ಕನ್ನಡ ರಾಜ್ಯೋತ್ಸವ: ಹಣ್ಣು-ಹಂಪಲು ವಿತರಣೆ
ಚಿಕ್ಕಬಳ್ಳಾಪುರ: ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕರ್ನಾಟಕ ಸಿಂಹ ಘರ್ಜನೆ ವೇದಿಕೆ ಕಾರ್ಯಕರ್ತರು ಇಲ್ಲಿನ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಆರಕ್ಷಕ ವೃತ್ತ ನಿರೀಕ್ಷಕ ಬಾಲಾಜಿ ಸಿಂಗ್ ಮಾತನಾಡಿ, ಪ್ರತಿಯೊಬ್ಬರು ಮಾತೃಭಾಷೆ ಕನ್ನಡ ಉಳಿಸಿ ಬೆಳೆಸುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು. ಈ ವಿಷಯದಲ್ಲಿ ಕನ್ನಡಪರ ಸಂಘಟನೆಗಳು ನಡೆಸುತ್ತಿರುವ ಹೋರಾಟ ಶ್ಲಾಘನೀಯ ಎಂದರು.
ಕನ್ನಡಪರ ಸಂಘಟನೆಗಳು ಕನ್ನಡ ಭಾಷೆಗೆ ಧಕ್ಕೆ ಬಂದಾಗ ಹೋರಾಟಗಳನ್ನು ಹಮ್ಮಿಕೊಳ್ಳುವುದರ ಜತೆಗೆ ಸಾಮಾಜಿಕ ಸೇವಾ ಕಾರ್ಯಗಳಲ್ಲೂ ತೊಡಗಿಸಿಕೊಂಡಿರುವುದು ಸಂತಸದ ವಿಷಯ. ಇದನ್ನು ಮುಂದುವರೆಸಿಕೊಂಡು ಹೋಗಿ ಸಂಘಟನೆಗಳು ಒಳ್ಳೆಯ ಹೆಸರನ್ನು ಪಡೆಯಬೇಕು ಎಂದು ಸಲಹೆ ನೀಡಿದರು.
ಕರ್ನಾಟಕ ಸಿಂಹ ಘರ್ಜನೆ ಸಂಘಟನೆ ಜಿಲ್ಲಾಧ್ಯಕ್ಷ ವೇಣುಗೋಪಾಲ್, ಉಪಾಧ್ಯಕ್ಷ ಗಿರೀಶ್, ಗಣೇಶ್, ಸಂಘಟನಾ ಕಾರ್ಯದರ್ಶಿ ಹಾಲಪ್ಪ, ಪುರುಷೋತ್ತಮ, ವೆಂಕಟೇಶ್ ಮತ್ತಿತರರು ಉಪಸ್ಥಿತರಿದ್ದರು.