ಲಾಠಿ ಪ್ರಹಾರ ಖಂಡಿಸಿ ಠಾಣೆ ಮುಂದೆ ಧರಣಿ
ಬಾಗೇಪಲ್ಲಿ: ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲು ಹೋದ ಜಿಲ್ಲಾ ಶಾಶ್ವತ ನೀರಾವರಿ ಹೋರಾಟ ಸಮಿತಿ ಮುಖಂಡರ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿದ್ದಾರೆ.
ತಾಲೂಕಿನ ಗೂಳೂರು ಸಮೀಪದ ನಿಡುಮಾಮಿಡಿ ಮಠದಲ್ಲಿ ಅಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೆಲಿಕಾಪ್ಟರ್‌ನಿಂದ ಇಳಿದ ಕೂಡಲೇ ಶಾಶ್ವತ ನೀರಾವರಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಆಂಜನೇಯರೆಡ್ಡಿ ನೇತೃತ್ವದಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲು ಹೋದಾಗ ಪೊಲೀಸರು ತಡೆದರು. ಆಗ ಜಿಲ್ಲಾ ಶಾಶ್ವತ ನೀರಾವರಿ ಹೋರಾಟ ಸಮಿತಿ ಮುಖಂಡರು ಮುಖ್ಯಮಂತ್ರಿ ಬಳಿಗೆ ನುಗ್ಗಲು ಯತ್ನಿಸಿದಾಗ ಪೊಲೀಸರ ಹಾಗೂ ಜಿಲ್ಲಾ ಶಾಶ್ವತ ನೀರಾವರಿ ಹೋರಾಟ ಸಮಿತಿ ಮುಖಂಡರ ನಡುವೆ ವಾಕ್ ಸಮರ ನಡೆದು ಪೊಲೀಸರು ಮುಖಂಡರನ್ನು ಲಾಠಿಗಳಿಂದ ಥಳಿಸಿದ್ದಾರೆ. ಪೊಲೀಸ್ ಜೀಪಿನಲ್ಲಿ ಬಾಗೇಪಲ್ಲಿ ಠಾಣೆಗೆ ಕರೆತಂದು ನಂತರ ಬಿಡುಗಡೆಗೊಳಿಸಿದ್ದಾರೆ.
ಘಟನೆಯಲ್ಲಿ ಜಿಲ್ಲಾ ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಅಂಜನೇಯರೆಡ್ಡಿ, ಬಿ. ನಾರಾಯಣಸ್ವಾಮಿ, ಬೈರೇಗೌಡ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನೆಯಿಂದ ಕುಪಿತಗೊಂಡ ಜಿಲ್ಲಾ ಶಾಶ್ವತ ನೀರಾವರಿ ಹೋರಾಟ ಸಮಿತಿ ಮುಖಂಡರು ಬಾಗೇಪಲ್ಲಿ ಪೊಲೀಸ್ ಠಾಣೆ ಮುಂದೆ ಧರಣಿ ನಡೆಸಿ ಪೊಲೀಸರ ಲಾಠಿ ಪ್ರಹಾರ ಖಂಡಿಸಿ ತಪ್ಪಿತಸ್ಥ ಪೊಲೀಸರ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಿದರು.
ಸ್ಥಳಕ್ಕೆ ಆಗಮಿಸಿದ ಜಿಲ್ಲಾ ರಕ್ಷಣಾಧಿಕಾರಿ ಎನ್. ಶಿವಪ್ರಸಾದ್ ಧರಣಿ ನಿರತರೊಂದಿಗೆ ಮಾತುಕತೆ ನಡೆಸಿ ಸಮಾಧಾನಪಡಿಸಿದರು.