ಕೆಜೆಪಿಗೆ ಹೆಚ್ಚು ಸ್ಥಾನ: ಶ್ರೀರಾಮ್ ವಿಶ್ವಾಸ
ಕನ್ನಡಪ್ರಭ ವಾರ್ತೆ ಕೆಜಿಎಫ್ ಮಾ.26
ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜನಪರ ಅಭಿವೃದ್ಧಿ ಯೋಜನೆಗಳನ್ನು ಗುರುತಿಸಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕ ಜನತಾ ಪಕ್ಷ ಅತಿ ಹೆಚ್ಚು ಸ್ಥಾನಗಳನ್ನು ಪಡೆಯಲಿದೆ ಎಂದು ಕೆಜೆಪಿ ರಾಜ್ಯ ಉಪಾಧ್ಯಕ್ಷ ಶ್ರೀರಾಮ್ ಅವರು ಕೆಜಿಎಫ್ನ ಮೊಯ್ದು ಮಹಾಲ್ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯರ್ತರ ಸಭೆಯಲ್ಲಿ ಮಾತನಾಡಿದರು.
ಪಕ್ಷದ ನಗರ ಘಟಕದ ಅಧ್ಯಕ್ಷ ಹಾಗೂ ನಗರಸಭಾ ಸದಸ್ಯ ದಾಸ್ಚಿನ್ನಸವರಿ ಅವರ ನೇತೃತ್ವದಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಹಲವಾರು ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದು, ಕೆಜಿಎಫ್ ಕ್ಷೇತ್ರದಲ್ಲಿ ಕೆಜೆಪಿ ಬಲಪಡಿಸಲು ಮತ್ತು ಅಭ್ಯರ್ಥಿಯನ್ನು ಜಯಶೀಲರನ್ನಾಗಿ ಮಾಡಲು ಎಲ್ಲರೂ ಒಗ್ಗಟ್ಟಿನಿಂದ ಶ್ರಮವಹಿಸಿ ದುಡಿಯುವಂತೆ ಸೂಚಿಸಿದರು.
ಯಡಿಯೂರಪ್ಪರವರ ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿ ಜನರು ಕೆಜೆಪಿಯನ್ನು ಅಧಿಕಾರಕ್ಕೆ ತರುವುದು ಖಚಿತ. ಈ ನಿಟ್ಟಿನಲ್ಲಿ ಕೆಜಿಎಫ್ ಕ್ಷೇತ್ರದಲ್ಲಿ ಪಕ್ಷದ ಶಾಸಕರನ್ನು ಜನರು ಆಯ್ಕೆ ಮಾಡಲಿದ್ದಾರೆ ಎಂದರು.
ಈ ವೇಳೆ ಕೆಜಿಎಫ್ ಕ್ಷೇತ್ರದ ಕೆಜೆಪಿ ಪಕ್ಷದ ಆಕಾಂಕ್ಷಿಗಳಾದ ಬಾಸ್ಕರನ್, ಎಸಿಪಿ ವೆಂಕಟೇಶ್, ಮುತ್ತುಮಾಣಿಕ್ಯಂ, ಆನಂದ್ರಾಜ್ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದು ಪಕ್ಷದಿಂದ ಯಾರಿಗೇ ಟಿಕೆಟ್ ನೀಡಿದರೂ ಬಿನ್ನಾಭಿಪ್ರಾಯವಿಲ್ಲದೆ ಅಭ್ಯರ್ಥಿಯ ಗೆಲವಿಗೆ ಕೈ ಜೋಡಿಸಬೇಕು ಎಂದು ಕಾರ್ಯಕರ್ತರಿಗೆ ಹಾಗೂ ಮುಖಂಡರಿಗೆ ರಾಜ್ಯ ಉಪಾಧ್ಯಕ್ಷ ಶ್ರೀರಾಮ್ ಅವರು ತಿಳಿಸಿದರು.
ಕಾರ್ಯಕರ್ತರ ಸಭೆಯಲ್ಲಿ ಜಿಲ್ಲಾ ಕಾರ್ಯದರ್ಶಿ ಜಗದೀಶಚಾರಿ, ಮುಖಂಡರಾದ ಸೈಯದ್ಸಲೀಂ, ನಜೀಮಾಬೇಗಂ, ಸಂಪತ್, ಶಂಕರ್, ಗ್ರಾಮೀಣ ಭಾಗದ ಅಧ್ಯಕ್ಷ ಕಂಬಳಿಬಾಬು, ನಗರಸಭಾ ಸದಸ್ಯ ಲಾರೆನ್ಸ್, ಅಯ್ಯಪ್ಪ ಸೇರಿದಂತೆ ಇತರೇ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.