'ಅಭಿವೃದ್ಧಿ ಯೋಜನೆಗಳಿಗೆ ಅಧಿಕಾರಿಗಳು ವಿಶೇಷ ಆಸಕ್ತಿ ವಹಿಸಲಿ'
ಚಿಕ್ಕಬಳ್ಳಾಪುರ: ಗಾಂಧೀಜಿಯವರ ಮಾತಿನಂತೆ ದೇಶದ ಅಭಿವೃದ್ಧಿಗೆ ಪ್ರಮುಖವಾಗಿ ಗ್ರಾಮೀಣ ಭಾಗದಲ್ಲಿ ಹೆಚ್ಚು ಅಭಿವೃದ್ಧಿ ಕೆಲಸಗಳಾಗಬೇಕೆಂದು ಡಾ.ಕೆ. ಸುಧಾಕರ್ ತಿಳಿಸಿದರು.
ತಾಲೂಕಿನ ತಿಪ್ಪೇನಹಳ್ಳಿ ಗ್ರಾ.ಪಂ. ಕಚೇರಿ ಆವರಣದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ರಾಜೀವ್ಗಾಂಧಿ ಸೇವಾ ಕೇಂದ್ರ ಕಟ್ಟಡ ಸ್ಥಾಪನೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಹಳ್ಳಿಗಳ ಅಭಿವೃದ್ಧಿಗಾಗಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರತಿಯೊಬ್ಬರು ಇಚ್ಛೆಯಿಂದ ಕೆಲಸ ಮಾಡಿದರೆ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು. ನರೇಗಾ ಹಾಗೂ ನಿರ್ಮಲ ಭಾರತ ಯೋಜನೆಗಳು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಕನಸಿನ ಯೋಜನೆಗಳು. ಇವನ್ನು ಯಶಸ್ವಿಯಾಗಿ ಅನುಷ್ಠಾನಕ್ಕೆ ತರುವುದು ನಮ್ಮ ಗುರಿ. ಅಧಿಕಾರಿಗಳು ವಿಶೇಷ ಕಾಳಜಿ ವಹಿಸಿ ಇವನ್ನು ಜಾರಿಗೆ ತರಲು ಮುಂದಾಗಬೇಕೆಂದರು. ನವಭಾರತ ನಿರ್ಮಾಣಕ್ಕೆ ನಾವೆಲ್ಲಾ ನಿರ್ಧಾರ ಕೈಗೊಳ್ಳಬೇಕಾಗಿದೆ. ಒಗ್ಗಟ್ಟಿನಿಂದ ಕಾರ್ಯ ನಿರ್ವಹಿಸಿದಾಗ ದೇಶ ಮುಂದೆ ಬರುತ್ತದೆ ಎಂದು ಹೇಳಿದರು. ಸಿಇಒ ನೀಲಾ ಮಂಜುನಾಥ್, ಆನಂದ್, ಕೃಷ್ಣಮೂರ್ತಿ ಉಪಸ್ಥಿತರಿದ್ದರು.