ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಸಿಬಿಐ ತನಿಖೆಗೆ ಒತ್ತಾಯಿಸಿ ಪ್ರತಿಭಟನೆ

Rashmi Kasaragodu
Updated On : 7 Nov 2013, 12:57 pm

ಬಾಗೇಪಲ್ಲಿ: ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ ತಾಲೂಕು ಸಮಿತಿ ನೇತೃತ್ವದಲ್ಲಿ ನ್ಯಾಷನಲ್ ಕಾಲೇಜ್ ಸೇರಿದಂತೆ ವಿವಿಧ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಪಟ್ಟಣದ ನ್ಯಾಷನಲ್ ಕಾಲೇಜು ಮುಂಭಾಗದಿಂದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ನಡೆಸಿ ಸರ್ಕಾರಿ ಬಸ್ ನಿಲ್ದಾಣದ ಮುಂಭಾಗದಲ್ಲಿ ರಸ್ತೆ ತಡೆ ನಡೆಸಿದರು. ನಂತರ ಮಾತನಾಡಿದ ಎಸ್ಎಫ್ಐ ತಾಲೂಕು ಸಮಿತಿ ಅಧ್ಯಕ್ಷ ಎಸ್. ರಾಜಶೇಖರ್, ಅನೇಕ ಅಹಿತಕರ ಘಟನೆಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿವೆ. ಹೀಗೆ ಮಾನವ ವಿರೋಧಿ ಕೃತ್ಯಗಳು ನಡೆಯುತ್ತಿದ್ದರೂ ಜಾಣ ಕುರುಡರಂತೆ ಸ್ಥಳೀಯ ಪೊಲೀಸರು ವರ್ತಿಸುತ್ತಿದ್ದಾರೆಂದು ಆರೋಪಿಸಿದರು. ನಂತರ ತಹಸೀಲ್ದಾರ್ ಎಂ.ಎ. ಪದ್ಮ ಅವರಿಗೆ ಮನವಿ ಸಲ್ಲಿಸಿದರು. ಈಶ್ವರಪ್ಪ, ರಾಘವೇಂದ್ರರೆಡ್ಡಿ, ರವಿ, ಅಭಿಲಾಷ್, ನರಸಿಂಹ ಮೂರ್ತಿ, ಪ್ರಸಾದ್, ಶ್ರೀನಾಥ್, ಕೃಷ್ಣೇಗೌಡ, ಅಜಯ್, ಎಲ್ಲೋಡು ವಿಜಯಕುಮಾರ್ರೆಡ್ಡಿ, ಪ್ರಕಾಶ್, ವೇಣು, ಪೃಥ್ವಿ, ನಂದಿನಿ, ಚೈತ್ರಾ, ಕವಿತಾ ಇದ್ದರು.
ಜನತಾ ನ್ಯಾಯಾಲಯದಲ್ಲಿ 149 ಪ್ರಕರಣ ರಾಜಿ
ಚಿಕ್ಕಬಳ್ಳಾಪುರ: ಕಳೆದ ಮೂರು ತಿಂಗಳಿಂದ ಜನತಾ ನ್ಯಾಯಾಲಯದಲ್ಲಿ ಒಟ್ಟು 149 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ ಎಂದು ಜಿಲ್ಲಾ ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಎಸ್.ವೈ. ಈರಣ್ಣನವರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾ ಸತ್ರ ನ್ಯಾಯಾಲಯದ ವತಿಯಿಂದ ನ.5 ರಿಂದ 23 ರವರೆಗೆ ಬೃಹತ್ ಜನತಾ ನ್ಯಾಯಾಲಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕೆಂದು ಮನವಿ ಮಾಡಿದರು. ಸಣ್ಣ ಪುಟ್ಟ ಕ್ರಿಮಿನಲ್ ಪ್ರಕರಣಗಳು ಸೇರಿದಂತೆ  ಭಾಗಕ್ಕಾಗಿ ಹಾಕಿರುವ ದಾವೆಗಳು, ಜೀವನಾಂಶ ದಾವೆ, ಹಣ ವಸೂಲಿಗಾಗಿ ಇರುವ ದಾವೆ, ಚೆಕ್ಕು ಪ್ರಕರಣಗಳು, ಮೋಟಾರು ವಾಹನ ಪ್ರಕರಣಗಳು, ಭೂ ಸ್ವಾಧೀನ ಪ್ರಕರಣಗಳು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಜನತಾ ನ್ಯಾಯಾಲಯದಲ್ಲಿ ಇತ್ಯರ್ಥ ಪಡಿಸಿಕೊಳ್ಳಬಹುದಾಗಿದೆ ಎಂದ ಅವರು, ಜಿಲ್ಲೆಯಲ್ಲಿ ಸೆಪ್ಟಂಬರ್ ತಿಂಗಳಲ್ಲಿ 87 ಪ್ರಕರಣ, ಅಕ್ಟೋಬರ್ ತಿಂಗಳಲ್ಲಿ 58 ಪ್ರಕರಣ, ನವೆಂಬರ್ 5 ವರೆಗೆ ಒಟ್ಟು 4 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲಾಗಿದೆ ಎಂದರು. ರಾಜಿ ಸಂಧಾನದ ಮೊಕದ್ದಮೆಗಳನ್ನು ಇತ್ಯರ್ಥಪಡಿಸಿಕೊಳ್ಳುವುದರಿಂದ ತುಂಬಾ ಅನುಕೂಲವಾಗುತ್ತದೆ. ಸಮಯ ಮತ್ತು ಹಣ ಉಳಿತಾಯ ಮಾಡಿಕೊಳ್ಳುವುದಲ್ಲದೇ ಮಾನಸಿಕ ನೆಮ್ಮದಿ ಪಡೆಯಬಹುದೆಂದ ಅವರು, ರಾಜಿ ಸಂಧಾನದ ಮೂಲಕ ಪ್ರಕರಣವನ್ನು ಇತ್ಯರ್ಥ ಪಡಿಸಿಕೊಂಡಲ್ಲಿ ಕಕ್ಷಿದಾರರು ನ್ಯಾಯಾಲಯಕ್ಕೆ ಪಾವತಿಸಿದ ಶುಲ್ಕವನ್ನು ಸಂಪೂರ್ಣವಾಗಿ ಮರು ಪಾವತಿಸಲಾಗುತ್ತದೆ ಎಂದು ತಿಳಿಸಿದರು.
ಲೋಕ ಅದಾಲತ್ ಕಾರ್ಯಕ್ರಮಗಳನ್ನು ಮಧ್ಯಾಹ್ನದ ಅವಧಿಯಲ್ಲಿ 3 ಗಂಟೆಯಿಂದ ಸಂಜೆ 5 ಗಂಟೆಯವರೆಗೆ  ಕೈಗೊಳ್ಳಲಾಗುತ್ತಿದ್ದು ಇಬ್ಬರು ಕಕ್ಷಿದಾರರನ್ನೂ ಕರೆಸಿ ಚರ್ಚಿಸಿ ಪ್ರಕರಣವನ್ನು ಇತ್ಯರ್ಥಪಡಿಸಲಾಗುತ್ತದೆ. ಇಲ್ಲಿ ರಾಜಿಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪುನಃ ಮೇಲ್ಮನವಿ ಸಲ್ಲಿಸಲು ಅವಕಾಶವಿಲ್ಲ. ಜಿಲ್ಲೆಯಲ್ಲಿ ಇನ್ನೂ ಒಟ್ಟು 2,137 ಪ್ರಕರಣಗಳು ಬಾಕಿ ಇದ್ದು ಇವುಗಳನ್ನು ಜನತಾ ನ್ಯಾಯಾಲಯದಲ್ಲಿ ಕೈಗೆತ್ತಿಕೊಂಡು ಇತ್ಯರ್ಥಪಡಿಸುವ ಉದ್ದೇಶ ಹೊಂದಲಾಗಿದೆ ಎಂದರು. ಗೋಷ್ಠಿಯಲ್ಲಿ ನ್ಯಾಯಾಧೀಶರಾದ ರಾಜೇಶ್ವರಿ ಎನ್. ಹೆಗಡೆ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement