ಗುಂಡಿ ಬಿದ್ದಿರುವ ರಸ್ತೆಗಳ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ
ಕೆಜಿಎಫ್: ನಗರದಲ್ಲಿ ತೀರಾ ಹದಗೆಟ್ಟು ಹಳ್ಳಕೊಳ್ಳಗಳಿಂದ ಕೂಡಿರುವ ಪ್ರಮುಖ ರಸ್ತೆಗಳನ್ನು ದುರಸ್ತಿಗೊಳಿಸಬೇಕು ಎಂದು ಒತ್ತಾಯಿಸಿ ನವಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಎಸ್.ಎನ್. ರಾಜಗೋಪಾಲಗೌಡ ನೇತೃತ್ವದಲ್ಲಿ ನಗರದ ರೈಲ್ವೆ ವೃತ್ತದಲ್ಲಿ ರಸ್ತೆತಡೆ ಪ್ರತಿಭಟನೆ ನಡೆಸಿದರು.
ನಗರದ ಪ್ರಮುಖ ರಸ್ತೆಗಳ ದುರಸ್ತಿಗೆ ಆಗ್ರಹಿಸಿ ವಿವಿಧ ಸಂಘ ಸಂಸ್ಥೆಗಳು ಪ್ರತಿಭಟನೆ, ಹೋರಾಟಗಳನ್ನು ನಡೆಸಿದರೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಾಗಲೀ ಅಥವಾ ಕೆಜಿಎಫ್ ಕ್ಷೇತ್ರದ ಜನಪ್ರತಿನಿಧಿಗಳಾಗಲೀ ಕ್ರಮಕ್ಕೆ ಮುಂದಾಗದೆ ಕೈಕಟ್ಟಿ ಕುಳಿತಿದ್ದಾರೆ ಎಂದು ಆರೋಪಿಸಿ ಪ್ರತಿಭಟನಾಕಾರರು ಶಾಸಕಿ ವೈ. ರಾಮಕ್ಕ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟಿಸಿದರು.
ಈ ವೇಳೆ ಮಾತನಾಡಿದ ರಾಜ್ಯಾಧ್ಯಕ್ಷ ಎಸ್.ಎನ್. ರಾಜಗೋಪಾಲಗೌಡ ಕೆಜಿಎಫ್ ನಗರದ ಪ್ರಮುಖ ರಸ್ತೆಗಳಾದ ಅಶೋಕ್ನಗರ, ಗೀತಾ ರಸ್ತೆ, ಪಾರಂಡಹಳ್ಳಿ ರಸ್ತೆ, ಉರಿಗಾಂಪೇಟೆ ರಸ್ತೆ, ರೈಲ್ವೆ ನಿಲ್ದಾಣ ರಸ್ತೆಗಳು ಸೇರಿದಂತೆ ಇತರೆ ಮುಖ್ಯ ರಸ್ತೆಗಳು ಕಳೆದ 2 ವರ್ಷಗಳಿಂದ ತೀರಾ ಹದಗೆಟ್ಟು ದೊಡ್ಡ ಗಾತ್ರದ ಹಳ್ಳಗಳು ಬಿದ್ದು ದ್ವಿಚಕ್ರ ವಾಹನ ಹಾಗೂ ಇತರೇ ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತಿದ್ದು ಇಂತಹ ರಸ್ತೆಗಳಲ್ಲಿ ಓಡಾಡಲು ಕ್ಷೇತ್ರದ ಜನರು ಹಾಗೂ ವಾಹನ ಸವಾರರು ಪರದಾಡುವಂತಾಗಿದೆ. ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಹಾಗೂ ಕ್ಷೇತ್ರದ ಶಾಸಕಿ ಕಣ್ಮುಚ್ಚಿ ಕುಳುತ್ತಿದ್ದಾರೆ ಎಂದು ಆರೋಪಿಸಿದರು.
ಆದ್ದರಿಂದ ಈ ಕೂಡಲೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹದಗೆಟ್ಟಿರುವ ರಸ್ತೆಗಳ ದುರಸ್ತಿಗೆ ಮುಂದಾಗದಿದ್ದಲ್ಲಿ ಕಚೇರಿಗೆ ಬೀಗ ಜಡಿದು ಮುತ್ತಿಗೆ ಹಾಕಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಮನವಿ ಪತ್ರವನ್ನು ಉರಿಗಾಂ ಠಾಣೆಯ ಪಿಎಸ್ಐ ಮಾರ್ಕೊಂಡಪ್ಪ ಅವರಿಗೆ ಸಲ್ಲಿಸಿದರು.
ಜಿಲ್ಲಾಧ್ಯಕ್ಷ ಚಿನ್ನಿವೆಂಕಟೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶೋಕ್ಕುಮಾರ್, ನಗರಾಧ್ಯಕ್ಷ ರಾಜಾ, ಗ್ರಾಮಾಂತರ ಅಧ್ಯಕ್ಷ ಮಂಜುನಾಥ್, ಉಪಾಧ್ಯಕ್ಷ ಸೋಮನಾಥ್, ಮುನಿಸ್ವಾಮಿ ಮತ್ತಿತರರು ಹಾಜರಿದ್ದರು.