'ಶಾಲೆಗಳ ಅಭಿವೃದ್ಧಿಗೆ ಸಹಕಾರ ಅಗತ್ಯ'
ಚಿಕ್ಕಬಳ್ಳಾಪುರ: ಮಕ್ಕಳನ್ನು ಭವಿಷ್ಯದಲ್ಲಿ ದೇಶದ ಸತ್ಪ್ರಜೆಗಳನ್ನಾಗಿ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ಶಾಲೆಗಳ ಅಭಿವೃದ್ಧಿಗೆ ಪ್ರತಿಯೊಬ್ಬರ ಸಹಕಾರ ಅಗತ್ಯವಿದೆ ಎಂದು ತಾ.ಪಂ. ಅಧ್ಯಕ್ಷ ಕೃಷ್ಣಮೂರ್ತಿ ತಿಳಿಸಿದರು.
ನಗರದ ತಾ.ಪಂ. ಸಾಮರ್ಥ್ಯ ಸೌಧದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಧಾರವಾಡದ ಸಿಸ್ಲೆಪ್, ಅಜೀಂ ಪ್ರೇಮ್‌ಜಿ ಪ್ರತಿಷ್ಠಾನ ಹಾಗೂ ಇಫಿಲ್ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಶೈಕ್ಷಣಿಕ ನಾಯಕತ್ವ ಅಭಿವೃದ್ಧಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ಕೆಲಸವನ್ನು ಮಾಡುವ ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸಬೇಕು. ಅಲ್ಲದೇ ಈ ಕಾರ್ಯಕ್ಕೆ ಪ್ರತಿಯೊಬ್ಬರು ಕೈ ಜೋಡಿಸಬೇಕು. ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ತಮ್ಮ ತಮ್ಮ ವ್ಯಾಪ್ತಿಯಲ್ಲಿ ಬರುವ ಶಾಲೆಗಳೊಂದಿಗೆ ಉತ್ತಮ ಬಾಂಧವ್ಯವನ್ನು ಬೆಳೆಸಿಕೊಂಡಿರಬೇಕೆಂದರು.
ಶಿಕ್ಷಣ ಇಲಾಖೆಯ ಜಿಲ್ಲಾ ಮಧ್ಯಮಿಕ ಶಿಕ್ಷಣ ಅಭಿಯಾನದ ಸಮನ್ವಯಾಧಿಕಾರಿ ಮಂಜುನಾಥ ಮಾತನಾಡಿ, ಜಿಲ್ಲಾ ಸಹಯೋಜಿತ ಶೈಕ್ಷಣಿಕ ನಾಯಕತ್ವ ಅಭಿವೃದ್ಧಿ ಕಾರ್ಯಕ್ರಮವನ್ನು ಜಿಲ್ಲೆಯ ಚಿಂತಾಮಣಿ, ಚಿಕ್ಕಬಳ್ಳಾಪುರ ಮತ್ತು ಶಿಡ್ಲಘಟ್ಟ ತಾಲೂಕಿನಲ್ಲಿ ನಡೆಸಲಾಗುತ್ತಿದೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಕಂಠ ಮಾತನಾಡಿ, ಮಾನವ ಸಂಪನ್ಮೂಲ ಅಭಿವೃದ್ಧಿಗೆ ಶಿಕ್ಷಣವೇ ಪ್ರಮುಖವಾಗಿ ಪ್ರಭಾವ ಬೀರುತ್ತದೆ ಎನ್ನುವುದನ್ನರಿತುಕೊಂಡ ಸರ್ಕಾರವು ಹೆಚ್ಚಿಗೆ ಶಿಕ್ಷಣಕ್ಕೆ ಆದ್ಯತೆ ನೀಡಿ ಅನೇಕ ಕಾರ್ಯಕ್ರಮಗಳನ್ನು ಕಾರ್ಯ ರೂಪಕ್ಕೆ ತರುತ್ತಿದೆ. ಇದಕ್ಕೆ ಅಜೀಂ ಪ್ರೇಮ್‌ಜಿ ಪ್ರತಿಷ್ಠಾನ ಸೇರಿದಂತೆ ಅನೇಕ ಸ್ವಯಂ ಸೇವಾ ಸಂಸ್ಥೆಗಳು ಕೈಜೋಡಿಸಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ತಾ.ಪಂ.ಕಾರ್ಯ ನಿರ್ವಹಣಾಧಿಕಾರಿ ಗಂಗಾನಾಯ್ಕ್, ಮುಖಂಡರಾದ ನಾರಾಯಣರೆಡ್ಡಿ ಮಾತನಾಡಿದರು. ಅಕ್ಷರ ದಾಸೋಹದ ಅಧಿಕಾರಿ ಚಂದ್ರಪ್ಪ, ಇಫಿಲ್ ಸಂಸ್ಥೆಯ ಪ್ರತಿನಿಧಿಗಳು ಸೇರಿದಂತೆ ಭಾಗವಹಿಸಿದ್ದರು.