ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಅನ್ನದಾತನ ಸಂಕಷ್ಟ ನಿವಾರಣೆಗೆ ಮುಂದಾಗಿ: ಹರಿಕುಮಾರ್

Srinivasa Murthy VN
Updated On : 26 Jun 2013, 11:35 am

ಕೆಜಿಎಫ್: ದೇಶಕ್ಕೆ ಅನ್ನ ನೀಡುತ್ತಿರುವ ರೈತರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದು ಕೂಡಲೇ ರಾಜ್ಯದ ರೈತರ ಸಂಕಷ್ಟಗಳನ್ನು ಆಲಿಸಿ ಅಗತ್ಯ ಕ್ರಮಕ್ಕೆ ಮುಂದಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದಲ್ಲಿ ರೈತರ ಸಮಸ್ಯೆಗಳನ್ನು ಆಲಿಸಲು ಕರೆದಿದ್ದ ಸಭೆಯಲ್ಲಿ ಪಾಲ್ಗೊಂಡಿದ್ದ ಕೆಜಿಎಫ್ ಕ್ಷೇತ್ರದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಹುಲ್ಕೂರ್ ಹರಿಕುಮಾರ್ ಆಗ್ರಹಿಸಿದರು.
ಅದೇ ರೀತಿ ಕೂಡಲೇ ಕೃಷಿ ಬಜೆಟ್ ಮಂಡಿಸಬೇಕು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಜನತೆಯ ಹಲವಾರು ವರ್ಷಗಳ ಬೇಡಿಕೆಯಾದ ಶಾಶ್ವತ ನೀರಾವರಿ ಯೋಜನೆಯ ಜಾರಿಗೆ ಕ್ರಮ ಕೈಗೊಳ್ಳಬೇಕು, ಬೆಳೆಗಳ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು. ಬಸವ ಕಲ್ಯಾಣ ಯೋಜನೆಯಡಿಯಲ್ಲಿ ಕಳೆದ ಸಾಲಿನಲ್ಲಿ ಕೋಲಾರ ಜಿಲ್ಲೆಗೆ ಮಂಜೂರಾಗಿದ್ದ ಮನೆಗಳನ್ನು ಬಡವರು ಕಟ್ಟಿಕೊಳ್ಳಲು ಜಾಗವಿಲ್ಲದ ಕಾರಣ ಶೇ.50 ರಷ್ಟು ಬಡವರು ಮನೆಗಳಿಲ್ಲದೆ ಪರದಾಡುವಂತಾಗಿದೆ. ಆದ್ದರಿಂದ ತೀರಾ ಬಡವರಿಗೆ ಮನೆಗಳನ್ನು ಕಟ್ಟಿಕೊಳ್ಳಲು ನಿವೇಶನಗಳನ್ನು ನೀಡಬೇಕು ಎಂದು ಒತ್ತಾಯಿಸಿದರು.
ಕೆರೆಗಳನ್ನು ಪುನಶ್ಚೇತನಗೊಳಿಸಬೇಕು, ಮರಳು ಮಾಫಿಯಾ ದಂಧೆ ನಿರಂತರವಾಗಿ ನಡೆಯುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮಕ್ಕೆ ಮುಂದಾಗದೆ ಕಣ್ಮುಚ್ಚಿ ಕುಳಿತಿದ್ದಾರೆ. ರೈತರು ಮತ್ತು ಪೊಲೀಸರು ಮರಳು ಲಾರಿಗಳನ್ನು ಹಿಡಿದು ಕೊಟ್ಟರೆ ಅಂತಹವರಿಗೆ 10 ರಿಂದ 20 ಸಾವಿರ ರು. ದಂಡ ವಿದಿಸಿ ಕಳುಹಿಸುತ್ತಿದ್ದು ಮತ್ತೆ ಅವರು ರಾಜಾರೋಷವಾಗಿ ಅದೇ ದಂಧೆಗೆ ಇಳಿಯುತ್ತಿದ್ದಾರೆ. ಆದ್ದರಿಂದ ಮರಳು ಮಾಫಿಯಾ ತಡೆಗಟ್ಟಲು 1 ರಿಂದ 2 ಲಕ್ಷದ ವರೆಗೆ ದಂಡವನ್ನು ವಿಧಿಸಬೇಕು ಮತ್ತು ಅಕ್ರಮ ಮರಳು ದಂಧೆಗೆ ನೂತನ ಕಾನೂನು ತರಬೇಕು.
ಕೋಲಾರ ಜಿಲ್ಲೆಯಲ್ಲಿ ರೈತರು ಅತಿ ಹೆಚ್ಚು ಹಾಲು ಉತ್ಪಾದನೆ ಮಾಡುವುದರಿಂದ ಹೆಚ್ಚು ಗೋಶಾಲೆಗಳನ್ನು ಸ್ಥಾಪಿಸಬೇಕು. ರಾಜ್ಯದಲ್ಲಿ ನಕಲಿ ರಸಗೊಬ್ಬರ ಮಾರಾಟ ಹೆಚ್ಚಾಗಿದ್ದು ಅಂತಹವರ ವಿರುದ್ದ ಕ್ರಮ ಜರುಗಿಸಬೇಕು ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದರು.
ಸಭೆಯಲ್ಲಿ ಪಾಲ್ಗೊಂಡಿದ್ದ ರೈತ ಸಂಘಗಳ ಮುಖಂಡರುಗಳ ಸಮಸ್ಯೆಗಳನ್ನು ಆಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅತಿ ಶೀಘ್ರದಲ್ಲಿ ಸಂಬಂಧಪಟ್ಟ ಸಚಿವರ ಮತ್ತು ಅಧಿಕಾರಿಗಳ ಸಭೆಯನ್ನು ಕರೆದು ರೈತರ ಸಮಸ್ಯೆಗಳು ಮತ್ತು ಬೇಡಿಕೆಗಳ ಈಡೇರಿಕೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿರುವುದಾಗಿ ಹುಲ್ಕೂರ್ ಹರಿಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement