ಇಂದು ಕನ್ನಡ ರಾಜ್ಯೋತ್ಸವ
ಕೆಜಿಎಫ್: ಕೋಲಾರ ಚಿನ್ನದ ಗಣಿ ಪ್ರದೇಶದಲ್ಲಿ ನವೆಂಬರ್ ಒಂದರಂದು ಕನ್ನಡ ರಾಜ್ಯೋತ್ಸವ ಅದ್ಧೂರಿ ಆಚರಣೆಗೆ ಕನ್ನಡ ಸಂಘ ಸಂಸ್ಥೆಗಳಿಂದ ಸಿದ್ಧತೆಗಳು ನಡೆದಿವೆ. ರಾಬರ್ಟ್ಸನ್ಪೇಟೆಯ ಕನ್ನಡ ಸಂಘದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಬೆಳಗ್ಗೆ 10.30ಕ್ಕೆ ಕನ್ನಡ ಸಂಘದ ಆವರಣದಲ್ಲಿ ಅಧ್ಯಕ್ಷ ನರಸಿಂಹೇಗೌಡ ನಾರಾಣಾಪುರ ಅವರ ಅಧ್ಯಕ್ಷತೆಯಲ್ಲಿ ಶಾಸಕಿ ವೈ. ರಾಮಕ್ಕ ಅವರಿಂದ ಕನ್ನಡ ಧ್ವಜಾರೋಹಣ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಡಾ. ರೋಹಿಣಿ ಕಟೋಚ್ ಸಫಟ್ ಅವರಿಂದ ಕಾರ್ಯಕ್ರಮದ ಉದ್ಘಾಟನೆ ನೆರವೇರಲಿದೆ. ನಗರದ ವಿವಿಧ ಶಾಲಾ ಮಕ್ಕಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು, ತಾಯಿ ಭುವನೇಶ್ವರಿಯ ಉತ್ಸವದ ಮೆರವಣಿಗೆ ಏರ್ಪಡಿಸಲಾಗಿದ್ದು, ಕನ್ನಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕನ್ನಡ ಸಂಘದ ಎಲ್ಲಾ ಪದಾಧಿಕಾರಿಗಳು ತಿಳಿಸಿದ್ದಾರೆ.
ಬ್ಯಾಂಕ್ ಚುನಾವಣಾ ವೇಳಾಪಟ್ಟಿ ಪ್ರಕಟ
ಕೋಲಾರ: ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಆಡಳಿತ ಮಂಡಳಿಗೆ ನವೆಂಬರ್ 15 ರಂದು ಚುನಾವಣೆ ನಡೆಯಲಿದೆ. ಚುನಾವಣೆ ಬ್ಯಾಂಕಿನ ಕೇಂದ್ರ ಕಚೇರಿಯಲ್ಲಿ ಅಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆವರೆಗೆ ನಡೆಯಲಿದೆ. ಆಡಳಿತ ಮಂಡಳಿಯ ಒಟ್ಟು 18 ನಿರ್ದೇಶಕರ ಸ್ಥಾನಗಳಲ್ಲಿನ 15 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ನ.7 ರಂದು ಕಡೆಯ ದಿನವಾಗಿದ್ದು ಮಧ್ಯಾಹ್ನ 3 ಗಂಟೆಯೊಳಗೆ ನಾಮಪತ್ರ ಸಲ್ಲಿಸಬಹುದಾಗಿದೆ. ನ.8 ರಂದು ನಾಮಪತ್ರಗಳ ಪರಿಶೀಲನೆ. ನ.9 ನಾಮಪತ್ರಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದ್ದು, ಅಭ್ಯರ್ಥಿಗಳಿಗೆ ಚಿಹ್ನೆಗಳ ಹಂಚಿಕೆಯನ್ನು ನ.9ರಂದು ಮಧ್ಯಾಹ್ನ 3.30ಕ್ಕೆ ಮಾಡಲಾಗುತ್ತದೆ. ಅಗತ್ಯವಿದ್ದಲ್ಲಿ ಮತದಾನ ನ.15ರಂದು ನಡೆಯಲಿದ್ದು. ಮತ ಎಣಿಕೆ ಕಾರ್ಯ ಮತದಾನ ನಂತರ ನಡೆದು ಅಂದೇ ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.