ನ್ಯಾ.ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಾಯ
ಕೋಲಾರ: ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಬೇಡಿಕೆಗಳು ಈಡೇರಬೇಕಾದರೆ ರಾಜ್ಯ ಸರ್ಕಾರ ಕೂಡಲೇ ನಿವೃತ್ತ ನ್ಯಾಯಮೂರ್ತಿ ಸದಾಶಿವ ನೇತೃತ್ವದ ಆಯೋಗ ನೀಡಿರುವ ವರದಿಯನ್ನು ಜಾರಿಗೆ ತರಬೇಕೆಂದು ಮಾದಿಗ ದಂಡೋರ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಬುಲ್ಲಹಳ್ಳಿ ರಾಜಪ್ಪ ಒತ್ತಾಯಿಸಿದರು. ನಗರದ ಅಂಬೇಡ್ಕರ್ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅರಿವು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಮೀಸಲಾತಿ ಜಾರಿಯಲ್ಲಿ ಇರುವ ತಾರತಮ್ಯ ನಿವಾರಣೆ ಮಾಡಲು ಸರ್ಕಾರ ಮೀನಮೇಷ ಎಣಿಸುತ್ತಿದೆ ಎಂದು ಆರೋಪಿಸಿದರು. ರಾಜ್ಯ ಸರ್ಕಾರ 14 ಕೋಟಿ ರು. ಖರ್ಚು ಮಾಡಿ ಆಯೋಗ ರಚಿಸಿ ವರದಿ ತರಿಸಿಕೊಂಡಿದ್ದರೂ ಆ ವರದಿ ಅನುಷ್ಠಾನಕ್ಕೆ ವಿಳಂಬ ಮಾಡುತ್ತಿದೆ ಎಂದು ಟೀಕಿಸಿದರು. ಮಾದಿಗ ದಂಡೋರ ಜಿಲ್ಲಾ ಸಮಿತಿ ಸಮುದಾಯಕ್ಕೆ ಸರ್ಕಾರದ ಸೌಲಭ್ಯಗಳ ಕುರಿತು ಮಾಹಿತಿ ನೀಡುವ ಜತೆಗೆ, ಸಂಘಟನೆ ಬಲಗೊಳ್ಳಲು ಜಾಗೃತಿ ಮೂಡಿಸಬೇಕು ಎಂದರು. ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ನರಸಿಂಹಯ್ಯ, ಪ್ರಕಾಶ್, ಸಂಘಟನೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಸಾಹುಕಾರ್ ಶಂಕರಪ್ಪ, ಜಿಲ್ಲಾಧ್ಯಕ್ಷ ಎಚ್. ವೆಂಕಟೇಶ್, ಖಜಾಂಚಿ ಶ್ರೀನಿವಾಸಮೂರ್ತಿ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಮೀನಾಕ್ಷಿ, ಪದ್ಮ, ಕೃಷ್ಣಪ್ಪ, ಕೃಷ್ಣಮೂರ್ತಿ, ವೆಂಕಟಸ್ವಾಮಿ ಇದ್ದರು.