ಮಕ್ಕಳ ಸಾಹಿತ್ಯ ಸಮ್ಮೇಳನ ಮುಂದಕ್ಕೆ
ಕೋಲಾರ: ಕೆಜಿಎಫ್ನಲ್ಲಿ ನವೆಂಬರ್ 13 ರಂದು ನಡೆಸಲು ಉದ್ದೇಶಿಸಿದ ಜಿಲ್ಲಾ ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ಮುಂದೂಡಿ ಡಿಸೆಂಬರ್ 5ಕ್ಕೆ ನಿಗದಿಪಡಿಸಲಾಗಿದೆ. ಜಿಲ್ಲಾ ಮಕ್ಕಳ ಸಾಹಿತ್ಯ ಸಮ್ಮೇಳನ ಪೂರ್ವ ಸಿದ್ಧತೆ ಕಿರಿತು ತಾಲೂಕು ಪದಾಧಿಕಾರಿಗಳ ಸಭೆ ನಡೆಸಿದ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳಿಂದ ವಿದ್ಯಾರ್ಥಿಗಳ ಮಾಹಿತಿ ಲಭ್ಯವಾಗದ ಮತ್ತು ಅರ್ಧವಾರ್ಷಿಕ ಪರೀಕ್ಷೆ ಹಾಗೂ ದಸರಾ ರಜೆಯಿಂದಾಗಿ ಸಮ್ಮೇಳನದಲ್ಲಿ ಭಾಗವಹಿಸುವ ಮಕ್ಕಳಿಗೆ ಸೂಕ್ತ ಮಾರ್ಗದರ್ಶನ ತರಬೇತಿ ನೀಡಲು ಸಮಯದ ಅಭಾವದಿಂದ ಸಾಧ್ಯವಾಗಿಲ್ಲವೆಂಬ ಅಭಿಪ್ರಾಯದ ಹಿನ್ನೆಲೆಯಲ್ಲಿ ಸಮ್ಮೇಳನವನ್ನು ಮುಂದೂಡಲು ನಿರ್ಧರಿಸಲಾಯಿತೆಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಜೆ.ಜಿ. ನಾಗರಾಜ್ ತಿಳಿಸಿದ್ದಾರೆ.
ನ.4 ರಂದು ಕವಿ ಕಾವ್ಯ ಕಾರ್ಯಕ್ರಮ
ಕೋಲಾರ: ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ಸಹಯೋಗದೊಂದಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕನ್ನಡ ರಾಜ್ಯೋತ್ಸವ ಅಂಗವಾಗಿ ನ.4ರಂದು ಬೆಳಗ್ಗೆ 10 ಗಂಟೆಗೆ ನಗರದ ಕನ್ನಡ ಸಾಹಿತ್ಯ ಪರಿಷತ್ತು ಕಚೇರಿಯಲ್ಲಿ ನವೋದಯ ಕವಿ ಕಾವ್ಯ ಗಾಯನ ಚಿಂತನ ಮಾಲೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ಸಂಸ್ಥೆಯ ಅಧ್ಯಕ್ಷ, ಪತ್ರಕರ್ತ ಬಿ. ಸುರೇಶ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಜೆ.ಜಿ. ನಾಗರಾಜ್ ಅಧ್ಯಕ್ಷತೆ ವಹಿಸುವರು. ಉಪನ್ಯಾಸಕ ಹಾಗೂ ಸಾಹಿತಿ ಅಮರೇಂದ್ರಶೆಟ್ಟಿ ಅವರು ಡಾ. ಕಯ್ಯಾರ ಕಿಞಣ್ಣರೈ ಸಾಹಿತ್ಯಾವಲೋಕನದ ಬಗ್ಗೆ ಮತ್ತು ಶ್ರೀನಿವಾಸ ಪ್ರಸಾದ್ ಅವರು ಬದುಕು-ಸಾಧನೆ ಬಗ್ಗೆ ಮಾತನಾಡುವರು, ಕೋಲಾರದ ಭವಾನಿ ಮತ್ತು ತಂಡ ಹಾಗೂ ಕೆ.ಜಿ.ಎಫ್ನ ಮನೋಜ್ ತಂಡದಿಂದ ಕಾವ್ಯಗಾಯನ ಕಾರ್ಯಕ್ರಮವಿರುತ್ತದೆ ಎಂದು ಕಸಾಪ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಆರ್ಥಿಕ ಸೌಲಭ್ಯ ವಿಳಂಬ; ಪ್ರತಿಭಟನೆ
ಗೌರಿಬಿದನೂರು: ಹನಿ ನೀರಾವರಿ ಪದ್ಧತಿ ಅಳವಡಿಸಿಕೊಳ್ಳಲು ರೈತರು ನಿಗದಿತ ಅರ್ಜಿ ಹಾಗೂ ದಾಖಲೆಗಳನ್ನು ಸಲ್ಲಿಸಿದ್ದರೂ ತೋಟಗಾರಿಕೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈವರೆಗೂ ಆರ್ಥಿಕ ಸೌಲಭ್ಯ ನೀಡಿಲ್ಲ ಎಂದು ಆರೋಪಿಸಿರುವ ರೈತ ಸಂಘದ ಕಾರ್ಯದರ್ಶಿ ಲೋಕೇಶ್ ಗೌಡ ರೈತರೊಂದಿಗೆ ತೋಟಗಾರಿಕೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಸ್ಥಳಕ್ಕೆ ಆಗಮಿಸಿದ ಸಹಾಯಕ ತೋಟಗಾರಿಕೆ ನಿರ್ದೇಶಕ ನಂದೀಶ್ ರೈತರೊಡನೆ ಮಾತುಕತೆ ನಡೆಸಿ ಮುಂದಿನ ದಿನಗಳಲ್ಲಿ ವಿಳಂಬವಾಗದಂತೆ ಎಚ್ಚರ ವಹಿಸಲಾಗುವುದು ಹಾಗೂ ಸಿಬ್ಬಂದಿಗೆ ಸೂಚನೆ ನೀಡಲಾಗುವುದು ಎಂದು ಭರವಸೆ ನೀಡಿದರು. ಶೀಘ್ರವಾಗಿ ಫಲಾನುಭವಿಗಳಿಗೆ ಸೌಲಭ್ಯ ಮಂಜೂರು ಮಾಡಿಸುವುದಾಗಿ ಭರವಸೆ ನೀಡಿದರು.