ಕಂದಾಯ ಇಲಾಖೆ ಅಕ್ರಮ ಕುರಿತು ಜಿಲ್ಲಾಧಿಕಾರಿಗೆ ಡಿಎಸ್ಎಸ್ ದೂರು
ಚಿಂತಾಮಣಿ: ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ರುಪಾಯಿ ಬೆಲೆ ಬಾಳುವ ಭೂಮಿಯನ್ನು ಪರಬಾರೆ ಮಾಡುವ ವಿಚಾರದಲ್ಲಿ ಕಂದಾಯ ಅಧಿಕಾರಿಗಳು ಸಿಕ್ಕಿ ಬಿದ್ದಿರುವ ಪ್ರಕರಣಗಳಿಗೆ ಸಂಬಂಧಿಸಿ ದಂಡಾಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದರೂ ಆರೋಪಿಗಳನ್ನು ಬಂಧಿಸದೆ ಮೌನಾಗಿರುವ ಪೊಲೀಸರ ವಿರುದ್ಧ ಡಿಎಸ್ಎಸ್ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದೆ.
ತಾಲ್ಲೂಕಿನಲ್ಲಿ ಸರ್ಕಾರದ ಭೂಮಿಯನ್ನು ಭೂ ಮಾಫಿಯಾ ದಲ್ಲಾಳಿಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಸುಮಾರು 17 ಜನ ಸರ್ಕಾರಿ ನೌಕರರ ವಿರುದ್ಧ ದೂರು ದಾಖಲಾಗಿದ್ದರೂ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಮೀನಮೇಷ ಎನಿಸುತ್ತಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದೆ. ಚಿಂತಾಮಣಿ ತಹಸೀಲ್ದಾರ್ರವರು ಜಾಗೃತಗೊಂಡಿದ್ದು, ದಾಖಲೆಗಳು ನಕಲಿ ಆಗಿರುವುದನ್ನು ಪತ್ತೆ ಮಾಡಿ ಅಕ್ರಮವೆಸಗಿರುವ ಸರ್ಕಾರಿ ಅಧಿಕಾರಿಗಳ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ನೀಡಿದ್ದಾರೆ. ಪ್ರಕರಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರಭಾವಿ ಮುಖಂಡರು ಭಾಗಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದ್ದು, ತಹಸೀಲ್ದಾರ್ರವರು ಈ ಬಗ್ಗೆ ದೂರು ನೀಡಿ ಒಂದು ವಾರವಾಗಿದ್ದರೂ, ಕಂದಾಯ ಇಲಾಖೆ ಮತ್ತು ಪೊಲೀಸ್ ಇಲಾಖೆ ಇತ್ತ ಗಮನ ಹರಿಸದಿರುವುದಕ್ಕೆ ಸಮಿತಿ ಖಂಡಿಸಿದೆ. ಜಿಲ್ಲಾಧಿಕಾರಿಗಳು ಕೂಡಲೇ ಆರೋಪಿಗಳನ್ನು ಬಂಧಿಸಲು ಕ್ರಮ ಕೈಗೊಳ್ಳಬೇಕು ಎಂದು ಸಮಿತಿ ಜಿಲ್ಲಾ ಸಂಚಾಲಕ ಜಿ. ನಾರಾಯಣಸ್ವಾಮಿ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.