ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಮೀನಾ ಮೇಳ, ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ

Parashurama
Updated On : 2 Mar 2013, 12:04 pm

ಚಿಕ್ಕಬಳ್ಳಾಪುರ: ನಗರದ ಸಾರ್ವಜನಿಕ ಶಿಕ್ಷಣ ಇಲಾಖೆಯ ಕಚೇರಿಯ ಆವರಣದಲ್ಲಿ ಶಾಲಾ ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಸಲುವಾಗಿ ಸರ್ವಶಿಕ್ಷಣ ಅಭಿಯಾನದಡಿ ಶುಕ್ರವಾರ ಆಯೋಜಿಸಲಾಗಿದ್ದ ಮೀನಾ ಮೇಳ ಮತ್ತು ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಕಾರ್ಯಕ್ರಮ ಆಕರ್ಷಕವಾಗಿ ನಡೆಯುವ ಮೂಲಕ ಎಲ್ಲರ ಗಮನ ಸೆಳೆಯಿತು. ಜಿಲ್ಲೆಯ ವಿವಿಧೆಡೆಯಿರುವ ಶಾಲೆಗಳಿಂದ ಮಕ್ಕಳು, ಶಿಕ್ಷಕರು ಭಾಗವಹಿಸಿ ಪ್ರದರ್ಶನವನ್ನು ಯಶಸ್ವಿಗೊಳಿಸಿದರು.
ಡಾ. ಅಬ್ದುಲ್ ಕಲಾಂ ಸಭಾಂಗಣದಲ್ಲಿ ಮಕ್ಕಳು ಮತ್ತು ಶಿಕ್ಷಕರು ಬಗೆಬಗೆಯ ಬಣ್ಣ ಬಣ್ಣಗಳಲ್ಲಿ ತಯಾರಿಸಿದಂತಹ ನಾನಾ ರೀತಿಯ ಕಲಿಕೋಪಕರಣಗಳು, ಮಾದರಿಗಳು, ಕಲಾಕೃತಿಗಳನ್ನು ಪ್ರದರ್ಶನದಲ್ಲಿಡಲಾಗಿತ್ತು. ಹಿರಿಯ ಅಧಿಕಾರಿಗಳು ಮತ್ತು ಬೇರೆ ಬೇರೆ ಶಾಲೆಯ ಮಕ್ಕಳು ಪ್ರದರ್ಶನವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಜಾಗೃತಿ ಮೂಡಿಸುವಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಸಹ ಮಕ್ಕಳಿಂದ ನಡೆದವು. ವರದಕ್ಷಿಣೆ ಪಿಡುಗು ಹಳ್ಳಿ ಹಳ್ಳಿಗೂ ವ್ಯಾಪಿಸಿ ಹೆಣ್ಣು ಮಕ್ಕಳನ್ನು ಶೋಷಣೆ ಮಾಡುವುದು. ಕೊನೆಗೆ ವರದಕ್ಷಿಣೆ ತೆಗೆದುಕೊಳ್ಳುತ್ತಿರುವುದರಿಂದಾಗುವ ಅನಾಹುತಗಳನ್ನು ತಿಳಿದುಕೊಂಡು ಆ ಪಿಡುಗನ್ನು ದೂರ ಮಾಡುವ ಸಲುವಾಗಿ ನಡೆದುಕೊಳ್ಳಬೇಕಾದ ಜವಾಬ್ದಾರಿಯ ಕುರಿತು ಮಕ್ಕಳು ತಮ್ಮ ನಾಟಕ ಪ್ರದರ್ಶನ ಮೂಲಕ ತಿಳಿಸಿದರು. ಹೆಣ್ಣು ಮಕ್ಕಳನ್ನು ಶಾಲೆಗೆ ಕಳುಹಿಸದೇ ಲಿಂಗ ತಾರತಮ್ಯ ಮಾಡುವಂತಹುದು ಸಹ ಸರಿಯಲ್ಲ ಎನ್ನುವುದನ್ನು ಸಹ ಪ್ರತಿಪಾದಿಸಿದರು.
ಇದಕ್ಕೂ ಮುಂಚೆ ನಡೆದ ವೇದಿಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಅಜಿತ್ ಪ್ರಸಾದ್, ಜೀವನದಲ್ಲಿ ಆರೋಗ್ಯ, ಶಿಕ್ಷಣ ಎರಡೂ ಬಹು ಮುಖ್ಯವಾದುದು. ಇದನ್ನರಿತು ಪೋಷಕರು ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣವನ್ನು ಕೊಡಿಸಬೇಕು. ವಿಶೇಷವಾಗಿ ಹೆಣ್ಣು ಮಕ್ಕಳು ಶಿಕ್ಷಣದಿಂದ ದೂರ ಉಳಿಯದಂತೆ ನೋಡಿಕೊಳ್ಳಬೇಕು. ಹೆಣ್ಣು ಮಕ್ಕಳು ಶಿಕ್ಷಣ ಪಡೆದುಕೊಂಡರೆ ಅವರು ಸ್ವಾವಲಂಬಿಗಳಾಗಿ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದರು.
ಹಿರಿಯ ಉಪನ್ಯಾಸಕ ಅಶ್ವತ್ಥರೆಡ್ಡಿ ಮಾತನಾಡಿ, ಹೆಣ್ಣು ಮಕ್ಕಳಿಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಹತ್ತು ಹಲವು ಯೋಜನೆಗಳಿವೆ. ಹೆಣ್ಣು ಮಕ್ಕಳಿಗೆ ಪ್ರಬಲವಾದ ಕಾಯ್ದೆಗಳಡಿ ರಕ್ಷಣೆ ಇದ್ದರೂ ಇಂದಿಗೂ ಸಹ ಹೆಣ್ಣು ಮಕ್ಕಳ ಮೇಲೆ ಹೆಚ್ಚಿಗೆ ದೌರ್ರ್ಜನ್ಯ ನಡೆಯುತ್ತಿದೆ. ಶೋಷಣೆಯೂ ನಿಂತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.
ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಗೋಪಾಲರೆಡ್ಡಿ ಮಾತನಾಡಿ, ಇಂದು ಸಹ ಬಹು ಸಂಖ್ಯೆಯಲ್ಲಿ ಶಾಲೆ ಬಿಟ್ಟ ಮಕ್ಕಳು ನಮಗೆ ಕಾಣಿಸುತ್ತಾರೆ. ಇದಕ್ಕೆ ಕಡಿವಾಣ ಹಾಕಿ ಮಕ್ಕಳು ಶಾಲೆಗೆ ಬರುವಂತೆ ಮಾಡುವ ನಿಟ್ಟಿನಲ್ಲಿ ಪ್ರತಿಯೊಬ್ಬರ ಜವಾಬ್ದಾರಿ ಮಹತ್ತರವಾದುದು ಎಂದರು.
ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕೆ.ಎಲ್. ಶ್ರೀನಿವಾಸ್, ಗೌರವ ಕಾರ್ಯದರ್ಶಿ ಜಗದೀಶ್ವರ ರೆಡ್ಡಿ, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಎನ್. ಕವನ, ಸರ್ವ ಶಿಕ್ಷಣ ಅಭಿಯಾನದ ಡಿ.ವೈ.ಪಿ.ಸಿಗಳಾದ ಮಂಜುನಾಥ್, ಎ.ಚಂದ್ರಶೇಖರ್ ಬಾಬು ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments