ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿ

Srinivasa Murthy VN
Updated On : 21 Nov 2013, 12:50 pm

ಬಾಗೇಪಲ್ಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಆರ್ಥಿಕವಾಗಿ ಹಾಗೂ ಬೌದ್ಧಿಕವಾಗಿ ದಿವಾಳಿಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ವೈ.ಎ. ನಾರಾಯಣಸ್ವಾಮಿ ಲೇವಡಿ ಮಾಡಿದರು.
ಪಟ್ಟಣದ ಪತ್ರಕರ್ತರ ಭವನದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 6 ತಿಂಗಳು ಕಳೆದಿದೆಯಾದರೂ ಎಸ್‌ಸಿ, ಎಸ್‌ಟಿ ಜನಾಂಗದವರಿಗೆ ನೀಡಬೇಕಾಗಿರುವ ಗಂಗಾ ಕಲ್ಯಾಣ ಸೇರಿದಂತೆ ವಿವಿಧ ಯೋಜನೆಗಳಿಗೆ ಈವರೆಗೂ ಅನುದಾನ ಬಿಡುಗಡೆಗೊಳಿಸಿಲ್ಲ. ಈ ಸಮುದಾಯಗಳಿಗೆ ಒಂದು ಸಾಲಸೌಲಭ್ಯ ಸಿಕ್ಕಿಲ್ಲ. ಈ ಸಮುದಾಯಗಳಿಗೆ ಸರ್ಕಾರದಿಂದ ಈವರೆಗೂ ಬಿಡಿಗಾಸು ಬಿಡುಗಡೆಯಾಗಿಲ್ಲದಿರುವುದನ್ನು ನೋಡಿದರೆ ಖಜಾನೆ ಖಾಲಿಯಾಗಿದೆ ಎನ್ನುವುದು ತಿಳಿಯುತ್ತದೆ ಎಂದರು.
ಬೆಂಗಳೂರಿನಲ್ಲಿ ನಡೆದ ನಮೋ ರವರ ರ್ಯಾಲಿಯನ್ನು ನೋಡಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರಿಗೆ ಮತಿಭ್ರಮಣೆಯಾಗಿ ಬಿಜೆಪಿ ನಾಯಕರ ವಿರುದ್ದ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆಂದು ಕಿಡಿಕಾರಿದರು.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ಸುಳ್ಳಿನ ಸರದಾರ ಎಂ. ವೀರಪ್ಪಮೊಯಿಲಿ ಶಾಶ್ವತ ನೀರಾವರಿ ಯೋಜನೆಯ ಬಗ್ಗೆ ಚಿಕ್ಕಬಳ್ಳಾಪುರದಲ್ಲಿ ಒಂದು ಹೇಳಿಕೆ, ಮಂಗಳೂರಿನಲ್ಲಿ ಇನ್ನೊಂದು ರೀತಿಯಲ್ಲಿ ಹೇಳಿಕೆ ನೀಡುವ ಮೂಲಕ ಬರಡು ಜಿಲ್ಲೆಗಳ ಜನತೆಯನ್ನು ದಾರಿ ತಪ್ಪಿಸುತ್ತಿದ್ದಾರೆಂದು ಆರೋಪಿಸಿದ ಅವರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಲೋಕಸಭಾ ಸದಸ್ಯರು ಹಾಗೂ ಕೇಂದ್ರದ ಸಚಿವರ ಪ್ರತಿ ಸಭೆಗಳಲ್ಲಿಯೂ ಶಾಶ್ವತ ನೀರಾವರಿ ಯೋಜನೆ ಬಗ್ಗೆ ಮಾತನಾಡುತ್ತಾರೆ. ಆದರೆ ಈವರೆಗೂ ಒಂದು ರು. ಕೇಂದ್ರದಿಂದ ತಂದಿಲ್ಲ ಎಂದು ಟೀಕಿಸಿದರು.
ವಿಧಾನ ಪರಿಷತ್ ಸದಸ್ಯ ಶಿವಯೋಗಸ್ವಾವು ಮಾತನಾಡಿ, ರಾಜ್ಯದ ನಿರುದ್ಯೋಗಿಗಳಿಗೆ ಕಾಂಗ್ರೆಸ್ ಸರ್ಕಾರ ಉದ್ಯೋಗ ಕಲ್ಪಿಸುವಲ್ಲಿ ವಿಫಲವಾಗಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಜಿಲ್ಲಾ ಕೇಂದ್ರಗಳಲ್ಲಿ ಉದ್ಯೋಗ ಮೇಳ ನಡೆಸಿ ಸುಮಾರು 1 ಲಕ್ಷಕ್ಕೂ ಅಧಿಕ ನಿರುದ್ಯೋಗಿ ಯುವಕರಿಗೆ ಉದ್ಯೋಗ ಕಲ್ಪಿಸಲಾಗಿತ್ತು. ಇಂದಿನ ಸರ್ಕಾರ ಬಾಯಲ್ಲಿ ಜಾತ್ಯತೀತ ಎಂಬುದು ಕೇಳಿ ಬರುತ್ತಿದ್ದರೂ ಪ್ರವಾಸದ ಹೆಸರಿನಲ್ಲಿ ಮಕ್ಕಳಲ್ಲಿ ಜಾತಿ ಎಂಬ ವಿಷ ಬೀಜವನ್ನು ಬಿತ್ತಲಾಗುತ್ತಿದೆ ಎಂದರು.
ಮುಂದಿನ 2014ರ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಮೊದಲ ಹಂತದಲ್ಲಿ 5 ಜಿಲ್ಲೆಗಳ ವ್ಯಾಪ್ತಿಯಲ್ಲಿ ಸುಮಾರು 25,918 ಪದವೀಧರ ಮತದಾರರು ಹೊಸದಾಗಿ ನೋಂದಾಯಿಕೊಂಡಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 4,429 ಮಂದಿಹೊಸದಾಗಿ ನೋಂದಣೆಗೆ ಅರ್ಜಿ ಸಲ್ಲಿಸಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ತಾವು ಸ್ಪರ್ಧಿಸುತ್ತಿದ್ದು ತಮಗೆ ಮತ ನೀಡಬೇಕೆಂದು ಕೋರಿದರು.
ಮಂಡಲ ಅಧ್ಯಕ್ಷ ಗೂಳೂರು ಲಕ್ಷ್ಮೀನಾರಾಯಣ, ಜಿಲ್ಲಾ ಪ್ರ.ಕಾರ್ಯದರ್ಶಿ ಚೌಡರೆಡ್ಡಿ, ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾಬಾಯಿ, ಬಾಬಾಜಾನ್, ಫಕೃಧೀನ್, ಜಿ.ವಿ. ಕೃಷ್ಣಯ್ಯ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement