ಲೋಕಸಭೆ ಚುನಾವಣೆಗೆ ಸ್ಪರ್ಧಿಸಲ್ಲ: ಎಚ್ಡಿಕೆ
ಕೋಲಾರ: ಮುಂಬರುವ ಲೋಕಸಭಾ ಚುನಾವಣೆಗೆ ತಾವು ಸ್ಪರ್ಧಿಸುವುದಿಲ್ಲವೆಂದು ಮಾಜಿ ಮುಖ್ಯಮಂತ್ರಿ, ಹಾಲಿ ಪ್ರತಿಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಜಿಲ್ಲೆಯ ಶ್ರೀನಿವಾಸಪುರ ತಾಲೂಕಿಗೆ ಗುರುವಾರ ಭೇಟಿ ನೀಡಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ರಾಜಕಾರಣದ ಮೇಲೆ ತಮಗೆ ಆಸಕ್ತಿ ಇಲ್ಲ, ರಾಜ್ಯದಲ್ಲೇ ಇದ್ದು ಜನತೆಯ ಸೇವೆ ಮಾಡುವುದಾಗಿ ತಿಳಿಸಿದರು.
ಕಳೆದ ನಾಲ್ಕು ತಿಂಗಳ ಹಿಂದೆ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಗ್ಗೆ ನಾಡಿನ ಜನತೆ ಭ್ರಮನಿರಸನರಾಗಿದ್ದಾರೆ. ಜನತೆಯ ನಿರೀಕ್ಷೆಯನ್ನು ಹುಸಿಗೊಳಿಸಲಾಗಿದೆ, ಬಿಜೆಪಿಯವರು ಗಣಿ ಹಗರಣದಲ್ಲಿ ಭಾಗಯಾಗಿದ್ದಾಗ ವೀರಾವೇಶದಿಂದ ಹೋರಾಟ ನಡೆಸಿದ್ದ ಸಿದ್ದರಾಮಯ್ಯನವರು ನೈತಿಕತೆಯಿದ್ದಲ್ಲಿ ಗಣಿ ಹಗರಣದಲ್ಲಿ ಸಿಲುಕಿರುವ ಸಚಿವ ಸಂತೋಷ್ ಲಾಡ್ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಲಿ ಎಂದು ಸವಾಲು ಹಾಕಿದರು.
ಭ್ರಷ್ಟಾಚಾರದ ಬಗ್ಗೆ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳೂ ಮಾತನಾಡುವ ಹಕ್ಕು ಕಳೆದುಕೊಂಡಿವೆ, ರಾಜ್ಯದ ಜನತೆ ಎಲ್ಲವನ್ನೂ ಶಾಂತಚಿತ್ತರಾಗಿ ಗಮನಿಸುತ್ತಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಈ ಎರಡೂ ಪಕ್ಷಗಳಿಗೂ ತಕ್ಕ ಪಾಠ ಕಲಿಸಲಿದ್ದಾರೆಂದು ಎಚ್ಚರಿಸಿದರು.
ಬಿಜೆಪಿಯವರು ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯವನ್ನು ಪ್ರಧಾನಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೆದ್ದೇ ಗೆಲ್ಲುವೆಂದು ಬೀಗುತ್ತಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿಗೆ ಈ ಹಿಂದೆ ಸಿಕ್ಕಿದಷ್ಟೂ ಸ್ಥಾನಗಳು ಸಿಗುವುದು ಅನುಮಾನ, ಬಿಜೆಪಿಯವರು ಹಣ ಬಲದಿಂದ ಚುನಾವಣೆ ಎದುರಿಸಲು ಹೊರಟಿದ್ದಾರೆ. ಆದರೆ, ಮೋದಿಯ ಮೋಡಿ ರಾಜ್ಯದಲ್ಲಿ ನಡೆಯಲ್ಲವೆಂದು ಅಭಿಪ್ರಾಯಿಸಿದರು. ಜೆಡಿಎಸ್ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದರೂ ಜನತೆಯ ಪ್ರೀತಿಯಿಂದ ದೂರವಾಗಿಲ್ಲ, ಕಾರ್ಯಕರ್ತರ ಪರಿಶ್ರಮದಿಂದ ಪಕ್ಷದ ಸಂಘಟನೆ ಆಗುತ್ತಿದೆ. ಕೇಂದ್ರದಲ್ಲಿ 10 ತಿಂಗಳ ಕಾಲ ಉತ್ತಮ ಆಡಳಿತ ನೀಡಿರುವ ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಾಧನೆಯನ್ನು ಮುಂದಿಟ್ಟುಕೊಂಡು ಬರಲಿರುವ ಲೋಕಸಭಾ ಚುನಾವಣೆಯನ್ನು ಸಮರ್ಥವಾಗಿ ನಿಬಾಯಿಸುತ್ತೇವೆ. ಎಲ್ಲಾ ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆಂದು ಹೇಳಿದರು.