ನಜೀರ್ ಅಹಮ್ಮದ್ ಕೋಲಾರ ವಿಧಾನಸಭಾ 'ಕೈ' ಅಭ್ಯರ್ಥಿ?
ಕೋಲಾರ: ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಗಾಗಿ ಬುಧವಾರ ಮಧ್ಯಾಹ್ನ 3 ಗಂಟೆಗೆ ನಗರದ ಕಾಬಾ ಪ್ಲಾಜಾದಲ್ಲಿ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಸಭೆ ಕರೆಯಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅನಿಲ್ ಕುಮಾರ್ ತಿಳಿಸಿದ್ದಾರೆ.
ಸಭೆಯ ಅಧ್ಯಕ್ಷತೆಯನ್ನು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶ್ರೀರಾಮಪ್ಪ ವಹಿಸಲಿದ್ದು ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ, ವಿಧಾನ ಪರಿಷತ್ ಸದಸ್ಯ ನಜೀರ್ ಅಹಮ್ಮದ್, ಮಾಜಿ ಸದಸ್ಯ ವಿ.ಆರ್.ಸುದರ್ಶನ್, ಮುಖಂಡರಾದ ಬಿಸ್ಸೇಗೌಡ, ವೆಂಕಟಮುನಿಯಪ್ಪ ಸೇರಿದಂತೆ ಗ್ರಾಮೀಣ ಪ್ರದೇಶದ ಮುಖಂಡರು ಸಭೆಯಲ್ಲಿ ಭಾಗವಹಿಸಲಿದ್ದಾರೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೋಲಾರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕೆಲವು ದಿನಗಳ ಹಿಂದೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಕುಮಾರ್, ಪ್ರಸಾದ್ ಬಾಬು, ನಿಸಾರ್ ಅಹಮ್ಮದ್, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಅಕ್ರಂ ಸೇರಿದಂತೆ ಅನೇಕರು ಅರ್ಜಿ ಸಲ್ಲಿಸಿದ್ದರು.
ಕ್ಷೇತ್ರದಲ್ಲಿ ಕಾಂಗ್ರೆಸ್ ಬಲಿಷ್ಟವಾಗಬೇಕಾದರೆ ಮತ್ತು ಚುನಾವಣೆಯಲ್ಲಿ ಸಚಿವ ವರ್ತೂರ್ ಪ್ರಕಾಶ್ ಮತ್ತು ಜೆಡಿಎಸ್ ಅಭ್ಯರ್ಥಿ ಶ್ರೀನಿವಾಸಗೌಡರನ್ನು ಸೋಲಿಸಬಲ್ಲ ಪ್ರಬಲ ಅಭ್ಯರ್ಥಿಯ ಅವಶಕ್ಯತೆಯಿದೆ ಎಂಬ ಉದ್ದೇಶದಿಂದ ನಜೀರ್ ಅಹಮ್ಮದ್ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಬೇಕೆಂದು ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ಅಭಿಪ್ರಾಯಿಸಿದ್ದಾರೆ. ಜತೆಗೆ ಕೇಂದ್ರ ಸಚಿವರಾದ ಗುಲಾಂ ನಬೀ ಆಜಾದ್ ಅವರು ಸಹ ನಜೀರ್ ಅಹಮ್ಮದ್ ಹೆಸರು ಸೂಚಿಸಿರುವ ಹಿನ್ನಲೆಯಲ್ಲಿ ಅಭ್ಯರ್ಥಿಯಾಗುವುದಕ್ಕೆ ನಜೀರ್ ಅಹಮ್ಮದ್ ಒಪ್ಪಿದ್ದಾರೆನ್ನಲಾಗಿದೆ. ಬುಧವಾರದ ಸಭೆಯಲ್ಲಿ ನಜೀರ್ ಅಹಮ್ಮದ್ ಅವರನ್ನು ಪಕ್ಷದ ಒಮ್ಮತದ ಅಭ್ಯರ್ಥಿಯನ್ನಾಗಿ ನಿರ್ಧರಿಸಿ ನಿರ್ಣಯವನ್ನು ಕೆಪಿಸಿಸಿ ಹಾಗೂ ಹೈಕಮಾಂಡ್‌ಗೆ ಸಲ್ಲಿಸುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳಿಂದ ತಿಳಿದು ಬಂದಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.