ದೌರ್ಜನ್ಯ ತಡೆಯಲು ವಿಫಲ; ಎಸ್ಪಿ ಕಚೇರಿಗೆ ಮುತ್ತಿಗೆ
ಚಿಕ್ಕಬಳ್ಳಾಪುರ: ಗೌರಿಬಿದನೂರು ಕಾಲೇಜಿನ ನೇತ್ರಾಳ ಅನುಮಾನಾಸ್ಪದ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಒತ್ತಾಯಿಸುತ್ತಿದ್ದರೂ ಪೊಲೀಸ್ ಇಲಾಖೆ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿ ಎಸ್ಎಫ್ಐ, ಡಿವೈಎಫ್ಐ, ಜನವಾದಿ ಮಹಿಳಾ ಸಂಘಟನೆ, ಸಿಪಿಎಂ(ಐ) ಸೇರಿದಂತೆ ವಿವಿಧ ಪ್ರಗತಿಪರ ಸಂಘಟನೆಗಳು ನ.19 ರಂದು ಜಿಲ್ಲಾ ರಕ್ಷಣಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧರಿಸಿವೆ.
ಜಿಲ್ಲೆಯಲ್ಲಿ ಇತ್ತೀಚೆಗೆ ಮಹಿಳೆಯರ 5 ಅಸಹಜ ಸಾವು ಪ್ರಕರಣಗಳು ನಡೆದಿರುವುದಲ್ಲದೇ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯವೆಸಗುವ ಪ್ರಕರಣಗಳು ನಡೆದು ಮಹಿಳೆಯರು ಭಯಬೀಳುವ ವಾತಾವರಣ ನಿರ್ಮಾಣವಾಗಿದ್ದರೂ ಜಿಲ್ಲಾ ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತ ನಿಷ್ಕ್ರಿಯವಾಗಿದೆ ಎಂದು ಆರೋಪಿಸಿದರು.
ಈ ಹಿನ್ನೆಲೆಯಲ್ಲಿ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲು ನ.19 ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು ನಂತರ ಅಧಿಕಾರಿಗಳ ನಿರ್ಲಕ್ಷ್ಯ ಮನೋಭಾವ ಮುಂದುವರೆಸಿದರೆ ಅನಿವಾರ್ಯವಾಗಿ ರಾಜ್ಯಾದ್ಯಂತ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಎಂ.ಪಿ. ಮುನಿವೆಂಕಟಪ್ಪ, ಜಿಲ್ಲೆಯ ಗೌರಿಬಿದನೂರಿನ ಕಾಲೇಜಿನ ವಿದ್ಯಾರ್ಥಿನಿ ನೇತ್ರಾ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು ಆಕೆಯನ್ನು ಕೊಲೆ ಮಾಡಲಾಗಿದೆ ಎಂಬ ಮಾತುಗಳು ಹೆಚ್ಚಾಗಿ ಕೇಳಿ ಬರುತ್ತಿರುವುದರ ನಡುವೆ ಮೃತಳ ಪೋಷಕರು ಭಯದಿಂದ ದ್ವಂದ್ವ ಹೇಳಿಕೆ ನೀಡುತ್ತಿದ್ದಾರೆ. ಇದರಿಂದ ರಾಜಕೀಯ ಪ್ರಭಾವ ಹೊಂದಿರುವವರು ಪೋಷಕರ ಮೇಲೆ ಒತ್ತಡ ಹೇರಿ ಪ್ರಕರಣ ಮುಚ್ಚಿ ಹಾಕಲು ಯತ್ನಿಸುತ್ತಿದ್ದಾರೆ. ವ್ಯಾಪಕ ಹೋರಾಟಗಳ ಹಿನ್ನೆಲೆಯಲ್ಲಿ ಧೈರ್ಯ ತಂದುಕೊಂಡು ಇದೀಗ ಮೃತಳ ತಂದೆ ನೇತ್ರಾಳಿಗೆ ಹೊಟ್ಟೆ ನೋವು ಇಲ್ಲ, ಆಕೆಯನ್ನು ಕೊಲೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನೇತ್ರಾ ಆತ್ಮಹತ್ಯೆ ಮಾಡಿಕೊಂಡಳೋ, ಕೊಲೆಯಾದಳೋ ಎನ್ನುವುದನ್ನು ಬಯಲಿಗೆಳೆಯಲು ಸಮಗ್ರವಾಗಿ ತನಿಖೆ ನಡೆಸಬೇಕೆಂದು ಆಗ್ರಹಿಸಿದರು.
ನಿಷ್ಕ್ರಿಯ ಆಡಳಿತ: ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ, ಅತ್ಯಾಚಾರ, ಅಕ್ರಮ ಮಾರಾಟ, ವಿದ್ಯಾರ್ಥಿನಿಯರ ನಾಪತ್ತೆ ಸೇರಿದಂತೆ ಅಹಿತಕರ ಘಟನೆಗಳು ಹೆಚ್ಚಿಗೆ ನಡೆಯುತ್ತಿದ್ದರೂ ಜಿಲ್ಲಾ ರಕ್ಷಣಾಧಿಕಾರಿ ಮತ್ತು ಜಿಲ್ಲಾಧಿಕಾರಿಗಳು ತಲೆ ಕೆಡಿಸಿಕೊಳ್ಳುತ್ತಿಲ್ಲ. ಗೌರಿಬಿದನೂರು ನೇತ್ರಾಳ ಸಾವಿನ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಅನೇಕರು ಹೋರಾಟ, ಪ್ರತಿಭಟನೆ ನಡೆಸುತ್ತಿದ್ದಾರೆ. ಇದಕ್ಕೆ ಸ್ಪಂದಿಸುವ ಸೌಜನ್ಯವನ್ನೂ ತೋರುತ್ತಿಲ್ಲ. ಜಿಲ್ಲೆಯಲ್ಲಿ ಇತ್ತೀಚೆಗೆ 5 ಅಸಹಜ ಸಾವು ಪ್ರಕರಣಗಳು ಸಂಭವಿಸಿವೆ. ಗುಡಿಬಂಡೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯನ್ನು ಸೀಮೆಎಣ್ಣೆ ಹಾಕಿ ಸುಟ್ಟು ಹಾಕಿದ್ದರೂ ಆತ್ಮಹತ್ಯೆ ಎಂದು ಬಿಂಬಿಸುವ ಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.
ಹಿಂದೆ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಹಾಕಬೇಕೆಂದು ಜಿಲ್ಲಾ ರಕ್ಷಣಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲಾಗಿದೆ. ಆದರೂ ದೌರ್ಜನ್ಯ ಪ್ರಕರಣಗಳು ನಿಲ್ಲದಿರುವುದರಿಂದ ಇದೀಗ ಮತ್ತೆ ಮುತ್ತಿಗೆ ಹಾಕಿ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು. ಗೋಷ್ಠಿಯಲ್ಲಿ ಜಿಪಂ ಸದಸ್ಯೆ ಸಾವಿತ್ರಮ್ಮ, ಸಿಐಟಿಯು ಜಿಲ್ಲಾಧ್ಯಕ್ಷ ಸಿದ್ಧಗಂಗಪ್ಪ, ಲಕ್ಷ್ಮೀದೇವಮ್ಮ, ಮದುಲತಾ, ಕುಂದಲಗುರ್ಕಿ ಮುನೀಂದ್ರ, ಈಶ್ವರಪ್ಪ, ರಾಜಶೇಖರ್, ರವೀಂದ್ರರೆಡ್ಡಿ ಇದ್ದರು.