ರೈತ ಆತ್ಮಹತ್ಯೆ: ಸರ್ಕಾರದ ವಿರುದ್ಧ ಪ್ರತಿಭಟನೆ
ಗುಡಿಬಂಡೆ: ರೈತ ವಿಠಲ್ ಅರಭಾವಿ ಸಾವಿಗೆ ಸರ್ಕಾರವೇ ಕಾರಣ ಎಂದು ಆರೋಪಿಸಿ ಕೆಪಿಆರ್ಎಸ್ ತಾಲೂಕು ಘಟಕ ಹಾಗೂ ರಾಜ್ಯ ರೈತ ಸಂಘದ ಪದಾಧಿಕಾರಿಗಳ ಪಟ್ಟಣದಲ್ಲಿ ರಸ್ತೆ ತಡೆ ನಡೆಸಿದರು.
ಈ ವೇಳೆ ಮಾತನಾಡಿದ ಮುಖಂಡ ಎಚ್.ಪಿ. ಲಕ್ಷ್ಮೀನಾರಾಯಣ, ರಾಜ್ಯ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ. ಬಹುರಾಷ್ಟ್ರೀಯ ಕಂಪನಿಗಳಿಗೆ ಮಣೆ ಹಾಕುವ ಮೂಲಕ ರಾಜ್ಯದ ರೈತರ ಹಿತವನ್ನು ನಿರ್ಲಕ್ಷಿಸಲಾಗುತ್ತಿದೆ. ರಾಜ್ಯದ ಬಹುತೇಕ ಸಕ್ಕರೆ ಕಾರ್ಖಾನೆಗಳ ಮಾಲೀಕರು ಆಡಳಿತ ಪಕ್ಷದ ಶಾಸಕರಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಇವರ ಹಿತ ಕಾಪಾಡಲು ಸರ್ಕಾರ ಕಬ್ಬಿಗೆ ಬೆಂಬಲ ಬೆಲೆ ಘೋಷಿಸಲು ವಿಳಂಬ ಮಾಡಿ ರೈತ ಆತ್ಮಹತ್ಯೆಗೆ ಶರಣಾಗಬೇಕಾಯಿತು ಎಂದು ಆರೋಪಿಸಿದರು.
ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಮುಖಂಡ ಕೆ. ನಾರಾಯಣಸ್ವಾಮಿ, ರೈತರ ಸಮಸ್ಯೆಗಳ ಬಗ್ಗೆ ಸರ್ಕಾರ ಕೂಡಲೇ ಸ್ಪಂದಿಸದಿದ್ದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು. ಕರ್ನಾಟಕ ಪ್ರಾಂತ ರೈತ ಸಂಘದ ಜಯರಾಮರೆಡ್ಡಿ, ಈಶ್ವರಪ್ಪ, ದೇವರಾಜು, ಶ್ರೀನಿವಾಸ್, ರೈತ ಸಂಘದ ಪದಾಧಿಕಾರಿಗಳು ಇದ್ದರು.