಯದಲ್ಲಿ 20 ಲಕ್ಷ ಯುವಕರನ್ನು ಸದಸ್ಯರನ್ನಾಗಿ ಮಾಡಿಕೊಳ್ಳುವುದಕ್ಕೆ ಪ್ರಯತ್ನಿಸಲಾಗುತ್ತಿದೆ ಎಂದರು.
ಪ್ರತಿ 2 ವರ್ಷಗಳಿಗೊಮ್ಮೆ ನಡೆಯಲಿರುವ ಸದಸ್ಯತ್ವ ಅಭಿಯಾನದ ನಂತರ ವಿವಿಧ ಹಂತಗಳಲ್ಲಿ ಚುನಾವಣೆ ನಡೆಸಿ ಪದಾಧಿಕಾರಿಗಳ ಆಯ್ಕೆ ಮಾಡುವುದರಿಂದ ಈ ಅಭಿಯಾನ ಮಹತ್ವ ಪಡೆದುಕೊಂಡಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಲೋಕಸಭಾ ಕ್ಷೇತ್ರ ಸದಸ್ಯತ್ವ ಅಭಿಯಾನದ ಉಸ್ತುವಾರಿ ಹಾಗೂ ಚುನಾವಣಾಧಿಕಾರಿಯಾದ ಬಿ.ಜಗದೀಶ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಲ್.ಅನಿಲ್ ಕುಮಾರ್, ಜಿ.ಪಂ ಮಾಜಿ ಅಧ್ಯಕ್ಷ ಜನ್ನಘಟ್ಟ ವೆಂಕಟಮುನಿಯಪ್ಪ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವೈ.ಲೋಕೇಶ್, ವೆಂಕಟಪತಿ, ಜೆ.ಎಸ್.ಕಾರ್ತಿಕ್, ಹರೀಶ್, ವಿವೇಕ್, ನವೀನ್ ಕುಮಾರ್, ಮಹ್ಮದ್ ಆಯಾಜ್ ಇದ್ದರು.