22 ಖಾಸಗಿ ವಿವಿ ರದ್ದತಿಗೆ ಆಗ್ರಹಿಸಿ ಸಹಿ ಅಭಿಯಾನ
ಕ.ಪ್ರ.ವಾರ್ತೆ ಚಿಕ್ಕಬಳ್ಳಾಪುರ ಸೆ. 4
ರಾಜ್ಯದಲ್ಲಿ 22 ಖಾಸಗಿ ವಿಶ್ವವಿದ್ಯಾಲಯಗಳಿಗೆ ನೀಡಿರುವ ಅನುಮತಿಯನ್ನು ಕೂಡಲೇ ರದ್ದುಗೊಳಿಸಬೇಕೆಂದು ಒತ್ತಾಯಿಸಿ ಎಸ್ಎಫ್ಐ ಕಾರ್ಯಕರ್ತರು ಬುಧವಾರ ಸಹಿ ಸಂಗ್ರಹ ಅಭಿಯಾನ ನಡೆಸಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಹಿ ಸಂಗ್ರಹಿಸಿದ ಎಸ್ಎಫ್ಐ ಕಾರ್ಯಕರ್ತರು, ಶಿಕ್ಷಣವನ್ನು ಹಂತ ಹಂತವಾಗಿ ಖಾಸಗೀಕರಣಗೊಳಿಸಲಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು. ಎಸ್ಎಫ್ಐನ ಜಿಲ್ಲಾ ಸಂಚಾಲಕ ಕುಂದಲಗುರ್ಕಿ ಮುನೀಂದ್ರ ಮಾತನಾಡಿ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳನ್ನು ಕಡೆಗಣಿಸಿದ ಜಗತ್ತಿನ ಯಾವುದೇ ದೇಶ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ದೇಶದಲ್ಲಿ ಶಿಕ್ಷಣಕ್ಕೆ ರಾಷ್ಟ್ರೀಯ ಆದಾಯದಲ್ಲಿ ಶೇ.6 ರಷ್ಟು ಹಣ ಮೀಸಲಿಡಬೇಕೆಂದು ಒತ್ತಾಯಿಸುತ್ತಿದ್ದರೂ, ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿಲ್ಲ. ಕೇವಲ ಶೇ. 4.1 ರಷ್ಟು ಹಣವನ್ನು ಮಾತ್ರ ಮೀಸಲಿಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರದ ಉದಾರೀಕರಣ, ಜಾಗತೀಕರಣ, ಖಾಸಗೀಕರಣ ನೀತಿಯ ಪರಿಣಾಮವಾಗಿ ದೇಶದಲ್ಲಿ ಬಡಜನರು ದಿವಾಳಿಯಾಗುತ್ತಿದ್ದಾರೆ. ಮತ್ತೊಂದೆಡೆ ಶಿಕ್ಷಣಕ್ಕೆ ನೀಡುತ್ತಿರುವ ಹಣ ಕಡಿಮೆಯಾಗುತ್ತದೆ. ಇದರಿಂದ ಶೇ.58 ರಿಂದ ಶೇ.63.88 ರಷ್ಟು ಖಾಸಗಿ ಶಿಕ್ಷಣ ಸಂಸ್ಥೆಗಳು ಹೆಚ್ಚಳವಾಗಿವೆ. ಡೊನೇಷನ್ ಹೆಸರಿನಲ್ಲಿ ಹಣ ಲೂಟಿ ಮಾಡುತ್ತಿದ್ದು ಬಡ ಜನರು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಲು ಸಾಧ್ಯವಾಗದೆ ತೊಂದರೆ ಅನುಭವಿಸುತ್ತಿದ್ದಾರೆ ಎಂದರು.
ಕೂಡಲೇ ಕೇಂದ್ರ ಸರ್ಕಾರ ದೇಶದ ಒಟ್ಟು ರಾಷ್ಟ್ರೀಯ ಆದಾಯದಲ್ಲಿ ಶೇ.6 ರಷ್ಟು ಹಣವನ್ನು ಶಿಕ್ಷಣಕ್ಕೆ ಮೀಸಲಿಡಬೇಕು. ಒಕ್ಕೂಟದ ವ್ಯವಸ್ಥೆಗೆ ಮಾರಕವಾಗಿರುವ ಶಿಕ್ಷಣದ ಕೇಂದ್ರೀಕರಣ ಹಾಗೂ ವ್ಯಾಪಾರೀಕರಣ ನೀತಿಗಳನ್ನು ಕೈ ಬಿಡಬೇಕು. ರಾಜ್ಯದಲ್ಲಿ 22 ಖಾಸಗಿ ವಿವಿಗಳಿಗೆ ನೀಡಿರುವ ಅನುಮತಿಯನ್ನು ರದ್ದುಗೊಳಿಸಬೇಕು. ವಿದ್ಯಾರ್ಥಿಗಳ ಪ್ರಜಾಸತ್ಮಾಕ ಹಕ್ಕುಗಳನ್ನು ರಕ್ಷಿಸುವುದರ ಜತೆಗೆ ವಿದ್ಯಾರ್ಥಿ ಸಂಘಗಳಿಗೆ ಚುನಾವಣೆಯನ್ನು ನಡೆಸಬೇಕೆಂದು ಒತ್ತಾಯಿಸಿದರು.