ಬಾಗೇಪಲ್ಲಿ; ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆ
ಬಾಗೇಪಲ್ಲಿ: ಅ.18 ರಂದು ನಡೆಯಲಿರುವ ವಾಲ್ಮೀಕಿ ಜಯಂತಿ ಆಂಗವಾಗಿ ಏರ್ಪಡಿಸಿದ್ದ ಪೂರ್ವಬಾವಿ ಸಭೆಗೆ ಕೇವಲ ಬೆರಳಣೆಕೆಯಷ್ಟು ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರಿಂದ ಕುಪಿತಗೊಂಡ ವಾಲ್ಮೀಕಿ ಸಂಘಟನೆಗಳ ಮುಖಂಡರು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.
ಪಟ್ಟಣದ ತಾಪಂ ಸಭಾಂಗಣದಲ್ಲಿ ತಹಸೀಲ್ದಾರ್ ಎಂ.ಎ. ಪದ್ಮರವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವ ಭಾವಿ ಸಭೆ ಏರ್ಪಡಿಸಲಾಗಿತ್ತು. ಆದರೆ ಈ ಸಭೆಗೆ ಕಾಟಾಚಾರಕ್ಕೆ ಎಂಬಂತೆ ತಾಲೂಕು ಮಟ್ಟದ ಕೆಲವೇ ಅಧಿಕಾರಿಗಳು ಮಾತ್ರ ಹಾಜರಿದ್ದು, ಕೆಲ ಇಲಾಖೆ ಅಧಿಕಾರಿಗಳು ತಮ್ಮ ಕಚೇರಿಯ ಸಹಾಯಕ ಸಿಬ್ಬಂದಿಯನ್ನು ಕಳುಹಿಸಿರುವುದಕ್ಕೆ ನಾಯಕ ಸಮುದಾಯದ ಸಂಘಟನೆಗಳು ಅಕ್ರೋಶ ವ್ಯಕ್ತ ಪಡಿಸಿದವು.
ಪ್ರತಿ ವರ್ಷವೂ ವಾಲ್ಮೀಕಿ ಜಯಂತಿಯ ಪೂರ್ವ ಭಾವಿ ಸಭೆಗೆ ತಾಲೂಕು ಮಟ್ಟದ ಬಹುತೇಕ ಅಧಿಕಾರಿಗಳು ಗೈರುಹಾಜರಾಗುತ್ತಿದ್ದು ಇದಕ್ಕೆ ಕ್ರಮ ಕೈಗೊಳ್ಳುವಂತೆ ಮುಖಂಡರು ಆಗ್ರಹಿಸಿದಾಗ ಸಂಬಂಧಪಟ್ಟ ಅಧಿಕಾರಿಗಳು ಮುಖಂಡರ ಕಣ್ಣೊರೆಸುವುದಕ್ಕೆ ಕಾನೂನಿನ ಪ್ರಕಾರ ಗೈರು ಹಾಜರಾಗಿರುವ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಹಾಗೂ ನೋಟಿಸ್ ನೀಡುವುದಾಗಿ ಹೇಳಿದ್ದಾರೆ. ಆದರೆ ಈವರೆಗೂ ಗೈರು ಹಾಜರಾಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂದು ಮುಖಂಡರು ಆರೋಪಿಸಿದರು.
ತಹಸೀಲ್ದಾರ್ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷೆ ಎಂ.ಎ. ಪದ್ಮ ಮಾತನಾಡಿ, ಸಭೆಗೆ ಗೈರುಹಾಜರಾದ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಲಾಗುವುದು ಎಂದು ತಿಳಿಸಿದರು. ತಾಪಂ ಕಾರ್ಯ ನಿರ್ವಹಣಾಧಿಕಾರಿ ಸಿ.ಶ್ರೀನಿವಾಸ್, ಸರ್ಕಲ್ ಇನ್ಸ್ಪೆಕ್ಟರ್ ಸಿ. ವಸಂತ್, ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ವೆಂಕಟೇಶ್, ತಾಲೂಕಿನ ವಾಲ್ಮೀಕಿ ಸಮುದಾಯದ ಮುಖಂಡರು ಹಾಜರಿದ್ದರು.