1,132 ಪ್ರಕರಣ ರಾಜಿ ಮೂಲಕ ಇತ್ಯರ್ಥ
ಚಿಕ್ಕಬಳ್ಳಾಪುರ: ಜನತಾ ನ್ಯಾಯಾಲಯದಲ್ಲಿ ಈಗಾಗಲೇ ಜಿಲ್ಲೆಯ ಒಟ್ಟು 2,137 ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 1,132 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ರಾಜೇಶ್ವರಿ ಎನ್. ಹೆಗಡೆ ತಿಳಿಸಿದರು.
ನಗರದ ಜಿಲ್ಲಾ ಸತ್ರ ನ್ಯಾಯಾಲಯ ಆವರಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜಿಲ್ಲೆಯಲ್ಲಿ ಬೃಹತ್ ಜನತಾ ನ್ಯಾಯಾಲಯ ನ.5 ರಿಂದ 23 ರವರೆಗೆ ನಡೆಯಿತು ಎಂದರು. ಸಣ್ಣ ಪುಟ್ಟ ಕ್ರಿಮಿನಲ್ ಪ್ರಕರಣಗಳು ಸೇರಿದಂತೆ ಭಾಗಕ್ಕಾಗಿ ಹಾಕಿರುವ ದಾವೆಗಳು, ಜೀವನಾಂಶ ದಾವೆ, ಹಣ ವಸೂಲಿಗಾಗಿ ಇರುವ ದಾವೆ, ಚೆಕ್ ಪ್ರಕರಣಗಳು, ಮೋಟಾರು ವಾಹನ ಪ್ರಕರಣಗಳು, ಭೂ ಸ್ವಾಧೀನ ಪ್ರಕರಣಗಳು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಸಂಧಾನದ ಮೂಲಕ ಇತ್ಯರ್ಥ ಪಡಿಸಲಾಗಿದೆ ಎಂದು ಪ್ರಭಾರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕೆ. ಅಮರನಾರಾಯಣ ತಿಳಿಸಿದರು.
ಜನತಾ ನ್ಯಾಯಾಲಯದಲ್ಲಿ ಶೇ.50 ಪ್ರಕರಣಗಳು ರಾಜಿ ಸಂಧಾನದ ಮೂಲಕ ಇತ್ಯರ್ಥವಾಗಿರುವುದು ಸಂತೋಷದ ವಿಷಯ. ಮುಂದೆ ಹೆಚ್ಚಿನ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಮಾಡಲಾಗುತ್ತದೆ ಎಂದರು.