'ಸಮರ್ಪಕ ಕಾರ್ಯನಿರ್ವಹಣೆ ಅಗತ್ಯ'
ಶಿಡ್ಲಘಟ್ಟ: ಯಾವುದೇ ಸರ್ಕಾರಿ ಯೋಜನೆಗಳು ಕಾರ್ಯಗತವಾಗಲು ಅಧಿಕಾರಿಗಳು ಮತ್ತು ಜನಪ್ರತಿನಿದಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ತಾಲೂಕಿನ ಹೇಮಾರ್ಲಹಳ್ಳಿ ಗ್ರಾಮದಲ್ಲಿ ಕರ್ನಾಟಕ ಆರೋಗ್ಯ ಪದ್ಧತಿ ಅಭಿವೃದ್ಧಿ ಮತ್ತು ಸುಧಾರಣಾ ಯೋಜನೆಯಡಿ ನೂತನವಾಗಿ ನಿರ್ಮಿಸಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡದ ಉದ್ಘಾಟನೆ ನೆರವೇರಿಸಿ ಮಾತನಾಡಿ, ಸರ್ಕಾರ ಯಾವುದೇ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದರೂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಅವುಗಳನ್ನು ಅನುಷ್ಠಾನಕ್ಕೆ ತರಲು ಶ್ರಮಿಸಬೇಕೆಂದು ತಿಳಿಸಿದರು.
ಗ್ರಾಮೀಣ ಪ್ರದೇಶಗಳ ಜನತೆಯ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಸರ್ಕಾರ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಗ್ರಾಮೀಣ ಪ್ರದೇಶಳಲ್ಲಿ ನಿರ್ಮಿಸಿದ್ದು ಸಮರ್ಪಕವಾಗಿ ನಿರ್ವಹಿಸುವ ಜವಾಬ್ದಾರಿ ಆಸ್ಪತ್ರೆ ವೈದ್ಯರು, ಸಿಬ್ಬಂದಿ ಮೇಲಿದೆ ಎಂದರು. ಶಾಸಕ ಎಂ. ರಾಜಣ್ಣ ಮಾತನಾಡಿ, ಕೆಲಸ ಕಾರ್ಯಗಳ ಒತ್ತಡದಿಂದ ಗ್ರಾಮೀಣ ಪ್ರದೇಶಗಳ ಜನತೆ ತಮ್ಮ ಆರೋಗ್ಯದ ಬಗ್ಗೆ ಗಮನ ನೀಡದೆ ಅನೇಕ ರೋಗಗಳಿಗೆ ತುತಾಗುತ್ತಿದ್ದು ಇದನ್ನು ಮನಗಂಡ ಸರ್ಕಾರ ಗ್ರಾಮೀಣ ಪ್ರದೇಶಗಳಲ್ಲಿ ಆಸ್ಪತ್ರೆ ನಿರ್ಮಿಸಿ ಆರೋಗ್ಯ ಯುಕ್ತ ಸಮಾಜ ನಿರ್ಮಾಣ ಮಾಡಲು ಮುಂದಾಗಿದ್ದು ಸುತ್ತಮುತ್ತಲ ಗ್ರಾಮಸ್ತರು ಸದುಪಯೋಗ ಪಡಿಸಿಕೊಳ್ಳಬೇಕೆಂದು ಕೋರಿದರು.ಜಿಪಂ ಅಧ್ಯಕ್ಷ ಚಿನ್ನಪ್ಪ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೀಲಾ ಮಂಜುನಾಥ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ವಿ. ರಂಗಸ್ವಾಮಿ, ತಹಸೀಲ್ದಾರ್ ಜಿ.ಎ. ನಾರಾಯಣಸ್ವಾಮಿ, ಕುಮ್ಮಗಾನಹಳ್ಳಿ ಗ್ರಾಪಂ ಅಧ್ಯಕ್ಷ ನಾಗವೇಣಮ್ಮ ಇದ್ದರು.
'ಮೂಲ ಸೌಲಭ್ಯಗಳ ಅಭಿವೃದ್ಧಿಗೆ ಹೆಚ್ಚು ಒತ್ತು'
ಶಿಡ್ಲಘಟ್ಟ: ತಾಲೂಕಿನ ಮೂಲ ಸೌಲಭ್ಯಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುವ ಮೂಲಕ ಪ್ರಾಮಾಣಿಕವಾಗಿ ಕೆಲಸ ಮಾಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ತಾಲೂಕಿನ ಕುಂದಲಗುರ್ಕಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡ ಉದ್ಘಾಟನೆ ಮಾಡಿ ಮಾತನಾಡಿ, ನ.25 ರಂದು ವಿಧಾನಸಭೆಯಲ್ಲಿ ಆದಿವೇಶನ ಇದೆ ನಂತರ ಡಿ.6 ರಂದು ಶಾಸಕರು, ಜನಪ್ರತಿನಿಧಿಗಳು, ಆಧಿಕಾರಿಗಳು ಸಭೆ ಸೇರಿ ಯಾವ ಭಾಗಕ್ಕೆ ಏನೇನು ಮೂಲ ಸೌಲಭ್ಯಗಳು ನೀಡಬೇಕಾಗಿದೆ ಎಂದು ಚರ್ಚಿಸಿ ಯೋಜನೆ ರೊಪಿಸುವುದಾಗಿ ಹೇಳಿದರು.
ಶಾಸಕ ಎಂ. ರಾಜಣ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕ್ಷೇತ್ರಕ್ಕೆ ಅಗತ್ಯವಿರುವ ಎಲ್ಲಾ ಮೂಲ ಸೌಲಭ್ಯಗಳನ್ನು ಸಚಿವರ ಗಮನಕ್ಕೆ ತಂದಿದ್ದೇನೆ ಎಲ್ಲಾ ಸೌಲಭ್ಯಗಳನ್ನು ಹಂತ ಹಂತವಾಗಿ ಮಾಡಿ ಕೊಡುವುದಾಗಿ ಬರವಸೆ ನೀಡಿದ್ದಾರೆ ಎಂದರು. ಜಿಪಂ ಅಧ್ಯಕ್ಷ ಚಿನ್ನಪ್ಪ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೀಲಾ ಮಂಜುನಾಥ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ವಿ. ರಂಗಸ್ವಾಮಿ, ತಹಸೀಲ್ದಾರ್ ಜಿ.ಎ. ನಾರಾಯಣಸ್ವಾಮಿ, ಕುಂದಲಗುಕರ್ ಗ್ರಾಪಂ ಅಧ್ಯಕ್ಷ ಕೆ.ಎಂ. ವೆಂಕಟೇಶಪ್ಪ, ಶಿವಾರೆಡ್ಡಿ, ಪಿ.ವಿ. ನಾಗರಾಜ, ಬಂಕ್ ಮುನಿಯಪ್ಪ, ರಾಮಣ್ಣ, ಮುನಿರಾಜು, ಕೆ. ಮುನಿಯಪ್ಪ, ನಾರಾಯಣಸ್ವಾಮಿ, ಕೆ.ಎಸ್. ವೀರಣ್ಣ, ಕೆ.ಟಿ. ಪ್ರಸನ್ನ ಇದ್ದರು.