ಪರಮಶಿವಯ್ಯ ವರದಿ ಅನುಷ್ಠಾನಕ್ಕೆ ಬದ್ಧ
ಬಾಗೇಪಲ್ಲಿ: ಕೋಲಾರ-ಚಿಕ್ಕಬಳ್ಳಾಪುರ ಸೇರಿದಂತೆ ಬರಡು ಜಿಲ್ಲೆಗಳಿಗೆ ಶಾಶ್ವತ ಕುಡಿಯುವ ನೀರನ್ನು ಕಲ್ಪಿಸುವ ನಿಟ್ಟಿನಲ್ಲಿ ಪರಮಶಿವಯ್ಯ ವರದಿ ಆಧಾರಿತ ಯೋಜನೆ ಹಾಗೂ ಎತ್ತಿನ ಹೊಳೆ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ. ಪರಮಶಿವಯ್ಯ ಯೋಜನೆಯನ್ನು ಶೀಘ್ರದಲ್ಲಿ ಕೈಗೆತ್ತಿಕೊಳುವ ಮೂಲಕ ಈ ಭಾಗದ ಜನರ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಶ್ರೀಜಚನಿ ಅವರ 105ನೇ ಜಯಂತಿ ಅಂಗವಾಗಿ ತಾಲ್ಲೂಕಿನ ಗೂಳೂರು ನಿಡುಮಾಮಿಡಿ ಮಹಾಸಂಸ್ಥಾನ ಮಠದ ಮುಂಭಾಗದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮೌಢ್ಯಗಳ ಪ್ರತಿಬಂಧಕ ಕಾಯ್ದೆ ವಿಚಾರದಲ್ಲಿ ಸರ್ಕಾರ ಯಾವುದೇ ರೀತಿಯಲ್ಲಿ ಆತುರದ ನಿರ್ಧಾರ ತೆಗೆದುಕೊಳ್ಳುತ್ತಿಲ್ಲ. ಆದರೆ, ಮೌಢ್ಯಗಳ ಹೆಸರಿನಲ್ಲಿ ಶೋಷಣೆ ನಡೆಯುವುದು, ಜನತೆಯನ್ನು ದಾರಿ ತಪ್ಪಿಸುವ ಕೆಲಸವನ್ನು ನಿಲ್ಲಿಸಲು ರಾಜ್ಯದಲ್ಲಿ ಮೌಢ್ಯಗಳ ಪ್ರತಿಬಂಧಕ ಕಾಯ್ದೆಯನ್ನು ಜಾರಿಗೆಗೆ ತರಬೇಕಾಗಿದೆ ಎಂದರು.
ಗೂಳೂರು ನಿಡುಮಾಮಿಡಿ ಮಹಾ ಸಂಸ್ಥಾನದ ಮಠಾಧೀಶ ಶ್ರೀ ಚನ್ನಮಲ್ಲ ಮಹಾ ಸ್ವಾಮಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ವಹಿಸಿದ್ದರು. ಕಂದಾಯ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಶ್ರೀ ಜಚನಿಯವರು ರಚಿಸಿರುವ ಶ್ರೀ ಜಚನಿಯವರ ಭಾಷಣಗಳು ಹಾಗೂ ಅರಿವಿನ ಹಾದಿಯಲ್ಲಿ ಎಂಬ ಪುಸ್ತಕಗಳನ್ನು ಬಿಡುಗಡೆಗೊಳಿಸಿದರು.