ಡೆಂಘೀ: ಜನರಲ್ಲಿ ಅರಿವು ಮೂಡಿಸಲು ಶಾಸಕ ಸಲಹೆ
ಚಿಕ್ಕಬಳ್ಳಾಪುರ: ಮಾರಣಾಂತಿಕ ಡೆಂಘೀ ರೋಗ ಬಾರದಂತೆ ಮುನ್ನೆಚ್ಚರಿಕೆ ಕ್ರಮದ ಬಗ್ಗೆ ಜನರಲ್ಲಿ ಆರಿವು ಮೂಡಿಸುವುದು ಅಗತ್ಯ ಎಂದು ಶಾಸಕ ಡಾ.ಕೆ. ಸುಧಾಕರ್ ಆರೋಗ್ಯ ಅಧಿಕಾರಿಗಳು ಹಾಗೂ ಕಾರ್ಯಕರ್ತರಿಗೆ ಸಲಹೆ ನೀಡಿದರು.
ನಗರದ ಅಂಬೇಡ್ಕರ್ ಭವನದಲ್ಲಿ ತಾಲೂಕು ಆರೋಗ್ಯ ಕಚೇರಿಯಿಂದ ಏರ್ಪಡಿಸಿದ್ದ ಡೆಂಘೀ ಜ್ವರದ ಬಗ್ಗೆ ಅರಿವು ಕಾರ್ಯಾಗಾರ ಹಾಗೂ ತಾಲೂಕಿನ ವಿವಿಧ ಇಲಾಖೆ ಅಧಿಕಾರಿಯೊಂದಿಗೆ ಸಮನ್ವಯ ಸಮಿತಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು ಜನತೆಯಲ್ಲಿ ಭಯದ ವಾತಾವರಣ ಉಂಟು ಮಾಡಿರುವ ಡೆಂಘೀ ಹಾಗೂ ಚಿಕೂನ್‌ಗುನ್ಯ ರೋಗ ಬಾರದಂತೆ ಮುನ್ನೆಚ್ಚರಿಕಾ ಕ್ರಮಗಳ ಜಾಗೃತಿ ಮೂಡಿಸಬೇಕಾಗಿದೆ ಎಂದರು.
ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಅಧಿಕಾರಿಯೊಂದಿಗೆ ಸಂಬಂಧಿತ ಇತರೆ ಇಲಾಖೆ ಅಧಿಕಾರಿಗಳು ಸಹಕರಿಸಬೇಕು. ಗ್ರಾಮಾಂತರ ಪ್ರದೇಶದ ಹಳ್ಳಿಗಳಲ್ಲಿ ರೋಗದ ಬಗ್ಗೆ ಜಾಗೃತಿ ಮೂಡಿಸಲು ವಿಶೇಷ ಕಾರ್ಯಾಗಾರವನ್ನು ಹಮ್ಮಿಕೊಳ್ಳಬೇಕು. ರೋಗ ನಿರೋಧಕ ಶಕ್ತಿ ಕಡಿಮೆವುಳ್ಳಂತಹ ವೃದ್ಧರು ಹಾಗೂ ಮಕ್ಕಳಿಗೆ ರೋಗ ತಗುಲದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.
ತಹಸೀಲ್ದಾರ್ ನಟೇಶ್ ಮಾತನಾಡಿ, ಆರೋಗ್ಯ ರಕ್ಷಣೆಗೆ ಸಂಬಂಧಿಸಿದಂತೆ ಸರ್ಕಾರ ಕೋಟ್ಯಂತರ ರು. ಹಣ ಖರ್ಚು ಮಾಡುತ್ತಿದೆ. ಆದರೇ ಉತ್ತಮ ಆರೋಗ್ಯ ಸೇವೆ ದೊರಕದ ಜನ ಆರೋಗ್ಯದಿಂದ ವಂಚಿತರಾಗುತ್ತಿದ್ದಾರೆ. ಡೆಂಘೀ ಬಾರದಂತೆ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಆರೋಗ್ಯ ಇಲಾಖೆಯಿಂದ ಸಾಕಷ್ಟು ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದರು.
ಕಾರ್ಯಾಗಾರದಲ್ಲಿ ತಾಲೂಕಿನ ಅಂಗನವಾಡಿ, ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಿಬ್ಬಂದಿಗೆ ಡೆಂಘೀ ಹಾಗೂ ಚಿಕೂನ್‌ಗುನ್ಯ ರೋಗದ ಬಗ್ಗೆ ಜಾಗೃತಿ ಹಾಗೂ ರೋಗ ಹರಡದಂತೆ ಎಚ್ಚರಿಕೆಯ ಕ್ರಮದ ಬಗ್ಗೆ ಉಪನ್ಯಾಸ ನೀಡಲಾಯಿತು.