ಬೇಡಿಕೆ ಈಡೇರಿಸಲು ಆಗ್ರಹ
ಕೋಲಾರ: ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜುಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಲು ಸಾಧ್ಯವಾಗದಿದ್ದರೆ ಉನ್ನತ ಶಿಕ್ಷಣ ಸಚಿವ ಆರ್.ವಿ. ದೇಶಪಾಂಡೆ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಲಿ ಎಂದು ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಗಳ ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷ ಎನ್. ಶ್ರೀನಿವಾಸಚಾರ್ ಒತ್ತಾಯಿಸಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸಬೇಕು, ಯುಜಿಸಿ ನಿಯಮದಂತೆ ತಿಂಗಳಿಗೆ 25 ಸಾವಿರ ರು. ವೇತನ ನಿಗಧಿ ಮಾಡಬೇಕು, ಏಕಾಏಕಿ ಅನುದಾನಿತ ಕಾಲೇಜುಗಳ ಖಾಯಂ ಉಪನ್ಯಾಸಕರನ್ನು ಅತಿಥಿ ಉಪನ್ಯಾಸಕರ ಜಾಗಕ್ಕೆ ನಿಯೋಜನೆ ಮಾಡದೆ ಹಾಲಿ ಕಾರ್ಯ ನಿರ್ವಹಿಸುತ್ತಿರುವ ಉಪನ್ಯಾಸಕರನ್ನೇ ಕಾಯಂಗೊಳಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಹಲವು ವರ್ಷಗಳಿಂದ ಒತ್ತಾಯಿಸುತ್ತಿದ್ದರೂ ಬೇಡಿಕೆ ಈಡೇರಿಸಲು ಸಂಬಂಧಪಟ್ಟ ಸಚಿವರು ಗಮನ ಹರಿಸುತ್ತಿಲ್ಲವೆಂದು ಆರೋಪಿಸಿದರು.
ಈ ಹಿಂದೆ ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರ್ಕಾರವಿದ್ದಾಗ ನಂತರ ಜೆಡಿಎಸ್, ಬಿಜೆಪಿ ಸಮ್ಮಿಶ್ರ ಸರ್ಕಾರ ಹಾಗೂ ಬಿಜೆಪಿ ಸರ್ಕಾರವಿದ್ದಾಗಲೂ ಅತಿಥಿ ಉಪನ್ಯಾಸಕರು ಬೇಡಿಕೆ ಈಡೇರಿಸುವಂತೆ ಮನವಿ ಮಾಡಿದ್ದರೂ ಕೇವಲ ಭರವಸೆ ನೀಡುತ್ತಾ ವಂಚಿಸಲಾಗುತ್ತಿದೆ ಎಂದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರವೂ ಅತಿಥಿ ಉಪನ್ಯಾಸಕರ ಸಂಘದ ಪದಾಧಿಕಾರಿಗಳು ಉನ್ನತ ಶಿಕ್ಷಣ ಸಚಿವ ಆರ್.ವಿ. ದೇಶಪಾಂಡೆ ಹಾಗೂ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮನವಿ ನೀಡಿದ್ದೇವೆ. ಮಾತುಕತೆಯ ಮೂಲಕ ಸಮಸ್ಯೆ ನಿವಾರಣೆ ಮಾಡುವುದಾಗಿ ಭರವಸೆ ನೀಡಿ ನಮ್ಮನ್ನು ವಂಚಿಸುತ್ತಿದ್ದಾರೆಂದು ದೂರಿದರು.
ರಾಜ್ಯದಲ್ಲಿ ಸುಮಾರು 10,600 ಮಂದಿ ಅತಿಥಿ ಉಪನ್ಯಾಸಕರು ಇದ್ದು, ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದಿದ್ದಾರೆ, ತಿಂಗಳಿಗೆ ಕೇವಲ 8 ಸಾವಿರ ರು. ವೇತನ ನೀಡಲಾಗುತ್ತಿದೆ. ಸರ್ಕಾರಕ್ಕೆ ನಮ್ಮ ಸಮಸ್ಯೆಗಳ ಬಗ್ಗೆ ಅರಿವಿದ್ದರೂ ಪರಿಹಾರ ಕಲ್ಪಿಸಲು ಮನಸ್ಸು ಮಾಡುತ್ತಿಲ್ಲವೆಂದರು.
ಅ.22 ರಂದು ಪ್ರತಿಭಟನೆ: ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಲು ಒತ್ತಾಯಿಸಿ ಅ.22 ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ನಿವಾಸದ ಮುಂದೆ ಧರಣಿ ಹಮ್ಮಿಕೊಳ್ಳಲಾಗುವುದು.
ರಾಜ್ಯದ ಎಲ್ಲ ಅತಿಥಿ ಉಪನ್ಯಾಸಕರು ಪ್ರತಿಭಟನೆಯಲ್ಲಿ ಭಾಗವಹಿಸುವ ಮೂಲಕ ಸರ್ಕಾರದ ಗಮನ ಸೆಳೆಯಬೇಕೆಂದು ಕರೆ ನೀಡಿದ ಶ್ರೀನಿವಾಸಚಾರ್ ಅವರು, ಖಾಲಿ ಇರುವ 6 ಸಾವಿರ ಉಪನ್ಯಾಸಕ ಹಾಗೂ 3 ಸಾವಿರ ಬೋಧಕೇತರ ಹುದ್ದೆಗಳು ಮತ್ತು ಕಾಲೇಜು ಶಿಕ್ಷಣ ಇಲಾಖೆಯ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಬದಲು ಅತಿಥಿ ಉಪನ್ಯಾಸಕರನ್ನು 5 ವರ್ಷಗಳ ಸೇವೆಯ ನಂತರ ಕೆಲಸದಿಂದ ಬಿಡುಗಡೆ ಮಾಡಿ ನಮ್ಮ ಜಾಗಕ್ಕೆ ಅನುದಾನಿತ ಕಾಲೇಜುಗಳ ಉಪನ್ಯಾಸಕರನ್ನು ಸೇರ್ಪಡೆ ಮಾಡಿಕೊಳ್ಳುತ್ತಿರುವುದನ್ನು ಕೈಬಿಡಬೇಕು, ಮಹಿಳಾ ಅತಿಥಿ ಉಪನ್ಯಾಸಕರಿಗೆ ಸಂಬಂಳ ಸಹಿತ 5 ತಿಂಗಳು ಹೆರಿಗೆ ರಜೆ ನೀಡುವಂತೆಯೂ ಒತ್ತಾಯಿಸಿದರು.
ಅ.22ರೊಳಗೆ ಸರ್ಕಾರ ಬೇಡಿಕೆ ಈಡೇರಿಸಿದಲ್ಲಿ ಪ್ರತಿಭಟನೆ ಹಿಂದಕ್ಕೆ ಪಡೆಯುವಿರೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರದ ಮೇಲೆ ನಮಗೆ ನಂಬಿಕೆ ಇಲ್ಲದಂತಾಗಿದೆ. ಎಲ್ಲಾ ಸರ್ಕಾರಗಳು ನಮ್ಮನ್ನು ವಂಚಿಸಿವೆ, ಮಾತಿನಲ್ಲಿ ಭರವಸೆ ನೀಡಿದರೆ ಸಾಲದು, ನಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸುವವರೆಗೆ ಪ್ರತಿಭಟನೆ ನಿಲ್ಲದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಅತಿಥಿ ಉಪನ್ಯಾಸಕರ ಸಂಘದ ಎಸ್.ಎಂ. ರಮಾನಂದ್, ಚೌಡೇಗೌಡ, ಲಕ್ಷ್ಮೀನಾರಾಯಣ್, ಡಿವೈಎಫ್‌ಐ ಜಿಲ್ಲಾ ಕಾರ್ಯದರ್ಶಿ ವಿಜಯ್ ಕೃಷ್ಣನ್, ಎಸ್.ಎಫ್.ಐ ರಾಜ್ಯ ಉಪಾಧ್ಯಕ್ಷ ಅಂಬರೀಷ್ ಇದ್ದರು.