ಆಸ್ಪತ್ರೆಗೆ ಬೀಗ ಜಡಿಯಲು ಮುಂದಾದ ಸಂಘಟನೆಗಳು
ಕ.ಪ್ರ.ವಾರ್ತೆ ್ಣ ಚಿಕ್ಕಬಳ್ಳಾಪುರ ್ಣ ಮಾ. 19
ವೈದ್ಯರ ಕೊರತೆ ಮತ್ತು ಮೂಲ ಸೌಕರ್ಯಗಳ ಸಮಸ್ಯೆಯಿಂದ ಬಡ ರೋಗಿಗಳನ್ನು ಮತ್ತಷ್ಟು ಸಂಕಷ್ಟಕ್ಕೆ ಗುರಿ ಮಾಡುತ್ತಿರುವ ಜಿಲ್ಲಾ ಸರ್ಕಾರಿ ಆಸ್ಪತ್ರೆ ಸುಧಾರಣೆಗೆ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ವಹಿಸಿರುವ ಸರ್ಕಾರದ ಧೋರಣೆಗೆ ಆಕ್ರೋಶ ವ್ಯಕ್ತವಾಗಿದೆ. ಕೂಡಲೇ ಸಮಸ್ಯೆಯನ್ನು ಬಗೆಹರಿಸಲು ಒತ್ತಾಯಿಸಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಬೀಗ ಜಡಿಯಲು ಪ್ರಗತಿಪರ ಸಂಘಟನೆಗಳು ಮುಂದಾಗಿವೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖಂಡರು, ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರವಾಗಿರುವುದರಿಂದ ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ಬೇರೆ ಬೇರೆ ತಾಲೂಕುಗಳಿಂದ ಸಾರ್ವಜನಿಕರು ಚಿಕಿತ್ಸೆ ಬಯಸಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಆದರೆ, ಇಲ್ಲಿಗೆ ಬಂದವರಿಗೆ ಮೂಲಭೂತ ಸೌಕರ್ಯಗಳ ಕೊರತೆಯಿಂದ ಸಮರ್ಪಕವಾಗಿ ಚಿಕಿತ್ಸೆ ದೊರೆಯುತ್ತಿಲ್ಲ. ಬದಲಿಗೆ ಇಲ್ಲಿಗೆ ಬಂದು ರೋಗಿಗಳು ಮತ್ತಷ್ಟು ಪರದಾಡಬೇಕಾದ ದುಸ್ಥಿತಿಯ ವಾತಾವರಣ ಇಲ್ಲಿದೆ ಎಂದು ಟೀಕಿಸಿದರು.
ಸಿಬ್ಬಂದಿ ಕೊರತೆಯೂ ಇದಕ್ಕೆ ಬೋನಸ್ ಆಗಿ ಇದೆ. ಇನ್ನೂ ಸ್ವಚ್ಛತೆ ಬಗ್ಗೆ ಬೇರೆ ಹೇಳುವುದೇ ಬೇಡ. ಕೇವಲ ಹೆಸರಿಗೆ ಜಿಲ್ಲಾ ಸರ್ಕಾರಿ ಆಸ್ಪತ್ರೆಯಾಗಿದ್ದು ಇನ್ನೂ ತಾಲೂಕು ಮಟ್ಟದ ಆಸ್ಪತ್ರೆಯಾಗಿಯೇ ಉಳಿದಿದೆ ಎಂದು ವ್ಯಂಗ್ಯವಾಡಿದರು. ಸರ್ಕಾರಿ ಆಸ್ಪತ್ರೆಯಲ್ಲಿನ ಸಮಸ್ಯೆಗಳಿಂದ ಅನೇಕರು ಅನಿವಾರ್ಯವಾಗಿ ಖಾಸಗಿ ಆಸ್ಪತ್ರೆಗಳಿಗೆ ತೆರಳಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿಕೊಳ್ಳುತ್ತಿದ್ದರೆ, ಬಡ ಜನರು ಖಾಸಗೀ ಆಸ್ಪತ್ರೆಗಳಿಗೆ ಹೋಗಲು ಆಗದೇ, ಸರ್ಕಾರಿ ಆಸ್ಪತ್ರೆಯಲ್ಲಿ ಇರಲೂ ಆಗದೇ ಪರದಾಡುತ್ತಿದ್ದಾರೆ ಎಂದು ಆರೋಪಿಸಿದರು.
ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿನ ವೈದ್ಯರ ಕೊರತೆಯನ್ನು ನೀಗಿಸಿ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದು ಈಗಾಗಲೇ ಉಪ ವಿಭಾಗಾಧಿಕಾರಿಗಳಿಂದ ಹಿಡಿದು ಆರೋಗ್ಯ ಮಂತ್ರಿಗಳು, ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳವರೆಗೂ ಮನವಿಯನ್ನು ಸಲ್ಲಿಸಲಾಗಿದೆ. ಆದರೆ, ಪ್ರಯೋಜನ ಮಾತ್ರ ಆಗಿಲ್ಲ. ಈ ಹಿನ್ನೆಲೆಯಲ್ಲಿ ಇದೇ ತಿಂಗಳ 25 ರಂದು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಬೀಗ ಜಡಿದು ಪ್ರತಿಭಟಿಸಲು ಮುಂದಾಗಿರುವುದಾಗಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಕೆ.ಸಿ. ರಾಜಾಕಾಂತ್, ಸೊಣ್ಣೇಗೌಡ, ಚಂದ್ರಣ್ಣ, ಬಿ.ಹೆಚ್. ನರಸಿಂಹಯ್ಯ, ಭೈರೇಗೌಡ, ಚಲಪತಿ, ಸುಷ್ಮಾ ಶ್ರೀನಿವಾಸ್, ಪೃಥ್ವಿರಾಜ್ ಮುಂತಾದವರು ಉಪಸ್ಥಿತರಿದ್ದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.